ADVERTISEMENT

ಕೋಲಾರ: ಗ್ರಾಮೀಣ ಭಾಗಕ್ಕೆ ಬಸ್‌ ಸೇವೆ ಕಲ್ಪಿಸುವಂತೆ ಪ್ರತಿಭಟನೆ

ಅಧಿಕಾರಿಗಳಿಗೆ ದೂರು ಕೊಟ್ಟರೂ ಸಮಸ್ಯೆ ಬಗೆಹರಿದಿಲ್ಲ: ರೈತ ಸಂಘ ಸದಸ್ಯರ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2021, 15:10 IST
Last Updated 14 ಸೆಪ್ಟೆಂಬರ್ 2021, 15:10 IST
ಗ್ರಾಮೀಣ ಪ್ರದೇಶಕ್ಕೆ ಬಸ್‌ ಸೇವೆ ಕಲ್ಪಿಸುವಂತೆ ಒತ್ತಾಯಿಸಿ ರೈತ ಸಂಘದ ಸದಸ್ಯರು ಕೋಲಾರದಲ್ಲಿ ಮಂಗಳವಾರ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಿದರು
ಗ್ರಾಮೀಣ ಪ್ರದೇಶಕ್ಕೆ ಬಸ್‌ ಸೇವೆ ಕಲ್ಪಿಸುವಂತೆ ಒತ್ತಾಯಿಸಿ ರೈತ ಸಂಘದ ಸದಸ್ಯರು ಕೋಲಾರದಲ್ಲಿ ಮಂಗಳವಾರ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಿದರು   

ಕೋಲಾರ: ಜಿಲ್ಲೆಯ ಗ್ರಾಮೀಣ ಪ್ರದೇಶಕ್ಕೆ ಸಮರ್ಪಕ ಬಸ್‌ ಸೇವೆ ಕಲ್ಪಿಸುವಂತೆ ಒತ್ತಾಯಿಸಿ ರೈತ ಸಂಘದ ಸದಸ್ಯರು ಇಲ್ಲಿ ಮಂಗಳವಾರ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಿದರು.

‘ಗ್ರಾಮೀಣ ಪ್ರದೇಶದಲ್ಲಿ ಸಾಕಷ್ಟು ಹಳ್ಳಿಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ ಸೇವೆಯಿಲ್ಲ. ಮತ್ತೊಂದೆಡೆ ಬಸ್ ಚಾಲಕರು ಸಾಕಷ್ಟು ಹಳ್ಳಿಗಳಲ್ಲಿ ಬಸ್‌ ನಿಲ್ಲಿಸುತ್ತಿಲ್ಲ. ಇದರಿಂದ ಸ್ಥಳೀಯ ವಿದ್ಯಾರ್ಥಿಗಳಿಗೆ ಹಾಗೂ ಜನರಿಗೆ ಸಮಸ್ಯೆಯಾಗುತ್ತಿದೆ. ಬಸ್‌ ಸೇವೆಗೆ ಒತ್ತಾಯಿಸಿ ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ದೂರು ನೀಡಿದರೂ ಸಮಸ್ಯೆ ಬಗೆಹರಿದಿಲ್ಲ’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

‘ಗ್ರಾಮೀಣ ಭಾಗದಿಂದ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರದಲ್ಲಿನ ಶಾಲಾ ಕಾಲೇಜುಗಳಿಗೆ ಪ್ರತಿನಿತ್ಯ ಸಾವಿರಾರು ವಿದ್ಯಾರ್ಥಿಗಳು ಬರುತ್ತಾರೆ. ಅಲ್ಲದೇ, ರೈತರು, ಕೂಲಿ ಕಾರ್ಮಿಕರು ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಿಗೆ ಬರುತ್ತಾರೆ. ಆದರೆ, ಹಳ್ಳಿಗಳು ಬಸ್‌ ಸೌಕರ್ಯದಿಂದ ವಂಚಿತರಾಗಿರುವುದರಿಂದ ಸ್ಥಳೀಯರಿಗೆ ತೊಂದರೆಯಾಗುತ್ತಿದೆ’ ಎಂದು ಸಂಘಟನೆ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ಹೇಳಿದರು.

ADVERTISEMENT

‘ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಖಾಸಗಿ ಬಸ್ ಮಾಲೀಕರ ಜತೆ ಶಾಮೀಲಾಗಿ ಹಳ್ಳಿಗಳನ್ನು ನಿರ್ಲಕ್ಷಿಸುತ್ತಿದ್ದಾರೆ. ನಷ್ಟ ಹಾಗೂ ರಸ್ತೆ ಅವ್ಯವಸ್ಥೆಯ ಸಬೂಬು ಹೇಳಿ ಗ್ರಾಮೀಣ ಭಾಗಕ್ಕೆ ಬಸ್‌ ಸೇವೆ ಕಲ್ಪಿಸಲು ಹಿಂದೇಟು ಹಾಕುತ್ತಿದ್ದಾರೆ. ಅಧಿಕಾರಿಗಳಿಗೆ ಗ್ರಾಮೀಣ ಜನರ ಸಂಕಷ್ಟದ ಅರಿವಿಲ್ಲ. ಅವರಿಗೆ ಜನ ಹಿತಕ್ಕಿಂತ ಲಾಭವೇ ಮುಖ್ಯವಾಗಿದೆ’ ಎಂದು ಕಿಡಿಕಾರಿದರು.

‘ಕೆಎಸ್‌ಆರ್‌ಟಿಸಿ ಬಸ್‌ ಸೌಕರ್ಯವಿಲ್ಲದ ಕಾರಣ ಗ್ರಾಮೀಣ ಜನರು ಖಾಸಗಿ ಬಸ್‌ಗಳು, ಸರಕು ಸಾಗಣೆ ವಾಹನಗಳಲ್ಲಿ ಸಂಚರಿಸುತ್ತಿದ್ದಾರೆ. ಸರಕು ಸಾಗಣೆ ವಾಹನಗಳು ಮತ್ತು ಖಾಸಗಿ ಬಸ್‌ಗಳಲ್ಲಿ ನಿಗದಿತ ಮಿತಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಕರೆದೊಯ್ಯಲಾಗುತ್ತಿದೆ. ಇದರಿಂದ ಆಗಾಗ್ಗೆ ಅಪಘಾತಗಳು ಸಂಭವಿಸುತ್ತಿದ್ದು, ಜನರ ಪ್ರಾಣಕ್ಕೆ ರಕ್ಷಣೆ ಇಲ್ಲವಾಗಿದೆ’ ಎಂದು ಆತಂಕ ವ್ಯಕ್ತಪಡಿಸಿದರು.

ಸಮಸ್ಯೆಯ ಅರಿವಿಲ್ಲ: ‘ದೇಶಕ್ಕೆ ಸ್ವಾತಂತ್ರ್ಯ ಬಂದು 7 ದಶಕವಾದರೂ ಹಳ್ಳಿಗಳಿಗೆ ಬಸ್‌ ಸೌಕರ್ಯವಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಕೋಟ್ಯಂತರ ರೂಪಾಯಿ ಅನುದಾನ ಬರುತ್ತಿದ್ದರೂ ಗ್ರಾಮೀಣ ರಸ್ತೆಗಳು ಅಭಿವೃದ್ಧಿಯಾಗಿಲ್ಲ. ಸಮರ್ಪಕ ಸಾರಿಗೆ ವ್ಯವಸ್ಥೆಯಿಲ್ಲದೆ ಗ್ರಾಮೀಣ ಜನರು ಪ್ರತಿನಿತ್ಯ ಬವಣೆ ಪಡುತ್ತಿದ್ದಾರೆ. ಆದರೆ, ಜನಪ್ರತಿನಿಧಿಗಳಿಗೆ ಜನರ ಸಮಸ್ಯೆಯ ಅರಿವಿಲ್ಲ’ ಎಂದು ಪ್ರತಿಭಟನಾಕಾರರು ಗುಡುಗಿದರು.

‘ಹಳ್ಳಿಗಳಿಗೆ ಬಸ್‌ ಸೌಕರ್ಯ ಕಲ್ಪಿಸದ ಕೆಎಸ್‌ಆರ್‌ಟಿಸಿ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು. ಆಟೊ, ಖಾಸಗಿ ಬಸ್‌ಗಳು ಹಾಗೂ ಸರಕು ಸಾಗಣೆ ವಾಹನಗಳ ಮಾಲೀಕರ ಆಟಾಟೋಪಕ್ಕೆ ಕಡಿವಾಣ ಹಾಕಬೇಕು. ಕೆಎಸ್‌ಆರ್‌ಟಿಸಿಯಲ್ಲಿ ಆದಾಯ ಸೋರಿಕೆ ತಡೆಯಬೇಕು. ಗ್ರಾಮೀಣ ಭಾಗದ ರಸ್ತೆಗಳನ್ನು ಅಭಿವೃದ್ಧಿಪಡಿಸಬೇಕು’ ಎಂದು ಒತ್ತಾಯಿಸಿದರು.

ಸಂಘಟನೆಯ ರಾಜ್ಯ ಘಟಕದ ಸಂಚಾಲಕ ನಾಗರಾಜಗೌಡ, ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್‌, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಎ.ನಳಿನಿಗೌಡ, ತಾಲ್ಲೂಕು ಘಟಕದ ಅಧ್ಯಕ್ಷ ಇ.ಮಂಜುನಾಥ್‌, ಸದಸ್ಯರಾದ ಶಿವಾರೆಡ್ಡಿ, ಯಲ್ಲಪ್ಪ, ಹರೀಶ್, ಕಿರಣ್, ರಾಮಕೃಷ್ಣಪ್ಪ, ಚಂದ್ರಪ್ಪ, ನಾಗೇಶ್, ತಿಮ್ಮಣ್ಣ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.