ADVERTISEMENT

ಕೋಲಾರ: ರೈತರ ಸಬಲೀಕರಣಕ್ಕೆ ಅಭಿಯಾನ

ವಿಕಸಿತ ಕೃಷಿ ಸಂಕಲ್ಪ ಅಭಿಯಾನಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಚಾಲನೆ

​ಪ್ರಜಾವಾಣಿ ವಾರ್ತೆ
Published 29 ಮೇ 2025, 14:40 IST
Last Updated 29 ಮೇ 2025, 14:40 IST
ಕೋಲಾರದಲ್ಲಿ ಗುರುವಾರ ವಿಕಸಿತ ಕೃಷಿ ಸಂಕಲ್ಪ ಅಭಿಯಾನ -2025 ಹಾಗೂ ಮುಂಗಾರು ಪೂರ್ವ ಕೃಷಿ ಅಭಿಯಾನಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಏಕರೂಪ್ ಕೌರ್ ಚಾಲನೆ ನೀಡಿದರು
ಕೋಲಾರದಲ್ಲಿ ಗುರುವಾರ ವಿಕಸಿತ ಕೃಷಿ ಸಂಕಲ್ಪ ಅಭಿಯಾನ -2025 ಹಾಗೂ ಮುಂಗಾರು ಪೂರ್ವ ಕೃಷಿ ಅಭಿಯಾನಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಏಕರೂಪ್ ಕೌರ್ ಚಾಲನೆ ನೀಡಿದರು   

ಕೋಲಾರ: 'ಕಾಲಕ್ಕೆ ತಕ್ಕಂತೆ ಬೆಳೆಗಳನ್ನು ಬೆಳೆಯುವ ಕುರಿತು ಜಾಗೃತಿ ಮೂಡಿಸಿದರೆ ರೈತರು ಉತ್ತಮ ಆದಾಯ ಗಳಿಸುತ್ತಾರೆ. ವಿಕಸಿತ ಅಭಿಯಾನದಲ್ಲಿ ನೀಡುವ ತರಬೇತಿಯಿಂದ ರೈತರು ಸಬಲೀಕರಣ ಕಾಣಬಹುದು’ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಏಕರೂಪ್ ಕೌರ್ ಹೇಳಿದರು.

ಜಿಲ್ಲಾಡಳಿತ ಭವನದ ಆವರಣದಲ್ಲಿ ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ಕೃಷಿ, ತೋಟಗಾರಿಕೆ. ರೇಷ್ಮೆ, ಮೀನುಗಾರಿಕೆ, ಪಶುಸಂಗೋಪನಾ ಇಲಾಖೆ ಸಹಯೋಗದೊಂದಿಗೆ ಗುರುವಾರ ಹಮ್ಮಿಕೊಂಡಿದ್ದ ವಿಕಸಿತ ಕೃಷಿ ಸಂಕಲ್ಪ ಅಭಿಯಾನ -2025 ಹಾಗೂ ಮುಂಗಾರು ಪೂರ್ವ ಕೃಷಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

‘ಕೇಂದ್ರ, ರಾಜ್ಯ ಸರ್ಕಾರ ವಿವಿಧ ಇಲಾಖೆಗಳ ಮೂಲಕ ರೈತರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿವೆ. ಅದನ್ನು ಸಮರ್ಪಕವಾಗಿ ಅರ್ಹ ಫಲಾನುಭವಿಗಳಿಗೆ ಮನೆ ಬಾಗಿಲಿಗೆ ತಲುಪಿಸಿದರೆ ಉದ್ದೇಶ ಈಡೇರುತ್ತದೆ. ಕೇಂದ್ರ ಸರ್ಕಾರ ಕೃಷಿ ಇಲಾಖೆಯಿಂದ ಮುಂಗಾರು ಹಂಗಾಮಿನ ಅಂಗವಾಗಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ಜೂನ್ 12 ರವರೆಗೆ ನಡೆಸುತ್ತಿದೆ. ಇದರ ಪ್ರಯೋಜನವನ್ನು ರೈತದು ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.

ADVERTISEMENT

‘1,500 ರಿಂದ 2,000 ತಂಡಗಳ ಮೂಲಕ ದೇಶದ 700 ಜಿಲ್ಲೆಗಳಲ್ಲಿನ ಈ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದೆ. ಇದಕ್ಕೆ ಕೋಲಾರ ಜಿಲ್ಲೆಯೂ ಆಯ್ಕೆಯಾಗಿರುವುದು ಸಂತಸ ತಂದಿದೆ’ ಎಂದು ಎಂದರು.

100 ಗ್ರಾ.ಪಂಗಳಲ್ಲಿ ಅಭಿಯಾನ: ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಶಿವಾನಂದ ಹೊಂಗಲ ಮಾತನಾಡಿ, ‘ಜಿಲ್ಲೆಯ 100 ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಕೃಷಿ ವಿಶ್ವವಿದ್ಯಾಲಯ, ವಿಜ್ಞಾನ ಕೇಂದ್ರಗಳು, ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ ಹಾಗೂ ಆತ್ಮ ಯೋಜನೆ ಸಹಯೋಗದೊಂದಿಗೆ ಮುಂಗಾರು ಹಂಗಾಮಿನಲ್ಲಿ ಕೃಷಿಕರಿಗೆ ಹೊಸ ತಾಂತ್ರಿಕತೆಗಳು ಲಭ್ಯವಾಗುವಂತೆ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಏರ್ಪಡಿಸಲಾಗಿದೆ’ ಎಂದು ಹೇಳಿದರು.

‘ಮುಂಗಾರು ಬೆಳೆಗಳಿಗೆ ಸಂಬಂಧಿಸಿದ ಸುಧಾರಿತ ಮತ್ತು ಆಧುನಿಕ ತಂತ್ರಜ್ಞಾನಗಳ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಲಾಗುವುದು. ಸರ್ಕಾರಿ ಯೋಜನೆಗಳ ಕುರಿತು ಮಾಹಿತಿಯನ್ನು ಒದಗಿಸುವುದು. ಬೆಳೆ ಮತ್ತು ಕೃಷಿ ಪರಿಕರಗಳ ಆಯ್ಕೆಗಳ ಬಗ್ಗೆ ಮಾಹಿತಿ ನೀಡುವುದು, ಮಣ್ಣಿನ ಆರೋಗ್ಯ ಕಾರ್ಡ್‍ಗಳ ಬಳಕೆಯನ್ನು ಉತ್ತೇಜಿಸುವುದು ಮತ್ತು ಮಣ್ಣು ಪರೀಕ್ಷೆ ಆಧಾರಿತ ಪರಿಕರ ಮತ್ತು ಬೆಳೆ ಆಯ್ಕೆ ಮಾಡಲಾಗುವುದು’ ಎಂದರು.

ರಸಗೊಬ್ಬರಗಳ ವಿವೇಚನಾಯುಕ್ತ ಬಳಕೆಯನ್ನು ಉತ್ತೇಜಿಸಿ ಉತ್ತಮ ಕೃಷಿ ಪದ್ಧತಿಗಳ ಮೇಲೆ ಒತ್ತು ನೀಡುವುದು. ಭವಿಷ್ಯದ ಸಂಶೋಧನೆಯನ್ನು ರೂಪಿಸಲು ರೈತರಿಂದ ಕೃಷಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಅಭಿಯಾನದ ಉದ್ದೇಶವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎಂ.ಆರ್.ರವಿ, ಜಿಲ್ಲಾ ಪಂಚಾಯಿತಿ ಸಿಇಒ ಪ್ರವೀಣ್ ಪಿ.ಬಾಗೇವಾಡಿ, ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ರಾಘವೇಂದ್ರ ಮೆಸ್ತಾ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಎಂ.ಆರ್‌.ಸುಮಾ, ಅಭಿಯಾನದ ನೋಡಲ್ ಅಧಿಕಾರಿ ಡಿ.ವಿ.ಕೋಲೆಕರ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಕುಮಾರಸ್ವಾಮಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.