ADVERTISEMENT

ಬಿಜೆಪಿ ಮುಖಂಡರ ವಿರುದ್ಧ ಪ್ರಕರಣ

​ಪ್ರಜಾವಾಣಿ ವಾರ್ತೆ
Published 5 ಜನವರಿ 2020, 13:21 IST
Last Updated 5 ಜನವರಿ 2020, 13:21 IST

ಕೋಲಾರ: ಪೌರತ್ವ (ತಿದ್ದುಪಡಿ) ಕಾಯ್ದೆ ಬೆಂಬಲಿಸಿ ಬಿಜೆಪಿಯು ಇಲ್ಲಿ ಶನಿವಾರ ಹಮ್ಮಿಕೊಂಡಿದ್ದ ಬಹಿರಂಗ ಸಭೆಗೂ ಮುನ್ನ ನಡೆದ ಅಹಿತಕರ ಘಟನೆ ಸಂಬಂಧ ಬಿಜೆಪಿ ನಗರ ಘಟಕದ ಅಧ್ಯಕ್ಷ ತಿಮ್ಮರಾಯಪ್ಪ ಸೇರಿದಂತೆ ಹಲವರ ವಿರುದ್ಧ ಪೊಲೀಸರು ಭಾನುವಾರ ಪ್ರಕರಣ ದಾಖಲಿಸಿದ್ದಾರೆ.

ಬಿಜೆಪಿ, ವಿಶ್ವ ಹಿಂದೂ ಪರಿಷತ್‌, ಬಜರಂಗದಳ, ಶ್ರೀರಾಮ ಸೇನೆ ಸಂಘಟನೆಗಳನ್ನು ಒಳಗೊಂಡ ಭಾರತೀಯ ಹಿತರಕ್ಷಣಾ ವೇದಿಕೆ ಸದಸ್ಯರು ಬಹಿರಂಗ ಸಭೆಗೂ ಮುನ್ನ ಪ್ರವಾಸಿ ಮಂದಿರದ ಬಳಿ ನಿಯಮಬಾಹಿರವಾಗಿ ಗುಂಪುಗೂಡಿದ, ಮೆರವಣಿಗೆ ಮಾಡಲೆತ್ನಿಸಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತಂದ, ಪೊಲೀಸ್‌ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

ತಿಮ್ಮರಾಯಪ್ಪ ಮತ್ತು ಭಾರತೀಯ ಹಿತರಕ್ಷಣಾ ವೇದಿಕೆ ಕಾರ್ಯದರ್ಶಿ ನಾರಾಯಣಸ್ವಾಮಿ ಎಂಬುವರು ಬಹಿರಂಗ ಸಭೆಗೆ ಪೊಲೀಸರ ಅನುಮತಿ ಪಡೆದಿದ್ದರು. ಹೀಗಾಗಿ ಪೊಲೀಸರು ಅವರಿಬ್ಬರನ್ನು ಪ್ರಕರಣದ ಪ್ರಮುಖ ಆರೋಪಿಗಳಾಗಿ ಪರಿಗಣಿಸಿದ್ದಾರೆ. ಅಲ್ಪಸಂಖ್ಯಾತ ಸಮುದಾಯದವರು ಕ್ಲಾಕ್‌ಟವರ್‌ ವೃತ್ತದಲ್ಲಿ ಕಾನೂನುಬಾಹಿರವಾಗಿ ಗುಂಪುಗೂಡಿದ ಸಂಬಂಧ ಪೊಲೀಸರು ಪ್ರತ್ಯೇಕ ಪ್ರಕರಣ ದಾಖಲಿಸಿದ್ದಾರೆ.

ADVERTISEMENT

ಲಾಠಿ ಪ್ರಹಾರ ನಡೆದ ಪ್ರವಾಸಿ ಮಂದಿರ ವೃತ್ತ ಹಾಗೂ ಕ್ಲಾಕ್‌ಟವರ್‌ ವೃತ್ತದಲ್ಲಿನ ಸಿ.ಸಿ ಕ್ಯಾಮೆರಾಗಳಲ್ಲಿ ಸೆರೆಯಾಗಿರುವ ಇಡೀ ಘಟನೆಯ ದೃಶ್ಯಾವಳಿಯನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ. ಶನಿವಾರದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಜಿಲ್ಲಾ ಕೇಂದ್ರದಲ್ಲಿ ಪೊಲೀಸ್‌ ಭದ್ರತೆ ಹೆಚ್ಚಿಸಲಾಗಿದೆ. ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಹಾಗೂ ತುಮಕೂರು ಜಿಲ್ಲೆಯಿಂದ ಹೆಚ್ಚುವರಿ ಪೊಲೀಸ್‌ ಸಿಬ್ಬಂದಿಯನ್ನು ಕರೆಸಿಕೊಳ್ಳಲಾಗಿದೆ. ಅಲ್ಲದೇ, ಜಿಲ್ಲೆಯಾದ್ಯಂತ ಮದ್ಯದ ವಹಿವಾಟು ನಿರ್ಬಂಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.