ADVERTISEMENT

ಸಂಸದರ ವಿರುದ್ಧ ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 6 ಜನವರಿ 2020, 14:26 IST
Last Updated 6 ಜನವರಿ 2020, 14:26 IST

ಕೋಲಾರ: ಪೌರತ್ವ (ತಿದ್ದುಪಡಿ) ಕಾಯ್ದೆ ಬೆಂಬಲಿಸಿ ಬಿಜೆಪಿಯು ಇಲ್ಲಿ ಜ.4ರಂದು ಹಮ್ಮಿಕೊಂಡಿದ್ದ ಬಹಿರಂಗ ಸಭೆಗೂ ಮುನ್ನ ನಡೆದ ಅಹಿತಕರ ಘಟನೆ ಸಂಬಂಧ ಸಂಸದ ಎಸ್‌.ಮುನಿಸ್ವಾಮಿ ಅವರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.

ಬಹಿರಂಗ ಸಭೆಗೆ ಅನುಮತಿ ಪಡೆದಿದ್ದ ಬಿಜೆಪಿ ನಗರ ಘಟಕದ ಅಧ್ಯಕ್ಷ ತಿಮ್ಮರಾಯಪ್ಪ ಅವರ ವಿರುದ್ಧ ಲಾಠಿ ಪ್ರಹಾರ ನಡೆದ ದಿನವೇ ಪ್ರಕರಣ ದಾಖಲಿಸಲಾಗಿತ್ತು. ಘಟನಾ ಸ್ಥಳವಾದ ಪ್ರವಾಸಿ ಮಂದಿರ ವೃತ್ತದ ಬಳಿಯ ಸಿ.ಸಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯಾವಳಿ ಪರಿಶೀಲಿಸಿದ ಪೊಲೀಸರು ಸಂಸದ ಮುನಿಸ್ವಾಮಿ ಸೇರಿದಂತೆ 18 ಮಂದಿಯನ್ನು ಆರೋಪಿಗಳಾಗಿ ಪರಿಗಣಿಸಿ ಪ್ರಕರಣ ದಾಖಲಿಸಿದ್ದಾರೆ.

ವಿಶ್ವ ಹಿಂದೂ ಪರಿಷತ್‌, ಬಜರಂಗದಳ, ಶ್ರೀರಾಮಸೇನೆ, ಭಾರತೀಯ ಹಿತರಕ್ಷಣಾ ವೇದಿಕೆ ಸದಸ್ಯರು ಆರೋಪಿಗಳ ಪಟ್ಟಿಯಲ್ಲಿದ್ದಾರೆ. ಸಂಸದರು 12ನೇ ಆರೋಪಿಯಾಗಿದ್ದಾರೆ. ಕಾನೂನುಬಾಹಿರವಾಗಿ ಗುಂಪು ಕಟ್ಟಿಕೊಂಡು ಶಾಂತಿ ಸುವ್ಯವಸ್ಥೆಗೆ ಧಕ್ಕೆ ತಂದ, ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಮತ್ತು ಪೊಲೀಸ್‌ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.