
ಕೋಲಾರ: ಬಾಲ್ಯವಿವಾಹ ಪ್ರಕರಣಗಳ ಕಡಿವಾಣಕ್ಕೆ ಎಲ್ಲಾ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿ ಸೂಚಿಸಿದರು.
ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಸಮಿತಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು
ಮಹಿಳೆಯರ ಮೇಲಾಗುತ್ತಿರುವ ಕೌಟುಂಬಿಕ ಹಿಂಸೆಯ ಪ್ರಕರಣಗಳನ್ನು ಇತ್ಯರ್ಥಗೊಳಿಸುವಲ್ಲಿ ತಳಮಟ್ಟದಲ್ಲಿ ಸಾಂತ್ವನ ಕೇಂದ್ರಗಳು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಬಹು ಮುಖ್ಯ ಪಾತ್ರವನ್ನು ವಹಿಸುತ್ತಿದ್ದಾರೆ. ಈ ಸಂಬಂಧ ಎಲ್ಲಾ ಇಲಾಖೆಗಳು ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಬೇಕು ಎಂದರು.
ಮಹಿಳೆಯರ ಮತ್ತು ಮಕ್ಕಳ ಅಕ್ರಮ ಸಾಗಣೆ ಸಂಬಂಧಿಸಿದಂತೆ ಪ್ರತಿ ಗ್ರಾಮ ಪಂಚಾಯಿತಿ ಹಂತದಲ್ಲಿ ಕಾವಲು ಸಮಿತಿಗಳಿವೆ. ಮಹಿಳೆ ಮತ್ತು ಮಕ್ಕಳ ಅಪಹರಣಗಳು, ಪೋಕ್ಸೊ, ಬಾಲ್ಯವಿವಾಹ ಹಾಗೂ ವಿವಾಹೇತರ ಸಂಬಂಧಗಳಂತಹ ಪ್ರಕರಣಗಳು ಕಳ್ಳ ಸಾಗಣೆಯೊಂದಿಗೆ ಸಹ ಸಂಬಂಧ ಹೊಂದಿರುವುದರಿಂದ ಇಂತಹ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬರುವ ಪ್ರದೇಶಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಗುರುತಿಸಿ ರಕ್ಷಣೆಗೆ ಕ್ರಮ ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಯಾವುದೇ ಕಾರಣಕ್ಕೂ ಮಹಿಳೆಯರ ಮತ್ತು ಮಕ್ಕಳ ಅಕ್ರಮ ಸಾಗಣೆ ಆಗದಂತೆ ಎಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿಗಳು ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು. ಪ್ರತಿ ತಿಂಗಳು ಈ ಕುರಿತು ಪ್ರಗತಿ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದರು.
ರಾಜ್ಯ ಲಿಂಗಾನುಪಾತವು ಜಿಲ್ಲಾ ಲಿಂಗಾನುಪಾತಕ್ಕಿಂತ ಹೆಚ್ಚುವರಿ ಆಗಿದೆ ಮತ್ತು ಮುಳಬಾಗಿಲು ತಾಲ್ಲೂಕಿನಲ್ಲಿ ಗಣನೀಯ ಕಡಿಮೆಯಾಗಿರುವುದು ಕಳವಳಕ್ಕೆ ಕಾರಣವಾಗಿದೆ ಎಂದರು.
ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧಗಳಿಂದಾಗಿ ಯುವತಿಯರಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ಹಂತ ತಲುಪುತ್ತಿದ್ದಾರೆ. ಪೋಕ್ಸೊ ಪ್ರಕರಣಗಳು ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಾಲಾ-ಕಾಲೇಜುಗಳಲ್ಲಿ ಅರಿವು ಕಾರ್ಯಕ್ರಮ ಮತ್ತು ಕಾರ್ಯಾಗಾರಗಳನ್ನು ಶಾಲಾ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಬೇಕು ಎಂದು ಹೇಳಿದರು.
ಸ್ಥಾನಿಕವಾಗಿ ಭೇಟಿ ನೀಡಿ ಫಲಾನುಭವಿಗಳ ಸರ್ವೆ ಮಾಡಿ ವರದಿಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಪ್ರವೀಣ್ ಪಿ.ಬಾಗೇವಾಡಿ, ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆರ್.ನಟೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಂ.ನಾರಾಯಣಸ್ವಾಮಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ನಿರೂಪಣಾಧಿಕಾರಿ ನಾಗರತ್ನ, ಜಿಲ್ಲಾ ಆರೋಗ್ಯ ಸರ್ವೇಕ್ಷಣಾಧಿಕಾರಿ ಡಾ.ಚಾರಿಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಬ್ಬಂದಿ, ವಿವಿಧ ಸಮಿತಿ ಸದಸ್ಯರು ಸಭೆಯಲ್ಲಿ ಇದ್ದರು.
- 40 ಪ್ರಕರಣಗಳು ಬಾಕಿ
ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಒಟ್ಟು 57 ಪ್ರಕರಣಗಳು ದಾಖಲಾಗಿದ್ದು 40 ಪ್ರಕರಣಗಳನ್ನು ಡಿಐಆರ್ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ನ್ಯಾಯಾಲಯದಿಂದ 7 ಪ್ರಕರಣ ಹಾಗೂ ಸಂರಕ್ಷಣಾಧಿಕಾರಿ ಅವರಿಂದ 10 ಪ್ರಕರಣಗಳು ಇತ್ಯರ್ಥವಾಗಿವೆ. ಒಟ್ಟು 17 ಪ್ರಕರಣಗಳು ಇತ್ಯರ್ಥವಾಗಿದ್ದು 40 ಪ್ರಕರಣಗಳು ಬಾಕಿ ಉಳಿದಿವೆ ಎಂದು ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.