ADVERTISEMENT

ಪಾದಚಾರಿ ಮಾರ್ಗದ ಒತ್ತುವರಿ ತೆರವು

ನಗರಸಭೆಯ ನೋಟಿಸ್‌ಗೂ ಜಗ್ಗದೆ ವರ್ತಕರ ವಹಿವಾಟು

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2020, 14:10 IST
Last Updated 3 ಮಾರ್ಚ್ 2020, 14:10 IST
ಕೋಲಾರದ ಕೆಇಬಿ ಜೋಡಿ ರಸ್ತೆಯ ಪಾದಚಾರಿ ಮಾರ್ಗದಲ್ಲಿನ ಅಂಗಡಿಗಳನ್ನು ನಗರಸಭೆ ಅಧಿಕಾರಿಗಳು ಮಂಗಳವಾರ ತೆರವುಗೊಳಿಸಿದರು.
ಕೋಲಾರದ ಕೆಇಬಿ ಜೋಡಿ ರಸ್ತೆಯ ಪಾದಚಾರಿ ಮಾರ್ಗದಲ್ಲಿನ ಅಂಗಡಿಗಳನ್ನು ನಗರಸಭೆ ಅಧಿಕಾರಿಗಳು ಮಂಗಳವಾರ ತೆರವುಗೊಳಿಸಿದರು.   

ಕೋಲಾರ: ನಗರದ ವಿವಿಧೆಡೆ ಪಾದಚಾರಿ ಮಾರ್ಗ ಒತ್ತುವರಿ ಮಾಡಿಕೊಂಡು ತೆರೆಯಲಾಗಿದ್ದ ಅಂಗಡಿಗಳನ್ನು ನಗರಸಭೆ ಅಧಿಕಾರಿಗಳು ಮಂಗಳವಾರ ತೆರವುಗೊಳಿಸಿದರು.

ಶ್ರೀ ನರಸಿಂಹರಾಜ (ಎಸ್‌ಎನ್‌ಆರ್‌) ಜಿಲ್ಲಾ ಆಸ್ಪತ್ರೆ ರಸ್ತೆ, ಇಟಿಸಿಎಂ ರಸ್ತೆ ಸೇರಿದಂತೆ ಹಲವೆಡೆ ವ್ಯಾಪಾರಿಗಳು ಪಾದಚಾರಿ ಮಾರ್ಗ ಒತ್ತುವರಿ ಮಾಡಿಕೊಂಡು ಅಂಗಡಿ ತೆರೆದಿದ್ದರು. ಇದರಿಂದ ಸಾರ್ವಜನಿಕರ ಓಡಾಟಕ್ಕೆ ಸಮಸ್ಯೆಯಾಗಿತ್ತು. ಈ ಸಂಬಂಧ ನಗರವಾಸಿಗಳು ನಗರಸಭೆಗೆ ದೂರು ಕೊಟ್ಟಿದ್ದರು.

ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ನಗರಸಭೆ ಅಧಿಕಾರಿಗಳು ಪಾದಚಾರಿ ಮಾರ್ಗದಲ್ಲಿನ ಅಂಗಡಿಗಳನ್ನು ತೆರವುಗೊಳಿಸುವಂತೆ ಮಾಲೀಕರಿಗೆ ನೋಟಿಸ್‌ ಜಾರಿ ಮಾಡಿದ್ದರು. ಆದರೆ, ಕೆಲ ವ್ಯಾಪಾರಿಗಳು ನೋಟಿಸ್‌ಗೂ ಜಗ್ಗದೆ ಪಾದಚಾರಿ ಮಾರ್ಗದಲ್ಲೇ ವಹಿವಾಟು ಮುಂದುವರಿಸಿದ್ದರು.

ADVERTISEMENT

ಹೀಗಾಗಿ ನಗರಸಭೆ ಆಯುಕ್ತ ಶ್ರೀಕಾಂತ್‌ ನೇತೃತ್ವದಲ್ಲಿ ಕಾರ್ಯಾಚರಣೆಗಿಳಿದ ಅಧಿಕಾರಿಗಳು ಪಾದಚಾರಿ ಮಾರ್ಗದಲ್ಲಿನ ಅಂಗಡಿಗಳನ್ನು ತೆರವು ಮಾಡಿದರು. ತರಕಾರಿ, ಗುಜರಿ, ಗ್ಯಾರೇಜ್, ಹಣ್ಣು, ಹೋಟೆಲ್ ಸೇರಿದಂತೆ ವಿವಿಧ ಅಂಗಡಿಗಳನ್ನು ತೆರವುಗೊಳಿಸಲಾಯಿತು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆಯುಕ್ತರು, ‘ಕೆಲ ದಿನಗಳ ಹಿಂದೆ ಪಾದಚಾರಿ ಮಾರ್ಗದಲ್ಲಿನ ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸಲಾಗಿತ್ತು. ಅಂಗಡಿ ಮಾಲೀಕರು ಪುನಃ ಅದೇ ಜಾಗದಲ್ಲಿ ಮಳಿಗೆ ತೆರದಿದ್ದರು. ಇದರಿಂದ ಸಾರ್ವಜನಿಕರಿಗೆ ಮತ್ತು ವಾಹನ ಸವಾರರಿಗೆ ತೊಂದರೆಯಾಗಿತ್ತು’ ಎಂದು ತಿಳಿಸಿದರು.

ಕ್ರಿಯಾ ಯೋಜನೆ: ‘ಬೇಸಿಗೆ ಎದುರಾಗಿದ್ದು, ನಗರದಲ್ಲಿನ ನೀರಿನ ಸಮಸ್ಯೆಯನ್ನು ಸಮರೋಪಾದಿಯಲ್ಲಿ ಎದುರಿಸಲು ಕ್ರಮ ಕೈಗೊಂಡಿದ್ದೇವೆ. ಸಮಸ್ಯೆ ಸಂಬಂಧ ಚರ್ಚಿಸಲು ಶಾಸಕರ ನೇತೃತ್ವದ ವಿಶೇಷ ಕಾರ್ಯಪಡೆಯ ಸಭೆ ಕರೆಯಲಾಗಿತ್ತು. ನೀರಿನ ಸಮಸ್ಯೆ ನಿವಾರಣೆಗೆ ಕ್ರಿಯಾ ಯೋಜನೆ ಸಿದ್ಧಪಡಿಸಿ ಸಲ್ಲಿಸಲಾಗುವುದು’ ಎಂದು ವಿವರಿಸಿದರು.

‘ನಗರದ ಬಹುತೇಕ ವಾರ್ಡ್‌ಗಳಲ್ಲಿ ನೀರಿನ ಸಮಸ್ಯೆಯಿದೆ. ಕೊಳವೆ ಬಾವಿಗಳ ದುರಸ್ತಿ ಮತ್ತು ಹೊಸದಾಗಿ ಕೊಳವೆ ಬಾವಿ ಕೊರೆಸಲು ತೀರ್ಮಾನಿಸಲಾಗಿದೆ. ಅಂತರ್ಜಲ ಕುಸಿತದಿಂದ ಬತ್ತಿ ಹೋಗಿರುವ ಕೊಳವೆ ಬಾವಿಗಳನ್ನು ಪುನಃ ಆಳಕ್ಕೆ ಕೊರೆಸಲು ನಿರ್ಧರಿಸಲಾಗಿದೆ’ ಎಂದು ಮಾಹಿತಿ ನೀಡಿದರು.

‘ಮಡೇರಹಳ್ಳಿ, ಅಮ್ಮೇರಹಳ್ಳಿ ಹಾಗೂ ಕೋಲಾರಮ್ಮ ಕೆರೆ ಅಂಗಳದಲ್ಲಿ ಕೊಳವೆ ಬಾವಿ ಕೊರೆಸಿ ನೀರು ಸರಬರಾಜು ಮಾಡಲಾಗುತ್ತಿದೆ. ಕೆಲ ವಾರ್ಡ್‌ಗಳಿಗೆ ಬೇಡಿಕೆಗೆ ತಕ್ಕಂತೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿಲ್ಲ. ನಗರಸಭೆಯಲ್ಲಿ 9 ಟ್ಯಾಂಕರ್‌ಗಳಿದ್ದು, ಕಡಿಮೆ ಬೆಲೆಗೆ ನೀರು ಖರೀದಿಸಲು ಸಾಧ್ಯವಾಗುತ್ತಿಲ್ಲ. ಖಾಸಗಿ ಟ್ಯಾಂಕರ್ ಮಾಲೀಕರಿಗೆ ಪ್ರತಿ ಲೋಡ್‌ಗೆ ₹ 550 ಪಾವತಿಸಲಾಗುತ್ತಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.