ADVERTISEMENT

ರೆಸಾರ್ಟ್‌ ವಾಸ್ತವ್ಯಕ್ಕೆ ಖಂಡನೆ: ಧರಣಿ

ಹಂದಿ– ಬೀದಿ ನಾಯಿ ಕಟ್ಟಿ ರಾಜಕೀಯ ಪಕ್ಷಗಳ ವಿರುದ್ಧ ರೈತ ಸಂಘ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 22 ಜುಲೈ 2019, 20:21 IST
Last Updated 22 ಜುಲೈ 2019, 20:21 IST
ಶಾಸಕರ ರೆಸಾರ್ಟ್‌ ವಾಸ್ತವ್ಯ ಖಂಡಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಕೋಲಾರದ ಮೆಕ್ಕೆ ವೃತ್ತದಲ್ಲಿ ಸೋಮವಾರ ಹಂದಿ– ಬೀದಿ ನಾಯಿಗಳನ್ನು ಕಟ್ಟಿ ಧರಣಿ ನಡೆಸಿದರು.
ಶಾಸಕರ ರೆಸಾರ್ಟ್‌ ವಾಸ್ತವ್ಯ ಖಂಡಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಕೋಲಾರದ ಮೆಕ್ಕೆ ವೃತ್ತದಲ್ಲಿ ಸೋಮವಾರ ಹಂದಿ– ಬೀದಿ ನಾಯಿಗಳನ್ನು ಕಟ್ಟಿ ಧರಣಿ ನಡೆಸಿದರು.   

ಕೋಲಾರ: ‘ರಾಜಕೀಯ ಪಕ್ಷಗಳ ಶಾಸಕರು ಹಾಗೂ ಸಚಿವರು ಜನರ ಕಷ್ಟಕ್ಕೆ ಸ್ಪಂದಿಸದೆ ರೆಸಾರ್ಟ್‌ನಲ್ಲಿ ಮೋಜು ಮಾಡುತ್ತಿದ್ದಾರೆ’ ಎಂದು ಆರೋಪಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಇಲ್ಲಿ ಸೋಮವಾರ ಧರಣಿ ನಡೆಸಿದರು.

‘ಬರಗಾಲ ಹಾಗೂ ಮಳೆ ಅನಾಹುತದಿಂದ ರೈತರು ಬೆಳೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ದನ ಕರುಗಳಿಗೆ ಹಾಗೂ ಜನರಿಗೆ ಕುಡಿಯಲು ನೀರಿಲ್ಲ. ಆದರೆ, ಮೂರೂ ರಾಜಕೀಯ ಪಕ್ಷಗಳ ಶಾಸಕರು ಜನರ ಸಮಸ್ಯೆಗೆ ಸ್ಪಂದಿಸದೆ ರೆಸಾರ್ಟ್‌ಗಳಲ್ಲಿ ಕಾಲ ಕಳೆಯುತ್ತಿದ್ದಾರೆ’ ಎಂದು ಮೆಕ್ಕೆ ವೃತ್ತದಲ್ಲಿ ಹಂದಿ, ನಾಯಿಗಳನ್ನು ಕಟ್ಟಿ ಆಕ್ರೋಶ ವ್ಯಕ್ತಪಡಿಸಿದರು.

‘ರಾಜ್ಯದೆಲ್ಲೆಡೆ ಹಿಂದಿನ ವರ್ಷ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ಮಳೆ ಕೈಕೊಟ್ಟಿದ್ದರಿಂದ ಕೋಟ್ಯಂತರ ರೂಪಾಯಿ ಬೆಳೆ ನಷ್ಟವಾಗಿದೆ. ಕರಾವಳಿ ಭಾಗದಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ಜನಜೀವನಕ್ಕೆ ತೊಂದರೆಯಾಗಿದೆ. ಆದರೆ, ಅಧಿಕಾರಕ್ಕಾಗಿ ನಾಯಿಗಳಂತೆ ಕಚ್ಚಾಡುತ್ತಿರುವ ಜನಪ್ರತಿನಿಧಿಗಳಿಗೆ ಜನರ ಕಷ್ಟದ ಅರಿವಿಲ್ಲ’ ಎಂದು ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ದೂರಿದರು.

ADVERTISEMENT

‘ಜನಪ್ರತಿನಿಧಿಗಳು ಅಧಿಕಾರಕ್ಕಾಗಿ ಪವಿತ್ರ ವಿಧಾನಸೌಧದಲ್ಲಿ ಅಸಭ್ಯ, ಅವ್ಯಾಚ್ಯ ಶಬ್ದ ಬಳಸಿ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ಮಳೆ ಕೊರತೆ ಕಾರಣಕ್ಕೆ ಕೃಷಿ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದಿದ್ದು, ಬರ ಪರಿಹಾರ ಕಾಮಗಾರಿಗಳು ಸ್ಥಗಿತಗೊಂಡಿವೆ’ ಎಂದು ಹೇಳಿದರು.

ಪ್ರಜಾಪ್ರಭುತ್ವ ಬುಡಮೇಲು: ‘ರಾಜ್ಯದಲ್ಲಿ ಕಾನೂನು ಬಡವರಿಗೆ ಮಾತ್ರ ಸೀಮಿತವಾಗಿದೆ. ರಾಜ್ಯಪಾಲರು ಬಹುಮತ ಸಾಬೀತುಪಡಿಸುವಂತೆ ಸರ್ಕಾರಕ್ಕೆ ಸೂಚಿಸಿದ್ದರೂ ಮುಖ್ಯಮಂತ್ರಿ ಅವರ ಆದೇಶ ಪಾಲಿಸದೆ ಸರ್ವಾಧಿಕಾರಿಯಂತೆ ನಡೆದುಕೊಳ್ಳುತ್ತಿದ್ದಾರೆ. ವಿಪಕ್ಷ ಸ್ಥಾನದಲ್ಲಿರುವ ಬಿಜೆಪಿಯು ಅಧಿಕಾರಕ್ಕಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡಿದೆ’ ಎಂದು ಧರಣಿನಿರತರು ವಾಗ್ದಾಳಿ ನಡೆಸಿದರು.

‘ಬರ ಪರಿಸ್ಥಿತಿ ಮತ್ತು ಮಳೆ ಅನಾಹುತದ ಪರಿಶೀಲನೆ ನಡೆಸಬೇಕಾದ ಮುಖ್ಯಮಂತ್ರಿ ಹಾಗೂ ಸಚಿವರು ರೆಸಾರ್ಟ್‌ ಸೇರಿಕೊಂಡಿದ್ದಾರೆ. ಜನಪ್ರತಿನಿಧಿಗಳು ಅಧಿಕಾರಕ್ಕಾಗಿ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡಿದ್ದಾರೆ. ಸ್ವಾರ್ಥಕ್ಕಾಗಿ ಜನರನ್ನು ಬಲಿಪಶು ಮಾಡಿದ್ದಾರೆ. ಬಿಜೆಪಿಯು ವಿಪಕ್ಷ ಸ್ಥಾನದ ಜವಾಬ್ದಾರಿ ನಿಭಾಯಿಸುವಲ್ಲಿ ವಿಫಲವಾಗಿದೆ’ ಎಂದು ಟೀಕಿಸಿದರು.

ಸರ್ಕಾರ ವಜಾಗೊಳಿಸಿ: ‘ರಾಜ್ಯದಲ್ಲಿ ರಾಜಕೀಯವಾಗಿ ಮತ್ತು ಆಡಳಿತಾತ್ಮಕವಾಗಿ ಅರಾಜಕತೆ ಸೃಷ್ಟಿಯಾಗಿದೆ. ಜವಾಬ್ದಾರಿ ಮರೆತಿರುವ ಶಾಸಕರ ಸದಸ್ಯತ್ವ ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು. ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಸರ್ಕಾರವನ್ನು ವಜಾಗೊಳಿಸಬೇಕು’ ಎಂದು ಒತ್ತಾಯಿಸಿದರು.

ರೈತ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ್‌, ಸದಸ್ಯರಾದ ಹರಿಕುಮಾರ್‌, ವೆಂಕಟೇಶ್, ತಿಮ್ಮಣ್ಣ, ಫಾರೂಕ್‌ ಪಾಷಾ, ಮಂಜುನಾಥ್, ರಂಜಿತ್, ಸಾಗರ್, ಆಂಜಿನಪ್ಪ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.