ADVERTISEMENT

ವಿಧಾನ ಪರಿಷತ್‌ ಚುನಾವಣೆ: ‘ಕಮಲ’ ಮುಡಿದ ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ

‘ಕೈ’ ಪಾಳಯದಲ್ಲಿ ಭಿನ್ನಮತ ಸ್ಫೋಟ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2021, 13:46 IST
Last Updated 27 ನವೆಂಬರ್ 2021, 13:46 IST
ಕಾಂಗ್ರೆಸ್‌ ಕೋಲಾರ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಪಕ್ಷ ತೊರೆದು ಬೆಂಗಳೂರಿನಲ್ಲಿ ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು
ಕಾಂಗ್ರೆಸ್‌ ಕೋಲಾರ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಪಕ್ಷ ತೊರೆದು ಬೆಂಗಳೂರಿನಲ್ಲಿ ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು   

ಕೋಲಾರ: ವಿಧಾನ ಪರಿಷತ್‌ ಚುನಾವಣಾ ಕಣ ರಂಗೇರಿರುವ ಬೆನ್ನಲ್ಲೇ ಕೈ ಪಾಳಯದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಕಾಂಗ್ರೆಸ್‌ ಕೋಲಾರ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಪಕ್ಷ ತೊರೆದು ಬಿಜೆಪಿ ಪಾಳಯ ಸೇರಿದ್ದಾರೆ.

ಕಾಂಗ್ರೆಸ್‌ ಟಿಕೆಟ್‌ನ ಪ್ರಬಲ ಆಕಾಂಕ್ಷಿಯಾಗಿದ್ದ ಅವರಿಗೆ ಅಂತಿಮ ಕ್ಷಣದಲ್ಲಿ ಟಿಕೆಟ್‌ ಕೈತಪ್ಪಿತ್ತು. ಅವರ ಬದಲಿಗೆ ಕಾಂಗ್ರೆಸ್‌ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಎಂ.ಎಲ್‌.ಅನಿಲ್‌ಕುಮಾರ್‌ ಅವರಿಗೆ ವರಿಷ್ಠರು ಮಣೆ ಹಾಕಿದ್ದರು. ಇದರಿಂದ ಅಸಮಾಧಾನಗೊಂಡಿದ್ದ ಚಂದ್ರಾರೆಡ್ಡಿ ನಾಮಪತ್ರ ಸಲ್ಲಿಕೆ ದಿನವೇ ಬಂಡಾಯದ ಬಾವುಟ ಹಾರಿಸಿ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರು.

ಮಳೆ ಅನಾಹುತದ ಸಮೀಕ್ಷೆಗಾಗಿ ಜಿಲ್ಲೆಗೆ ಬಂದಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಭಿನ್ನಮತ ಶಮನಕ್ಕೆ ಚಂದ್ರಾರೆಡ್ಡಿ ಅವರೊಂದಿಗೆ ಮಾತುಕತೆ ನಡೆಸಲು ಯತ್ನಿಸಿ ವಿಫಲರಾಗಿದ್ದರು. ಕಾಂಗ್ರೆಸ್‌ ಅಭ್ಯರ್ಥಿ ಅನಿಲ್‌ಕುಮಾರ್‌ರ ಮನವೊಲಿಕೆ ಯತ್ನಕ್ಕೂ ಮಣಿಯದ ಚಂದ್ರಾರೆಡ್ಡಿ ಅವರು ಬೆಂಬಲಿಗರೊಂದಿಗೆ ಬೆಂಗಳೂರಿನಲ್ಲಿ ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

ADVERTISEMENT

ಮತ್ತೊಂದೆಡೆ ವಿಧಾನ ಪರಿಷತ್‌ ಮಾಜಿ ಸಭಾಪತಿ ವಿ.ಆರ್‌.ಸುದರ್ಶನ್‌, ‘ನನಗೆ ಟಿಕೆಟ್ ನಿರಾಕರಿಸಿದ ಪಕ್ಷದ ನಿರ್ಧಾರದಿಂದ ಬೇಸರವಾಗಿದೆ. 2013 ಮತ್ತು 2018ರ ವಿಧಾನಸಭೆ ಚುನಾವಣೆ ಸೇರಿದಂತೆ ನನಗೆ ಪದೇಪದೇ ಅವಕಾಶ ನಿರಾಕರಿಸಿರುವುದು ಸ್ವಾಭಿಮಾನದ ಪ್ರಶ್ನೆ. ಆತ್ಮಗೌರವ ಕಳೆದುಕೊಂಡು ರಾಜಕಾರಣ ಮಾಡಲ್ಲ’ ಎಂದು ಗುಡುಗಿದ್ದಾರೆ.

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ಅವರು ಮಾಜಿ ಶಾಸಕ ವರ್ತೂರು ಪ್ರಕಾಶ್‌ ಅವರನ್ನು ಭೇಟಿಯಾಗಿ ಬಿಜೆಪಿಗೆ ಸೇರಿ ‍ಪರಿಷತ್‌ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಆಹ್ವಾನ ನೀಡಿದ್ದಾರೆ. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ವರ್ತೂರು ಪ್ರಕಾಶ್‌ರ ರಾಜಕೀಯ ನಡೆ ಕುತೂಹಲ ಮೂಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.