ADVERTISEMENT

ಜಾಗೃತಿ ಜಾಥಾ, ಪೀಠಿಕೆ ವಾಚನ

ಜಿಲ್ಲೆಯಲ್ಲಿ ವಿವಿಧೆಡೆ ಸಂವಿಧಾನ ದಿನಾಚರಣೆ, ಅಂಬೇಡ್ಕರ್‌ಗೆ ಮಾಲಾರ್ಪಣೆ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2025, 5:11 IST
Last Updated 27 ನವೆಂಬರ್ 2025, 5:11 IST
ಕೋಲಾರದಲ್ಲಿ ಬುಧವಾರ ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ಸಂವಿಧಾನ ಸಮರ್ಪಣಾ ದಿನದ ಜಾಗೃತಿ ಜಾಥಾಕ್ಕೆ ಶಾಸಕ ಕೊತ್ತೂರು ಮಂಜುನಾಥ್‌ ಚಾಲನೆ ನೀಡಿದರು
ಕೋಲಾರದಲ್ಲಿ ಬುಧವಾರ ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ಸಂವಿಧಾನ ಸಮರ್ಪಣಾ ದಿನದ ಜಾಗೃತಿ ಜಾಥಾಕ್ಕೆ ಶಾಸಕ ಕೊತ್ತೂರು ಮಂಜುನಾಥ್‌ ಚಾಲನೆ ನೀಡಿದರು   

ಕೋಲಾರ: ಜಿಲ್ಲೆಯ ಹಲವೆಡೆ ಬುಧವಾರ ಸಂವಿಧಾನ ದಿನಾಚರಣೆ ನಡೆಯಿತು. ಜನಪ್ರತಿನಿಧಿಗಳು, ಅಧಿಕಾರಿಗಳು, ವಿವಿಧ ಸಂಘಟನೆ ಮುಖಂಡರು ಹಾಗೂ ಜನಸಾಮಾನ್ಯ ಸಂವಿಧಾನದ ಪೀಠಿಕೆಯನ್ನು ವಾಚಿಸಿ, ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ಗೌರವ ತೋರಿದರು. ಪ್ರತಿಜ್ಞಾವಿಧಿ ಸ್ವೀಕರಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯು ಜಿಲ್ಲಾಡಳಿತ ಭವನದಲ್ಲಿ ಏರ್ಪಡಿಸಿದ್ದ ಸಂವಿಧಾನ ದಿನಾಚರಣೆಯಲ್ಲಿ ಶಾಸಕ ಕೊತ್ತೂರು ಮಂಜುನಾಥ್‌, ವಿಧಾನ ಪರಿಷತ್‌ ಸದಸ್ಯ ಅನಿಲ್‌ ಕುಮಾರ್‌, ಜಿಲ್ಲಾಧಿಕಾರಿ ಎಂ.ಆರ್‌.ರವಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು.

ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಂ.ಶ್ರೀನಿವಾಸನ್‌ ಸಂವಿಧಾನ ಪೀಠಿಕೆ ವಾಚಿಸಿದರು. ಸಂವಿಧಾನದ ಪೀಠಿಕೆಯ ಸಾಲುಗಳಿಗೆ ವಿದ್ಯಾರ್ಥಿಗಳು ಸೇರಿದಂತೆ ಸಭಾಂಗಣದಲ್ಲಿ ಇದ್ದ ಎಲ್ಲರೂ ದನಿಗೂಡಿಸಿದರು.

ADVERTISEMENT

ಪ್ರತಿಯೊಬ್ಬರೂ ಸಂವಿಧಾನ ಪುಸ್ತಕ ಓದಿ ತಿಳಿಯಬೇಕು. ವಿದ್ಯಾರ್ಥಿಗಳು ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಸ್ಫೂರ್ತಿಯಾಗಿಸಿಕೊಂಡು ಉನ್ನತ ವಿದ್ಯಾಭ್ಯಾಸ ಮಾಡಿ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಗಣ್ಯರು ಸಲಹೆ ಮಾಡಿದರು.

ಇದಕ್ಕೂ ಮೊದಲು ಸಂವಿಧಾನ ದಿನಾಚರಣೆ ಪ್ರಯುಕ್ತ ನಗರದ ಬಂಗಾರಪೇಟೆ ವೃತ್ತದ ಉದ್ಯಾನದಲ್ಲಿ ಜಿಲ್ಲಾಡಳಿತದಿಂದ ಬುಧವಾರ ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಬಳಿಕ ಸಂವಿಧಾನ ಪೀಠಿಕೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.

ಪ್ರವಾಸಿ ಮಂದಿರದ ಮುಂಭಾಗ ಜಾಗೃತಿ ಜಾಥಾಕ್ಕೆ ಶಾಸಕ ಕೊತ್ತೂರು ಮಂಜುನಾಥ್ ಚಾಲನೆ ನೀಡಿದರು. ಜಾಥಾದಲ್ಲಿ ಅಂಬೇಡ್ಕರ್‌ ಹಾಗೂ ಭಾರತಮಾತೆ ವೇಷಧಾರಿಗಳು ಗಮನ ಸೆಳೆದರು. ವಿದ್ಯಾರ್ಥಿಗಳು ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು. ನಗರದ ಪ್ರಮುಖ ವೃತ್ತಗಳಲ್ಲಿ ಸಾಗಿ ಕೊನೆಗೆ ನಚಿಕೇತನ ನಿಲಯದಲ್ಲಿ ಮುಕ್ತಾಯಗೊಂಡಿತು.

ವಿಧಾನ ಪರಿಷತ್‌ ಸದಸ್ಯ ಎಂ.ಎಲ್‌.ಅನಿಲ್‌ ಕುಮಾರ್‌, ಜಿಲ್ಲಾಧಿಕಾರಿ ಎಂ.ಆರ್.ರವಿ, ಜಿ.ಪಂ ಸಿಇಒ ಪ್ರವೀಣ್ ಪಿ.ಬಾಗೇವಾಡಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿಖಿಲ್‌ ಬಿ., ಉಪವಿಭಾಗಾಧಿಕಾರಿ ಡಾ.ಮೈತ್ರಿ, ಹೆಚ್ಚುವರಿ ಜಿಲ್ಲಾಧಿಕಾರಿ ಮಂಗಳಾ, ತಹಶೀಲ್ದಾರ್ ಡಾ.ನಯನಾ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಇದ್ದರು.

‌ಜಾಗೃತಿ ಜಾಥಾದಲ್ಲಿ ಘೋಷಣೆ ಕೂಗುತ್ತಾ ಸಾಗಿದ ವಿದ್ಯಾರ್ಥಿಗಳು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.