ಸಾಂದರ್ಭಿಕ ಚಿತ್ರ
ಕೆಜಿಎಫ್: ಜೀತಪದ್ಧತಿ ನಿರ್ಮೂಲನೆ ಮಾಡಬೇಕೆಂದು ದಿನಾಚರಣೆ ಮಾಡುತ್ತಿದ್ದಾರೆ. ಆದರೆ, ತಾಲ್ಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ 20 ತಿಂಗಳಿಂದ ಗುತ್ತಿಗೆ ನೌಕರರಿಗೆ ವೇತನ ಪಾವತಿಸದೆ ಜೀತದಾಳುಗಳಂತೆ ನಡೆಸಿಕೊಳ್ಳುತ್ತಿದ್ದಾರೆ ಎಂದು ಕೆಡಿಎಸ್‌ಎಸ್ ತಾಲ್ಲೂಕು ಅಧ್ಯಕ್ಷ ಎಸ್.ಶ್ರೀನಿವಾಸ್ ದೂರಿದ್ದಾರೆ.
ತಾಲ್ಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ಗುತ್ತಿಗೆ ನೌಕರರಾಗಿ ಸೇವೆ ಸಲ್ಲಿಸುತ್ತಿರುವವರು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರಿಗೆ ಸುಮಾರು 20 ತಿಂಗಳಿಂದ ಅಧಿಕಾರಿಗಳು ವೇತನ ಪಾವತಿ ಮಾಡಿಲ್ಲ. ಗುತ್ತಿಗೆ ನೌಕರರ ಪರವಾಗಿ ಕೆಲ ಸಂಘಟನೆಗಳು ಹೋರಾಟ ನಡೆಸಿದರೂ ಪ್ರಯೋಜನವಾಗಿಲ್ಲ. ಹೊರಗುತ್ತಿಗೆ ನೌಕರರ ವೇತನವನ್ನು ಅಧಿಕಾರಿಗಳು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ಕೂಡ ವ್ಯಕ್ತವಾಗುತ್ತಿದೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈ ಸಂಬಂಧ ಮೌನವಾಗಿರುವುದು ಖಂಡನೀಯ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪ್ರಸ್ತುತ ದಿನನಿತ್ಯ ವಸ್ತುಗಳ ಬೆಲೆ ಗಗಕ್ಕೇರಿದ್ದು, ಜೀವನ ನಡೆಸುವುದು ಕಠಿಣವಾಗಿದೆ. ಇಂತಹ ಸ್ಥಿತಿಯಲ್ಲಿ 20 ತಿಂಗಳಿಂದ ವೇತನ ನೀಡದಿರುವುದರಿಂದ ಜೀವನ ಸಾಗಿಸುವುದು ಕಷ್ಟವಾಗಿದೆ. ಸಂಬಳವಿಲ್ಲದೆ ಸಾಲದ ಸುಳಿಯಲ್ಲಿ ನೌಕರರ ಕುಟುಂಬಗಳು ಸಿಲುಕಿ ತತ್ತರಿಸುತ್ತಿವೆ. ಹಾಗಾಗಿ ಕೂಡಲೇ ಹಿರಿಯ ಅಧಿಕಾರಿಗಳು ಗುತ್ತಿಗೆ ನೌಕರರ ಸಹಾಯಕ್ಕೆ ನಿಲ್ಲಬೇಕು ಎಂದು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.