ADVERTISEMENT

ಕೊರೊನಾ: ಮುಂದುವರಿದ ಸಾವಿನ ಸರಣಿ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2020, 16:04 IST
Last Updated 23 ಅಕ್ಟೋಬರ್ 2020, 16:04 IST

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ಸರಣಿ ಮುಂದುವರಿದಿದ್ದು, ಶುಕ್ರವಾರ ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ.

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಿಗೆ ದಾಖಲಾಗಿರುವ ಸೋಂಕಿತರ ಪೈಕಿ ಕೋಲಾರ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ ಒಬ್ಬರು ಸೋಂಕಿತರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಸೋಂಕಿತರ ಸಾವಿನ ಸಂಖ್ಯೆ 145ಕ್ಕೆ ಏರಿಕೆಯಾಗಿದೆ.

ಇದರ ಬೆನ್ನಲ್ಲೇ ಹೊಸದಾಗಿ 62 ಮಂದಿಗೆ ಸೋಂಕು ಹರಡಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 795ಕ್ಕೆ ಜಿಗಿದಿದೆ. ವಿಷಮ ಶೀತ ಜ್ವರದಿಂದ ಬಳಲುತ್ತಿರುವವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಂಡಿದೆ. ಜತೆಗೆ ಸೋಂಕಿತರ ಸಂಪರ್ಕದಿಂದ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಹರಡಿದೆ.

ADVERTISEMENT

ಮಾಲೂರು ತಾಲ್ಲೂಕಿನಲ್ಲಿ ಅತಿ ಹೆಚ್ಚು 34 ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಕೋಲಾರ ತಾಲ್ಲೂಕಿನ 5, ಬಂಗಾರಪೇಟೆ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ ಇಬ್ಬರು, ಕೆಜಿಎಫ್‌ ತಾಲ್ಲೂಕಿನ 13 ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 6 ಮಂದಿಗೆ ಸೋಂಕು ಬಂದಿದೆ.

149 ಮಂದಿ ಗುಣಮುಖ: ಹೊಸದಾಗಿ ಪತ್ತೆಯಾದ ಸೋಂಕಿತರ ಸಂಖ್ಯೆಗೆ ಹೋಲಿಸಿದರೆ ಗುಣಮುಖ ಪ್ರಮಾಣದಲ್ಲಿ ದಾಖಲೆಯ ಏರಿಕೆಯಾಗಿದೆ. ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 149 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.

ಕೋಲಾರ ತಾಲ್ಲೂಕಿನ 51, ಮಾಲೂರು ತಾಲ್ಲೂಕಿನ 26, ಬಂಗಾರಪೇಟೆ ಮತ್ತು ಕೆಜಿಎಫ್‌ ತಾಲ್ಲೂಕಿನ ತಲಾ 17 ಮಂದಿ, ಮುಳಬಾಗಿಲು ತಾಲ್ಲೂಕಿನ 25 ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 13 ಮಂದಿಯನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.