ADVERTISEMENT

ಕೋವಿಡ್‌ನಿಂದ ಗುಣಮುಖರಾಗುತ್ತಿರುವವರ ಪ್ರಮಾಣ ಕೋಲಾರದಲ್ಲಿ ದಾಖಲೆ ಏರಿಕೆ

ಕೋವಿಡ್‌ ಆಸ್ಪತ್ರೆಯಿಂದ ಮನೆಗೆ ಮರಳಿದ 166 ಮಂದಿ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2020, 14:33 IST
Last Updated 18 ಆಗಸ್ಟ್ 2020, 14:33 IST

ಕೋಲಾರ: ಜಿಲ್ಲೆಯಲ್ಲಿ ಮಂಗಳವಾರ ಸಹ ಕೊರೊನಾ ಸೋಂಕಿತರ ಗುಣಮುಖ ಪ್ರಮಾಣದಲ್ಲಿ ದಾಖಲೆಯ ಏರಿಕೆಯಾಗಿದ್ದು, ಒಂದೇ ದಿನ 166 ಮಂದಿ ಆಸ್ಪತ್ರೆಯಿಂದ ಮನೆಗೆ ಮರಳಿದರು.

ಜಿಲ್ಲೆಯಲ್ಲಿ ಹೊಸದಾಗಿ ಪತ್ತೆಯಾಗುತ್ತಿರುವ ಸೋಂಕಿತರ ಸಂಖ್ಯೆಗೆ ಹೋಲಿಸಿದರೆ ಗುಣಮುಖರಾಗಿ ಮನೆಗೆ ಮರಳುತ್ತಿರುವವರ ಸಂಖ್ಯೆಯೇ ಹೆಚ್ಚಿದೆ. ಮತ್ತೊಂದೆಡೆ 3 ದಿನಗಳಲ್ಲಿ ಸೋಂಕಿತರ ಸಾವು ಸಂಭವಿಸದಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಸೋಂಕು ಹರಡುವಿಕೆ ತಡೆಗೆ ಆರೋಗ್ಯ ಇಲಾಖೆ ನಡೆಸುತ್ತಿರುವ ಪ್ರಯತ್ನ ಫಲ ಕೊಡಲಾರಂಭಿಸಿದೆ.

ಕಳೆದ 3 ದಿನಗಳಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಏರು ಗತಿಯಲ್ಲೇ ಸಾಗಿದ್ದು, ದಿನೇದಿನೇ ಕೋವಿಡ್‌ ಆತಂಕ ಕಡಿಮೆಯಾಗುತ್ತಿದೆ. ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 62 ಮಂದಿ ಗುಣಮುಖರಾಗಿ ಮಂಗಳವಾರ ಆಸ್ಪತ್ರೆಯಿಂದ ಮನೆಗೆ ತೆರಳಿದರು.

ADVERTISEMENT

ಉಳಿದಂತೆ ಮಾಲೂರು ತಾಲ್ಲೂಕಿನ 38 ಮಂದಿ, ಬಂಗಾರಪೇಟೆ ತಾಲ್ಲೂಕು 13, ಕೆಜಿಎಫ್‌ ತಾಲ್ಲೂಕು 20, ಮುಳಬಾಗಿಲು ತಾಲ್ಲೂಕು 21 ಮತ್ತು ಶ್ರೀನಿವಾಸಪುರ ತಾಲ್ಲೂಕಿನ 12 ಮಂದಿಯನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು.

96 ಮಂದಿಗೆ ಸೋಂಕು: ಹೊಸದಾಗಿ 96 ಮಂದಿಗೆ ಸೋಂಕು ಹರಡಿರುವುದು ಮಂಗಳವಾರ ದೃಢಪಟ್ಟಿದೆ. ಮುಖ್ಯವಾಗಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವ 72 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ 20 ಮಂದಿಗೆ ಸೋಂಕು ತಗುಲಿದೆ.

ಕೋಲಾರ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರವಿರುವ 19 ಮಂದಿಗೆ, ಸೋಂಕಿತರ ಸಂಪರ್ಕದಿಂದ 14 ಮಂದಿಗೆ, ಹೊರ ಜಿಲ್ಲೆಗೆ ಹೋಗಿದ್ದ ಒಬ್ಬರಿಗೆ ಮತ್ತು ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಒಬ್ಬರಿಗೆ ಸೋಂಕು ಬಂದಿರುವುದು ಖಚಿತವಾಗಿದೆ.

ಮಾಲೂರು ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರಪೀಡಿತ 23 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ 4 ಮಂದಿಗೆ ಸೋಂಕು ಹರಡಿದೆ. ಬಂಗಾರಪೇಟೆ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವ ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಕೆಜಿಎಫ್‌ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರಕ್ಕೆ ತುತ್ತಾಗಿರುವ 16 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ ಒಬ್ಬರಿಗೆ, ಶ್ರೀನಿವಾಸಪುರ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವ ಒಬ್ಬರಿಗೆ ಹಾಗೂ ಹೊರ ಜಿಲ್ಲೆಗೆ ಹೋಗಿ ಬಂದಿದ್ದ ಒಬ್ಬರಿಗೆ ಸೋಂಕು ತಗುಲಿದೆ.

ಮುಳಬಾಗಿಲು ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವ 11 ಮಂದಿಗೆ, ಸೋಂಕಿತರ ಸಂಪರ್ಕದಿಂದ ಒಬ್ಬರಿಗೆ ಸೋಂಕು ಹರಡಿದೆ. ಮತ್ತೊಬ್ಬ ವ್ಯಕ್ತಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿನ ಮೂಲ ಪತ್ತೆಯಾಗಿಲ್ಲ.

ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶವನ್ನು ಸೀಲ್‌ಡೌನ್‌ ಮಾಡಲಾಗಿದೆ. ಸುರಕ್ಷತಾ ಕ್ರಮವಾಗಿ ಇಡೀ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.