ADVERTISEMENT

ಕೊರೊನಾ: ಕೋಲಾರದಲ್ಲಿ ಇಬ್ಬರು ಸೋಂಕಿತರ ಸಾವು

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2020, 17:05 IST
Last Updated 13 ನವೆಂಬರ್ 2020, 17:05 IST

ಕೋಲಾರ: ಜಿಲ್ಲೆಯಲ್ಲಿ ಶುಕ್ರವಾರ ಇಬ್ಬರು ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಾವಿನ ಸಂಖ್ಯೆ 168ಕ್ಕೆ ಏರಿಕೆಯಾಗಿದೆ.

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಿಗೆ ದಾಖಲಾಗಿರುವ ಸೋಂಕಿತರ ಪೈಕಿ ಶ್ರೀನಿವಾಸಪುರ ತಾಲ್ಲೂಕಿನ ಇಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಹೊಸದಾಗಿ 13 ಮಂದಿಗೆ ಸೋಂಕು ಹರಡಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 491ಕ್ಕೆ ಜಿಗಿದಿದೆ.

ಕೋಲಾರ ಮತ್ತು ಮಾಲೂರು ತಾಲ್ಲೂಕಿನ ತಲಾ 4 ಮಂದಿ, ಕೆಜಿಎಫ್‌ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ ಇಬ್ಬರು, ಮುಳಬಾಗಿಲು ತಾಲ್ಲೂಕಿನ ಒಬ್ಬರಿಗೆ ಸೋಂಕು ತಗುಲಿದೆ. ಇವರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ADVERTISEMENT

ಹೊಸದಾಗಿ ಪತ್ತೆಯಾದ ಸೋಂಕಿತರ ಸಂಖ್ಯೆಗೆ ಹೋಲಿಸಿದರೆ ಗುಣಮುಖ ಪ್ರಮಾಣದಲ್ಲಿ ದಾಖಲೆಯ ಏರಿಕೆಯಾಗಿದೆ. ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 111 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.

ಕೋಲಾರ ತಾಲ್ಲೂಕಿನ 29, ಮಾಲೂರು ತಾಲ್ಲೂಕಿನ 31, ಬಂಗಾರಪೇಟೆ ತಾಲ್ಲೂಕಿನ 9, ಕೆಜಿಎಫ್‌ ತಾಲ್ಲೂಕಿನ 10, ಮುಳಬಾಗಿಲು ತಾಲ್ಲೂಕಿನ 18 ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 14 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.