ADVERTISEMENT

ಕೊರೊನಾ ಸೋಂಕು: ದಾಖಲೆ ಏರಿಕೆ

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2020, 14:40 IST
Last Updated 31 ಅಕ್ಟೋಬರ್ 2020, 14:40 IST

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವಿಕೆ ಪ್ರಮಾಣದಲ್ಲಿ ದಾಖಲೆಯ ಏರಿಕೆಯಾಗಿದ್ದು, ಶನಿವಾರ ಹೊಸದಾಗಿ ಪತ್ತೆಯಾದ ಸೋಂಕಿತರ ಸಂಖ್ಯೆಯು ಶತಕದ ಗಡಿ ದಾಟಿತು.

ಹೊಸದಾಗಿ 174 ಮಂದಿಗೆ ಸೋಂಕು ತಗುಲಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 759ಕ್ಕೆ ಜಿಗಿದಿದೆ. ಕಳೆದೊಂದು ತಿಂಗಳಿಗೆ ಹೋಲಿಸಿದರೆ ಇದು ಗರಿಷ್ಠ ಪ್ರಮಾಣವಾಗಿದೆ. ಸೋಂಕಿತರ ಸಂಖ್ಯೆ ದಿಢೀರ್‌ ಏರಿಕೆಯಾಗಿರುವುದು ಆರೋಗ್ಯ ಇಲಾಖೆಯ ನಿದ್ದೆಗೆಡಿಸಿದ್ದು, ಸಾರ್ವಜನಿಕರಲ್ಲೂ ಆತಂಕ ಮೂಡಿಸಿದೆ.

ವಿಷಮ ಶೀತ ಜ್ವರದಿಂದ ಬಳಲುತ್ತಿರುವವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಂಡಿದೆ. ಜತೆಗೆ ಸೋಂಕಿತರ ಸಂಪರ್ಕದಿಂದ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಹರಡಿದೆ. ಮಾಲೂರು ತಾಲ್ಲೂಕಿನಲ್ಲಿ ಅತಿ ಹೆಚ್ಚು 52 ಮಂದಿಗೆ ಸೋಂಕು ಹರಡಿದೆ. ಕೋಲಾರ ತಾಲ್ಲೂಕಿನ 42, ಬಂಗಾರಪೇಟೆ ತಾಲ್ಲೂಕಿನ 26, ಕೆಜಿಎಫ್‌ ತಾಲ್ಲೂಕಿನ 27, ಮುಳಬಾಗಿಲು ತಾಲ್ಲೂಕಿನ 9 ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 18 ಮಂದಿಗೆ ಸೋಂಕು ಬಂದಿದೆ.

ADVERTISEMENT

ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

50 ಮಂದಿ ಗುಣಮುಖ: ಹೊಸದಾಗಿ ಪತ್ತೆಯಾದ ಸೋಂಕಿತರ ಸಂಖ್ಯೆಗೆ ಹೋಲಿಸಿದರೆ ಗುಣಮುಖ ಪ್ರಮಾಣದಲ್ಲಿ ಕೊಂಚ ಇಳಿಕೆಯಾಗಿದೆ. ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 50 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಶನಿವಾರ ಮನೆಗೆ ಮರಳಿದರು.

ಕೋಲಾರ ತಾಲ್ಲೂಕಿನ 14 ಮಂದಿ, ಮಾಲೂರು ತಾಲ್ಲೂಕಿನ 22, ಕೆಜಿಎಫ್‌ ತಾಲ್ಲೂಕಿನ 7, ಮುಳಬಾಗಿಲು ತಾಲ್ಲೂಕಿನ 3 ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 4 ಮಂದಿಯನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.