ADVERTISEMENT

ಭ್ರಷ್ಟಾಚಾರ ಆರೋಪ: ರೈತ ಸಂಘ ಧರಣಿ

ಲೋಕೋಪಯೋಗಿ ಇಲಾಖೆ ಕಾಮಗಾರಿಯಲ್ಲಿ ಅಕ್ರಮ: ಧರಣಿನಿರತರ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 29 ಜನವರಿ 2019, 14:54 IST
Last Updated 29 ಜನವರಿ 2019, 14:54 IST
ಲೋಕೋಪಯೋಗಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಕೋಲಾರದಲ್ಲಿ ಮಂಗಳವಾರ ಇಲಾಖೆ ಕಚೇರಿ ಎದುರು ಧರಣಿ ನಡೆಸಿದರು.
ಲೋಕೋಪಯೋಗಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಕೋಲಾರದಲ್ಲಿ ಮಂಗಳವಾರ ಇಲಾಖೆ ಕಚೇರಿ ಎದುರು ಧರಣಿ ನಡೆಸಿದರು.   

ಕೋಲಾರ: ಲೋಕೋಪಯೋಗಿ ಇಲಾಖೆಯ ರಸ್ತೆ ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಇಲ್ಲಿ ಮಂಗಳವಾರ ಇಲಾಖೆ ಕಚೇರಿ ಎದುರು ಧರಣಿ ನಡೆಸಿದರು.

‘ಲೋಕೋಪಯೋಗಿ ಇಲಾಖೆಯು ಭ್ರಷ್ಟಾಚಾರದ ಕೂಪವಾಗಿದೆ. ಅಧಿಕಾರಿಗಳು ನೆಪ ಮಾತ್ರಕ್ಕೆ ರಸ್ತೆ ಗುಂಡಿ ಮುಚ್ಚಿ ಹಣ ಮಾಡಿಕೊಳ್ಳುತ್ತಿದ್ದಾರೆ. ಜಿಲ್ಲೆಯ ಜನಪ್ರತಿನಿಧಿಗಳು ಅಧಿಕಾರಿಗಳ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವಲ್ಲಿ ವಿಫಲರಾಗಿದ್ದಾರೆ’ ಎಂದು ಧರಣಿನಿರತರು ಆಕ್ರೋಶ ವ್ಯಕ್ತಪಡಿಸಿದರು.

‘ದೇಶಕ್ಕೆ ಸ್ವಾತಂತ್ರ್ಯ ಬಂದು ಏಳು ದಶಕವಾದರೂ ಗ್ರಾಮೀಣ ಭಾಗದಲ್ಲಿ ಉತ್ತಮ ರಸ್ತೆಗಳಿಲ್ಲ. ಗುಂಡಿಮಯ ರಸ್ತೆಗಳು ಜನರ ಪಾಲಿಗೆ ಮೃತ್ಯುಕೂಪವಾಗಿ ಪರಿಣಮಿಸಿವೆ. ರಸ್ತೆ ಅವ್ಯವಸ್ಥೆಯಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ಪ್ರತಿನಿತ್ಯ ಬವಣೆ ಪಡುವಂತಾಗಿದೆ’ ಎಂದು ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ಹೇಳಿದರು.

ADVERTISEMENT

‘ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಸರ್ಕಾರ ಕೋಟ್ಯಂತರ ರೂಪಾಯಿ ಅನುದಾನ ಬಿಡುಗಡೆ ಮಾಡುತ್ತಿದೆ. ಆದರೆ, ಅಧಿಕಾರಿಗಳು ಗುತ್ತಿಗೆದಾರರ ಜತೆ ಶಾಮೀಲಾಗಿ ಅನುದಾನ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸಾಕಷ್ಟು ಕಡೆ ಕಾಮಗಾರಿಗಳು ಪೂರ್ಣಗೊಳ್ಳದಿದ್ದರೂ ಗುತ್ತಿಗೆದಾರರಿಗೆ ಬಿಲ್‌ ಮಂಜೂರು ಮಾಡಿದ್ದಾರೆ’ ಎಂದು ದೂರಿದರು.

ಕಳಪೆ ಕಾಮಗಾರಿ: ‘ಜಿಲ್ಲಾ ಕೇಂದ್ರದ ರಸ್ತೆಗಳು ಗ್ರಾಮೀಣ ಭಾಗದ ರಸ್ತೆಗಳಿಗಿಂತಲೂ ಹಾಳಾಗಿವೆ. ರಸ್ತೆ ಅವ್ಯವಸ್ಥೆಯಿಂದ ಆಗಾಗ್ಗೆ ಅಪಘಾತ ಸಂಭವಿಸುತ್ತಿವೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ರಸ್ತೆ ನಿರ್ಮಿಸಿ ಮೂರು ತಿಂಗಳು ಕಳೆಯುವಷ್ಟರಲ್ಲಿ ಡಾಂಬರು ಕಿತ್ತು ಹೋಗಿದೆ. ಇದಕ್ಕೆ ಕಳಪೆ ಕಾಮಗಾರಿಯೇ ಕಾರಣ. ಆದರೂ ಅಧಿಕಾರಿಗಳು ಗುತ್ತಿಗೆದಾರರಿಗೆ ಬಿಲ್‌ ಮಂಜೂರು ಮಾಡಿದ್ದಾರೆ’ ಎಂದು ಧರಣಿನಿರತರು ಆರೋಪಿಸಿದರು.

‘ಭ್ರಷ್ಟಾಚಾರದ ಸಂಬಂಧ ಸಿಬಿಐ ನಡೆಸಬೇಕು. ತಪ್ಪಿತಸ್ಥ ಅಧಿಕಾರಿಗಳನ್ನು ಸೇವೆಯಿಂದ ಅಮಾನತು ಮಾಡಬೇಕು. ಜತೆಗೆ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಬೇಕು. ಕಳಪೆ ಕಾಮಗಾರಿ ಗುತ್ತಿಗೆದಾರರ ಬಿಲ್‌ ತಡೆ ಹಿಡಿಯಬೇಕು. ಅವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕು ಮತ್ತು ಅವರನ್ನು ಕಪ್ಪುಪಟ್ಟಿಗೆ ಸೇರಿಸಬೇಕು. ರಸ್ತೆಗಳನ್ನು ಶೀಘ್ರವೇ ದುರಸ್ತಿ ಮಾಡಬೇಕು’ ಎಂದು ಒತ್ತಾಯಿಸಿದರು.

ಸಂಘಟನೆಯ ಜಿಲ್ಲಾ ಘಟಕದ ಸಂಚಾಲಕ ಕೆ.ಶ್ರೀನಿವಾಸಗೌಡ, ಸದಸ್ಯರಾದ ಉಮಾಗೌಡ, ವಿಜಯಪಾಲ್, ಆಂಜಿನಪ್ಪ, ನಾಗೇಶ್, ಶಂಕರ್, ಹರೀಶ್, ಭರತ್, ಮಂಜುನಾಥ್, ರಾಜು, ಹನುಮಯ್ಯ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.