ADVERTISEMENT

ಕೋವಿಡ್‌ 2ನೇ ಅಲೆ ತೀವ್ರತೆ ಹೆಚ್ಚು: ವಿಧಾನ ಪರಿಷತ್‌ ಸದಸ್ಯ ಗೋವಿಂದರಾಜು ಆತಂಕ

​ಪ್ರಜಾವಾಣಿ ವಾರ್ತೆ
Published 26 ಮೇ 2021, 14:01 IST
Last Updated 26 ಮೇ 2021, 14:01 IST
ವಿಧಾನ ಪರಿಷತ್‌ ಸದಸ್ಯ ಗೋವಿಂದರಾಜು ಕೋಲಾರ ತಾಲ್ಲೂಕಿನ ದೊಡ್ಡಹಸಾಳ ಗ್ರಾಮದಲ್ಲಿ ಬುಧವಾರ ನಡೆದ ಕೋವಿಡ್‌ ಲಸಿಕೆ ನೀಡಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ವಿಧಾನ ಪರಿಷತ್‌ ಸದಸ್ಯ ಗೋವಿಂದರಾಜು ಕೋಲಾರ ತಾಲ್ಲೂಕಿನ ದೊಡ್ಡಹಸಾಳ ಗ್ರಾಮದಲ್ಲಿ ಬುಧವಾರ ನಡೆದ ಕೋವಿಡ್‌ ಲಸಿಕೆ ನೀಡಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.   

ಕೋಲಾರ: ‘ದೇಶದಲ್ಲಿ ಕೋವಿಡ್‌ 2ನೇ ಅಲೆಯ ತೀವ್ರತೆ ಹೆಚ್ಚಿದ್ದು, ಗ್ರಾಮೀಣ ಪ್ರದೇಶಕ್ಕೂ ಸೋಂಕು ವ್ಯಾಪಿಸುತ್ತಿದೆ’ ಎಂದು ವಿಧಾನ ಪರಿಷತ್‌ ಸದಸ್ಯ ಗೋವಿಂದರಾಜು ಆತಂಕ ವ್ಯಕ್ತಪಡಿಸಿದರು.

ತಾಲ್ಲೂಕಿನ ದೊಡ್ಡಹಸಾಳ ಗ್ರಾಮದಲ್ಲಿ ಬುಧವಾರ ನಡೆದ ಕೋವಿಡ್‌ ಲಸಿಕೆ ನೀಡಿಕೆ ಕಾರ್ಯಕ್ರಮದಲ್ಲಿ ಮಾತನಾಡಿ, ‘ಕೋವಿಡ್‌ ಮೊದಲನೇ ಅಲೆಯ ನಗರ ಪ್ರದೇಶಕ್ಕೆ ಮಾತ್ರ ಸೀಮಿತವಾಗಿತ್ತು. ಆದರೆ, 2ನೇ ಅಲೆಯಲ್ಲಿ ಗ್ರಾಮಗಳಲ್ಲೂ ವ್ಯಾಪಕವಾಗಿ ಸೋಂಕು ಹರಡುತ್ತಿದೆ’ ಎಂದು ಹೇಳಿದರು.

‘ಲಾಕ್‌ಡೌನ್‌ ಕಾರಣಕ್ಕೆ ನಗರದ ಪ್ರದೇಶದ ಜನರು ಹಳ್ಳಿಗಳಿಗೆ ಬಂದಿರುವುದರಿಂದ ಗ್ರಾಮೀಣ ಭಾಗದಲ್ಲಿ ಆತಂಕ ಮನೆ ಮಾಡಿದೆ. ಹೀಗಾಗಿ ಸರ್ಕಾರ ಹಾಗೂ ಜಿಲ್ಲಾಡಳಿತವು ಹಳ್ಳಿಗಳಲ್ಲಿ ಸೋಂಕು ನಿಯಂತ್ರಣಕ್ಕೆ ಹೆಚ್ಚಿನ ಗಮನ ಹರಿಸಬೇಕು. ಮನೆಗಳಲ್ಲೇ ಕ್ವಾರಂಟೈನ್‌ ಆಗಿರುವ ಸೋಂಕಿತ ವ್ಯಕ್ತಿಗಳ ಚಲನವಲನದ ಮೇಲೆ ಕಣ್ಗಾವಲು ಇಡಬೇಕು’ ಎಂದು ಮನವಿ ಮಾಡಿದರು.

ADVERTISEMENT

‘45 ವರ್ಷ ದಾಟಿದ ವ್ಯಕ್ತಿಗಳು ಕಡ್ಡಾಯವಾಗಿ ಕೋವಿಡ್‌ ಲಸಿಕೆ ಹಾಕಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯು ಜಾಗೃತಿ ಮೂಡಿಸಬೇಕು. ಕೋವಿಡ್ ಲಸಿಕೆ ಹಾಕಿಸಿಕೊಳ್ಳುವುದರಿಂದ ಆರೋಗ್ಯದ ಮೇಲೆ ಯಾವುದೇ ಅಡ್ಡ ಪರಿಣಾಮ ಆಗುವುದಿಲ್ಲ. ಪಿಡಿಒಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಹೆಚ್ಚಿನ ಜವಾಬ್ದಾರಿಯಿಂದ ಕೆಲಸ ಮಾಡಬೇಕು’ ಎಂದು ಕಿವಿಮಾತು ಹೇಳಿದರು.

‘ಗ್ರಾಮೀಣ ಪ್ರದೇಶದಲ್ಲಿ ಮನೆಗಳಲ್ಲೇ ಕ್ವಾರಂಟೈನ್‌ ಆಗಿರುವ ಸೋಂಕಿತರು ಮನೆಯಿಂದ ಹೊರಬಂದು ತಿರುಗಾಡುತ್ತಿರುವುದರಿಂದ ಸೋಂಕು ಹರಡುವಿಕೆ ಹೆಚ್ಚುತ್ತಿದೆ. ಜತೆಗೆ ಸೋಂಕಿತರ ಸಾವಿನ ಪ್ರಮಾಣ ಏರಿಕೆಯಾಗುತ್ತಿದೆ. ಸೋಂಕಿತರ ಸಾವಿನ ಸಂಖ್ಯೆ ತಗ್ಗಿಸಲು ಜಿಲ್ಲಾಡಳಿತ ಶಕ್ತಿಮೀರಿ ಪ್ರಯತ್ನ ಮಾಡಬೇಕು. ಜನರ ಲಾಕ್‌ಡೌನ್‌ ಆದೇಶ ಪಾಲಿಸುವ ಮೂಲಕ ಕೋವಿಡ್‌ ನಿಯಂತ್ರಣಕ್ಕೆ ಸಹಕರಿಸಬೇಕು’ ಎಂದರು.

ಶೀಘ್ರ ಚಿಕಿತ್ಸೆ ನೀಡಿ: ‘ಕೊರೊನಾ ಸೋಂಕಿನ ಲಕ್ಷಣವಿರುವ ವ್ಯಕ್ತಿಗಳ ತಡ ಮಾಡದೆ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಬೇಕು. ಗ್ರಾಮಗಳಿಗೆ ಹೊರಗಿನಿಂದ ಬರುವ ವ್ಯಕ್ತಿಗಳ ಬಗ್ಗೆ ಜನರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಆರೋಗ್ಯ ಇಲಾಖೆಯು ಸೋಂಕಿತರು ಹಾಗೂ ಸೋಂಕಿತರೊಂದಿಗೆ ಸಂಪರ್ಕ ಹೊಂದಿದವರನ್ನು ಶೀಘ್ರವೇ ಪತ್ತೆ ಮಾಡಿ ಚಿಕಿತ್ಸೆ ನೀಡಬೇಕು’ ಎಂದು ತಿಳಿಸಿದರು.

‘ಜನರು ಅನಗತ್ಯವಾಗಿ ಮನೆಯಿಂದ ಹೊರಬಂದು ರಸ್ತೆಗಳಲ್ಲಿ ಓಡಾಡಬಾರದು. ಅಗತ್ಯ ವಸ್ತುಗಳ ಖರೀದಿಗೆ ಬರುವ ಸಂದರ್ಭದಲ್ಲಿ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು ಮತ್ತು ಅಂಗಡಿಗಳ ಬಳಿ ಅಂತರ ಕಾಯ್ದುಕೊಳ್ಳಬೇಕು. ಗ್ರಾ.ಪಂ ಸದಸ್ಯರು ಲಸಿಕೆ ಹಾಕಿಸಿಕೊಳ್ಳುವಂತೆ ಜನರಿಗೆ ಅರಿವು ಮೂಡಿಸಬೇಕು. ಲಸಿಕೆ ಮಾತ್ರ ಜೀವ ಉಳಿಸುತ್ತದೆ ಎಂಬುದನ್ನು ಮನವರಿಕೆ ಮಾಡಬೇಕು’ ಎಂದು ಸಲಹೆ ನೀಡಿದರು.

ಗ್ರಾ.ಪಂ ಸದಸ್ಯರಾದ ರಾಜಣ್ಣ, ಮಮತಾ, ವೆಂಕಟೇಶ್, ಪಿಡಿಒ ಚಂಗಲರಾಯರೆಡ್ಡಿ, ವೈದ್ಯರಾದ ಡಾ.ಮಂಜುಶ್ರೀ, ಡಾ.ಕವಿತಾ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.