ADVERTISEMENT

ಕೋವಿಡ್‌ 2ನೇ ಅಲೆ ವ್ಯಾಪಕ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2021, 14:40 IST
Last Updated 19 ಏಪ್ರಿಲ್ 2021, 14:40 IST
ಮಾಜಿ ಸಚಿವ ವರ್ತೂರು ಪ್ರಕಾಶ್‌ ಕೋಲಾರದ ಎಸ್ಎನ್ಆರ್ ಜಿಲ್ಲಾ ಆಸ್ಪತ್ರೆಯಲ್ಲಿ ಸೋಮವಾರ ಕೋವಿಡ್ ಲಸಿಕೆ ಪಡೆದರು.
ಮಾಜಿ ಸಚಿವ ವರ್ತೂರು ಪ್ರಕಾಶ್‌ ಕೋಲಾರದ ಎಸ್ಎನ್ಆರ್ ಜಿಲ್ಲಾ ಆಸ್ಪತ್ರೆಯಲ್ಲಿ ಸೋಮವಾರ ಕೋವಿಡ್ ಲಸಿಕೆ ಪಡೆದರು.   

ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್‌ ಅವರು ಇಲ್ಲಿ ಎಸ್ಎನ್ಆರ್ ಜಿಲ್ಲಾ ಆಸ್ಪತ್ರೆಯಲ್ಲಿ ಸೋಮವಾರ ಕೋವಿಡ್ ಲಸಿಕೆ ಪಡೆದರು.

ಬಳಿಕ ಮಾತನಾಡಿದ ವರ್ತೂರು ಪ್ರಕಾಶ್‌, ‘ಎಲ್ಲೆಡೆ ಕೋವಿಡ್‌ 2ನೇ ಅಲೆ ವ್ಯಾಪಕವಾಗಿದ್ದು, ಸೋಂಕು ಹರಡುವಿಕೆ ಪ್ರಮಾಣ ಹೆಚ್ಚಿದೆ. ಹೀಗಾಗಿ ಪ್ರತಿಯೊಬ್ಬರು ಕೋವಿಡ್‌ ಲಸಿಕೆ ಪಡೆಯಬೇಕು. ಜತೆಗೆ ಕೋವಿಡ್‌ ಸುರಕ್ಷತಾ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ಕಿವಿಮಾತು ಹೇಳಿದರು.

‘ಕೋವಿಡ್ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯ. ಸರ್ಕಾರ ಒಂದರಿಂದಲೇ ಕೊರೊನಾ ಸೋಂಕು ನಿಯಂತ್ರಣ ಸಾಧ್ಯವಿಲ್ಲ. ಸರ್ಕಾರ ಜನರ ಆರೋಗ್ಯದ ದೃಷ್ಟಿಯಿಂದ ನೀತಿ ನಿಯಮಗಳನ್ನು ರೂಪಿಸುತ್ತಿದೆ. ಸರ್ಕಾರ ಕಾಲಕಾಲಕ್ಕೆ ನೀಡುವ ಸಲಹೆ ಸೂಚನೆಗಳನ್ನು ಜನರು ಪಾಲಿಸಬೇಕು’ ಎಂದು ಮನವಿ ಮಾಡಿದರು.

ADVERTISEMENT

‘ಸಾರ್ವಜನಿಕರಂತೆ ಜನಪ್ರತಿನಿಧಿಗಳು ಸಹ ಕೋವಿಡ್‌ ಲಸಿಕೆ ಪಡೆಯಬೇಕು. ಲಸಿಕೆಯಿಂದ ಆರೋಗ್ಯದ ಮೇಲೆ ಯಾವುದೇ ಅಡ್ಡ ಪರಿಣಾಮವಿಲ್ಲ. ಹೀಗಾಗಿ ಜನರು ಲಸಿಕೆ ಪಡೆಯಲು ಆತಂಕಪಡುವ ಅಗತ್ಯವಿಲ್ಲ. ವದಂತಿಗೆ ಕಿವಿಗೊಡದೆ ಎಲ್ಲರೂ ಲಸಿಕೆ ಪಡೆಯಬೇಕು’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಅರುಣ್‌ಪ್ರಸಾದ್, ಜಿ.ಪಂ ಸದಸ್ಯೆ ರೂಪಶ್ರೀ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ನಾರಾಯಣಸ್ವಾಮಿ, ವರ್ತೂರು ಪ್ರಕಾಶ್‌ ಬೆಂಬಲಿಗರಾದ ಬೆಗ್ಲಿ ಪ್ರಕಾಶ್, ಮಂಜುನಾಥ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.