ADVERTISEMENT

ಕೋವಿಡ್‌ ನಿರ್ವಹಣೆ: ಸರ್ಕಾರ ವಿಫಲ

ತಾಲ್ಲೂಕು ಕಚೇರಿ ಎದುರು ಕಾಂಗ್ರೆಸ್ ಕಿಸಾನ್ ಖೇತ್ ಸದಸ್ಯರ ಧರಣಿ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2020, 14:10 IST
Last Updated 6 ಆಗಸ್ಟ್ 2020, 14:10 IST
ಕೋವಿಡ್‌–19 ಪರಿಸ್ಥಿತಿ ನಿರ್ವಹಣೆಯಲ್ಲಿ ಸರ್ಕಾರಗಳು ವಿಫಲವಾಗಿವೆ ಎಂದು ಆರೋಪಿಸಿ ಕಾಂಗ್ರೆಸ್ ಕಿಸಾನ್ ಖೇತ್ ಘಟಕದ ಸದಸ್ಯರು ಕೋಲಾರ ತಾಲ್ಲೂಕು ಕಚೇರಿ ಎದುರು ಗುರುವಾರ ಧರಣಿ ನಡೆಸಿದರು.
ಕೋವಿಡ್‌–19 ಪರಿಸ್ಥಿತಿ ನಿರ್ವಹಣೆಯಲ್ಲಿ ಸರ್ಕಾರಗಳು ವಿಫಲವಾಗಿವೆ ಎಂದು ಆರೋಪಿಸಿ ಕಾಂಗ್ರೆಸ್ ಕಿಸಾನ್ ಖೇತ್ ಘಟಕದ ಸದಸ್ಯರು ಕೋಲಾರ ತಾಲ್ಲೂಕು ಕಚೇರಿ ಎದುರು ಗುರುವಾರ ಧರಣಿ ನಡೆಸಿದರು.   

ಕೋಲಾರ: ಕೋವಿಡ್‌–19 ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ರೈತರು ಹಾಗೂ ಕಾರ್ಮಿಕರ ಹಿತ ಕಾಯುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿಫಲವಾಗಿವೆ ಎಂದು ಆರೋಪಿಸಿ ಕಾಂಗ್ರೆಸ್ ಕಿಸಾನ್ ಖೇತ್ ಘಟಕದ ಸದಸ್ಯರು ಇಲ್ಲಿ ಗುರುವಾರ ತಾಲ್ಲೂಕು ಕಚೇರಿ ಎದುರು ಧರಣಿ ನಡೆಸಿದರು.

‘ದೇಶವು ಮೊದಲೇ ಆರ್ಥಿಕ ಬಿಕ್ಕಟ್ಟಿನಿಂದ ನರಳುತ್ತಿತ್ತು. ಕೊರೊನಾ ಸೋಂಕಿನ ಕಾರಣಕ್ಕೆ ಲಾಕ್‌ಡೌನ್‌ ಜಾರಿಯಾಗಿದ್ದರಿಂದ ದೇಶದ ಆರ್ಥಿಕ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಇದರಿಂದ ಕೃಷಿಕರು, ಕಾರ್ಮಿಕರು, ಬಡವರು, ದಲಿತರ ಬದುಕು ಬರ್ಬರವಾಗಿದೆ’ ಎಂದು ಧರಣಿನಿರತರು ಆಕ್ರೋಶ ವ್ಯಕ್ತಪಡಿಸಿದರು.

‘ಸರ್ಕಾರಗಳು ಬಡ ಜನರ ಬದುಕು ಸುಧಾರಿಸುವ ಪ್ರಯತ್ನ ಮಾಡುತ್ತಿಲ್ಲ. ಬದಲಿಗೆ ಬಂಡವಾಳಶಾಹಿಗಳು ಹಾಗೂ ಕಾರ್ಪೊರೇಟ್‌ ಕಂಪನಿಗಳಿಗೆ ಸಾರ್ವಜನಿಕರ ಸಂಪನ್ಮೂಲಗಳ ನೆರವು ನೀಡುತ್ತಿದೆ. ಕೋವಿಡ್‌–19ನ ಸಂದರ್ಭ ಬಳಸಿಕೊಂಡು ತೆರೆಮರೆಯಲ್ಲಿ ಸುಗ್ರೀವಾಜ್ಞೆ ಮೂಲಕ ಜನವಿರೋಧಿ ಕಾನೂನು ಜಾರಿಗೊಳಿಸುತ್ತಿದೆ’ ಎಂದು ಕಾಂಗ್ರೆಸ್ ಕಿಸಾನ್ ಖೇತ್ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ್ ದೂರಿದರು.

ADVERTISEMENT

ರೈತರ ಬವಣೆ: ‘ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿದವರಿಗೆ ಪರಿಹಾರಧನ ಬಿಡುಗಡೆಯಾಗಿಲ್ಲ. ಕೃಷಿ ಉತ್ಪನ್ನಗಳ ಬೆಲೆ ಕುಸಿದಿರುವುದರಿಂದ ರೈತರು ಬವಣೆ ಪಡುವಂತಾಗಿದೆ. ವೃದ್ಧಾಪ್ಯ ಮತ್ತು ವಿಧವಾ ವೇತನ, ಅಂಗವಿಕಲರ ಮಾಶಾಸನ ಸೇರಿದಂತೆ ಸಾಮಾಜಿಕ ಭದ್ರತಾ ಯೋಜನೆಯ ಪಿಂಚಣಿ ಹಣ ಫಲಾನುಭವಿಗಳ ಕೈ ಸೇರಿಲ್ಲ’ ಎಂದು ಧರಣಿನಿರತರು ಆರೋಪಿಸಿದರು.

‘ಸರ್ಕಾರವು ರೈತರನ್ನು ಲೂಟಿ ಮಾಡಲು ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಿದೆ. ಕೊರೊನಾ ಕಾರಣಕ್ಕೆ ಕೇಂದ್ರ ಘೋಷಿಸಿರುವ ₹ 20 ಲಕ್ಷ ಕೋಟಿ ಮೊತ್ತದ ಪ್ಯಾಕೇಜ್‌ ದೊಡ್ಡ ಸುಳ್ಳಿನ ಕಂತೆ. ಜನರ ತಲಾ ಆದಾಯ ಹೆಚ್ಚಿಸುವ ಮತ್ತು ಆರ್ಥಿಕ ಬಿಕ್ಕಟ್ಟಿನಿಂದ ದೇಶವನ್ನು ಪಾರು ಮಾಡುವ ನೀತಿ ಜಾರಿಗೆ ತಂದಿಲ್ಲ’ ಎಂದು ಕಿಡಿಕಾರಿದರು.

ಹೋರಾಟದ ಎಚ್ಚರಿಕೆ: ‘ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಘೋಷಿಸಬೇಕು. ರೈತರ ಕೃಷಿ ಸಾಲ ಮನ್ನಾ ಮಾಡಬೇಕು. ಎಲ್ಲಾ ಸಮುದಾಯದ ಜನರಿಗೂ ಹಣಕಾಸು ನೆರವು ನೀಡಬೇಕು. ಸಾಮಾಜಿಕ ಭದ್ರತಾ ಯೋಜನೆಯ ಪಿಂಚಣಿ ಹಣ ಬಿಡುಗಡೆ ಮಾಡಬೇಕು. ಇಲ್ಲವಾದರೆ ರಾಜ್ಯದೆಲ್ಲೆಡೆ ತೀವ್ರ ಹೋರಾಟ ನಡೆಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ಕಾಂಗ್ರೆಸ್ ಜಿಲ್ಲಾ ಒಬಿಸಿ ಘಟಕದ ಉಪಾಧ್ಯಕ್ಷ ಎಸ್‌.ಮಂಜುನಾಥ್, ಕಾಂಗ್ರೆಸ್ ಕಿಸಾನ್ ಖೇತ್ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ವಿಶ್ವನಾಥ್, ತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜಗೌಡ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.