ADVERTISEMENT

ಗುಣಮುಖ ಪ್ರಮಾಣ: ದಾಖಲೆ ಏರಿಕೆ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2020, 13:38 IST
Last Updated 2 ನವೆಂಬರ್ 2020, 13:38 IST

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಗುಣಮುಖ ಪ್ರಮಾಣದಲ್ಲಿ ದಾಖಲೆಯ ಏರಿಕೆಯಾಗಿದ್ದು, ಸೋಮವಾರ ಆಸ್ಪತ್ರೆಯಿಂದ ಮನೆಗೆ ಮರಳಿದವರ ಸಂಖ್ಯೆ ಶತಕದ ಗಡಿ ದಾಟಿತು.

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 104 ಮಂದಿ ಗುಣಮುಖರಾಗಿ ಮನೆಗೆ ತೆರಳಿದರು. ಕೋಲಾರ ತಾಲ್ಲೂಕಿನ 20 ಮಂದಿ, ಮಾಲೂರು ತಾಲ್ಲೂಕಿನ 17, ಬಂಗಾರಪೇಟೆ ತಾಲ್ಲೂಕಿನ 11, ಕೆಜಿಎಫ್‌ ತಾಲ್ಲೂಕಿನ 19, ಮುಳಬಾಗಿಲು ತಾಲ್ಲೂಕಿನ 23 ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 14 ಮಂದಿಯನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು.

ಹೊಸದಾಗಿ ಪತ್ತೆಯಾದ ಸೋಂಕಿತರ ಸಂಖ್ಯೆಗೆ ಹೋಲಿಸಿದರೆ ಗುಣಮುಖರಾದವರ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ. ಮತ್ತೊಂದೆಡೆ ನಾಲ್ಕೈದು ದಿನಗಳಿಂದ ಸೋಂಕಿತರ ಸಾವು ಸಂಭವಿಸದೆ ಇರುವುದರಿಂದ ಆರೋಗ್ಯ ಇಲಾಖೆ ನಿರಾಳವಾಗಿದೆ.

ADVERTISEMENT

723ಕ್ಕೆ ಏರಿಕೆ: ಹೊಸದಾಗಿ 55 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 723ಕ್ಕೆ ಏರಿಕೆಯಾಗಿದೆ.

ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 21 ಮಂದಿಗೆ ಸೋಂಕು ಹರಡಿದೆ. ಮಾಲೂರು ತಾಲ್ಲೂಕಿನ 11, ಬಂಗಾರಪೇಟೆ ತಾಲ್ಲೂಕಿನ 3, ಕೆಜಿಎಫ್‌ ತಾಲ್ಲೂಕಿನ 8, ಮುಳಬಾಗಿಲು ತಾಲ್ಲೂಕಿನ 7 ಮತ್ತು ಶ್ರೀನಿವಾಸಪುರ ತಾಲ್ಲೂಕಿನ 5 ಮಂದಿಗೆ ಸೋಂಕು ಬಂದಿದೆ. ವಿಷಮ ಶೀತ ಜ್ವರದಿಂದ ಬಳಲುತ್ತಿರುವವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಂಡಿದೆ. ಜತೆಗೆ ಸೋಂಕಿತರ ಸಂಪರ್ಕದಿಂದ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಹರಡಿದೆ.

ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.