ADVERTISEMENT

17ಕ್ಕೆ ದಲಿತ ಸಾಹಿತ್ಯ ಸಮ್ಮೇಳನ

ಸಮ್ಮೇಳನದ ಯಶಸ್ಸಿಗೆ ಸಹಕರಿಸಿ: ಜಿಲ್ಲಾಧಿಕಾರಿ ಮಂಜುನಾಥ್‌ ಮನವಿ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2019, 14:29 IST
Last Updated 1 ಆಗಸ್ಟ್ 2019, 14:29 IST

ಕೋಲಾರ: ‘ಜಿಲ್ಲೆಯಲ್ಲಿ ಆ.17 ಮತ್ತು 18ರಂದು ದಲಿತ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಸಮ್ಮೇಳನ ಯಶಸ್ವಿಗೊಳಿಸಲು ಎಲ್ಲರೂ ಸಹಕರಿಸಬೇಕು’ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ಮನವಿ ಮಾಡಿದರು.

ದಲಿತ ಸಾಹಿತ್ಯ ಸಮ್ಮೇಳನದ ಸಿದ್ಧತೆ ಸಂಬಂಧ ಇಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ‘ಜಿಲ್ಲಾ ಕೇಂದ್ರದ ಟಿ.ಚನ್ನಯ್ಯ ರಂಗಮಂದಿರದಲ್ಲಿ 2 ದಿನ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಈ ಸಮ್ಮೇಳನ ನಡೆಸುತ್ತಿದೆ’ ಎಂದರು.

‘ಸಮ್ಮೇಳನಕ್ಕೆ ಜಿಲ್ಲಾಡಳಿತದಿಂದ ಸಕಲ ಸಹಕಾರ ನೀಡುತ್ತೇವೆ. ಸಮ್ಮೇಳನದ ಅಗತ್ಯತೆ ಬಗ್ಗೆ ಪಟ್ಟಿ ನೀಡಿ. ಸಮ್ಮೇಳನಕ್ಕೆ ರಂಗಮಂದಿರವನ್ನು ಬಾಡಿಗೆಯಿಲ್ಲದೆ ಉಚಿತವಾಗಿ ಕೊಡಲಾಗುತ್ತದೆ. ಸಮ್ಮೇಳನಾಧ್ಯಕ್ಷರ ಮೆರವಣಿಗೆ ಸಂದರ್ಭದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್‌ ಮಾಡಬೇಕು’ ಎಂದು ಸೂಚಿಸಿದರು.

ADVERTISEMENT

‘ಕನ್ನಡ ಸಾಹಿತ್ಯ ಪರಿಷತ್ ಜಿಲ್ಲೆಯಲ್ಲಿ 11 ಸಾವಿರ ಸದಸ್ಯರನ್ನು ಒಳಗೊಂಡಿದೆ. ಪರಿಷತ್‌ ನಾಡು ನುಡಿಗಾಗಿ ಕಾಲಕಾಲಕ್ಕೆ ಕಾರ್ಯಕ್ರಮ ನಡೆಸುತ್ತಿದೆ. ಪರಿಷತ್ ಜಿಲ್ಲೆಗೆ ಮೊದಲ ಬಾರಿಗೆ ದಲಿತ ಸಾಹಿತ್ಯ ಸಮ್ಮೇಳನ ಆಯೋಜನೆಯ ಜವಾಬ್ದಾರಿ ಕೊಟ್ಟಿದೆ. ಹಿರಿಯ ಸಾಹಿತಿ ಮತ್ತು ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ ಅವರನ್ನು ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ’ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ನಾಗಾನಂದ ಕೆಂಪರಾಜ್ ವಿವರಿಸಿದರು.

‘ಆ.17ರಂದು ಸಮ್ಮೇಳನಾಧ್ಯಕ್ಷರ ಮೆರವಣಿಗೆ ಇರುತ್ತದೆ. ಸಾಹಿತಿಗಳು ಮತ್ತು ಸಚಿವರು ಮೆರವಣಿಗೆಯಲ್ಲಿ ಪಾಲ್ಗೊಳ್ಳುತ್ತಾರೆ. ಬಳಿಕ ಉದ್ಘಾಟನಾ ಕಾರ್ಯಕ್ರಮ ನಡೆಯುತ್ತದೆ. ವಿಷಾರಗೋಷ್ಠಿಗಳಿಗೆ ಪ್ರಾಮುಖ್ಯತೆ ನೀಡಲಾಗಿದೆ. ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ, ಕವಿಗೋಷ್ಠಿ ಮತ್ತು ನಾಡಿನ ಪ್ರಮುಖ ದಲಿತ ಸಾಹಿತಿಗಳಿಗೆ ಸನ್ಮಾನ ಕಾರ್ಯಕ್ರಮ ಇರುತ್ತದೆ. ಸಮ್ಮೇಳನದ 2ನೇ ದಿನ ಸಮಾರೋಪ ಸಮಾರಂಭ ನಡೆಯುತ್ತದೆ’ ಎಂದು ಮಾಹಿತಿ ನೀಡಿದರು.

ನಾಟಕ ಪ್ರದರ್ಶನ: ‘ಸಮ್ಮೇಳನದ ಮೊದಲನೆ ದಿನ ಸಂಜೆ ಜಿಲ್ಲೆಯ ದಲಿತ ಗಾಯಕರ ಸಂಗೀತ ಮತ್ತು ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ. 2ನೇ ದಿನ ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯನವರ ರಚನೆಯ ನಾಟಕ ಪ್ರದರ್ಶನ ನಡೆಯಲಿದೆ. ಸಮ್ಮೇಳನದ ರೂಪುರೇಷೆಗಳನ್ನು ಪರಿಷತ್ ರೂಪಿಸಿದೆ. ಸುಮಾರು 4 ಸಾವಿರ ಮಂದಿ ಸಮ್ಮೇಳನದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ರಂಗಮಂದಿರದಲ್ಲಿ ಸ್ಥಳಾವಕಾಶ ಕಡಿಮೆ ಇರುವುದರಿಂದ ಹೊರಗಡೆ ಎಲ್ಇಡಿ ಪರದೆ ಅಳವಡಿಸಲಾಗುವುದು’ ಎಂದರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಸಿಂಧೂ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಪಲ್ಲವಿ ಹೊನ್ನಾಪುರ, ಕನ್ನಡ ಮತ್ತು ಸಂಸ್ಕೃತಿಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ರವಿಕುಮಾರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.