
ಪ್ರಜಾವಾಣಿ ವಾರ್ತೆ
ಕೋಲಾರ: ಡ್ರಗ್ಸ್ ಮುಕ್ತ ಕೋಲಾರ ಜಿಲ್ಲೆಯನ್ನಾಗಿಸಲು ಎಲ್ಲಾ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರ ಹೊರವಲಯದ ಜಿಲ್ಲಾಡಳಿತ ಭವನದಲ್ಲಿ ಗುರುವಾರ ನಡೆದ ‘ನಾರ್ಕೊ ಸಮನ್ವಯ ಕೇಂದ್ರದ ಸಮಿತಿ’ಯ ಜಿಲ್ಲಾ ಮಟ್ಟದ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಣೆ, ಮಾರಾಟ ಹಾಗೂ ಅವುಗಳ ಬಳಕೆಯಾಗುವುದನ್ನು ಸಂಪೂರ್ಣವಾಗಿ ನಿಯಂತ್ರಿಸಬೇಕು ಎಂದು ನಿರ್ದೇಶನ ನೀಡಿದರು.
ಮಾದಕ ವಸ್ತುಗಳಿಗೆ ಯುವ ಸಮುದಾಯ ಹೆಚ್ಚು ಆಕರ್ಷಿತವಾಗುತ್ತಿದೆ. ಇವುಗಳ ಬಳಕೆಯಿಂದ ದೇಹದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ, ಇವುಗಳಿಂದ ದೂರ ಉಳಿಯುವಂತೆ ನೋಡಿಕೊಳ್ಳಲು ಕಾರ್ಯಕ್ರಮ ನಡೆಸಬೇಕು ಎಂದು ಸಲಹೆ ನೀಡಿದರು.
ವಿದ್ಯಾಸಂಸ್ಥೆಗಳಲ್ಲಿ ಜಾಗೃತಿ ಕಾರ್ಯಕ್ರಮ ಹಾಗೂ ವಿವಿಧ ಸ್ಪರ್ಧೆಗಳನ್ನು ನಡೆಸಬೇಕು. ಈಗಾಗಲೇ ಕೆಲವು ವಿದ್ಯಾಸಂಸ್ಥೆಗಳಲ್ಲಿ ಈ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇವುಗಳು ಎಷ್ಟು ಪ್ರಮಾಣದಲ್ಲಿ ಉಪಯುಕ್ತವಾಗುತ್ತಿವೆ ಎಂಬ ಬಗ್ಗೆಯೂ ಮಾಹಿತಿ ಕಲೆ ಹಾಕಬೇಕು ಎಂದರು.
ಮಾದಕ ವಸ್ತು ವ್ಯಸನಕ್ಕೆ ಗುರಿಯಾಗಿರುವ ಕಾರ್ಮಿಕರ ಮನಪರಿವರ್ತಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೃಷಿ, ತೋಟಗಾರಿಕೆ, ಅರಣ್ಯ ಇಲಾಖೆಯ ಸಿಬ್ಬಂದಿ ಆಗಿಂದಾಗ್ಗೆ ಕೃಷಿ ಜಮೀನುಗಳು, ತೋಟಗಳಿಗೆ ಭೇಟಿ ನೀಡಿ, ಗಾಂಜಾ ಬೆಳೆಗಳನ್ನು ಬೆಳೆಯುತ್ತಿದ್ದಾರೆಯೇ ಎಂಬುದನ್ನು ಪರಿಶೀಲಿಸಬೇಕು ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್ ಮಾತನಾಡಿ, ‘ನಿರ್ಬಂಧಿತ ಮತ್ತುಭರಿಸುವ ಔಷಧಿಗಳು ಜನ ಸಾಮಾನ್ಯರೆಲ್ಲರಿಗೂ ಮಾರಾಟ ಮಾಡುವಂತಿಲ್ಲ. ಈ ಬಗ್ಗೆ ಜಿಲ್ಲೆಯ ಔಷಧ ನಿಯಂತ್ರಣಾಧಿಕಾರಿಗಳು ಔಷಧಿ ಅಂಗಡಿಗಳ ಬಗ್ಗೆ ಎಚ್ಚರ ವಹಿಸಬೇಕು. ಮಾದಕ ವ್ಯಸನ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಕೈಜೋಡಿಸಬೇಕು’ ಎಂದರು.
ಕಾಲೇಜು ಹಾಸ್ಟೆಲ್‌ಗಳಲ್ಲಿ ರಜೆಯ ದಿನಗಳಲ್ಲಿ ಮನೆಗಳಿಗೆ ಹೋಗಿ ಮರಳಿ ಬರುವ ಸಂದರ್ಭದಲ್ಲಿ ವಿದ್ಯಾರ್ಥಿಗಳು ಯಾವುದಾದರೂ ಮಾದಕ ವಸ್ತುಗಳನ್ನು ತೆಗೆದುಕೊಂಡು ಬಂದಿದ್ದಾರೆಯೇ ಎಂಬುದನ್ನು ಪರಿಶೀಲನೆ ಮಾಡಬೇಕಾಗುತ್ತದೆ ಎಂದು ತಿಳಿಸಿದರು.
ಸಭೆಯಲ್ಲಿ ಕೆಜಿಎಫ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್, ಅಬಕಾರಿ ಉಪ ಆಯುಕ್ತೆ ಸೈಯದಾ ಅಜ್ಮತ್ ಆಫ್ರಿನ್, ಆರ್‌ಟಿಓ ಅಧಿಕಾರಿ ಪಾಲ್ಗೊಂಡಿದ್ದರು.
ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಡ್ರಗ್ಸ್ ನಿಯಂತ್ರಣ ತಂಡಗಳನ್ನು ರಚಿಸಿ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ಅರಿವು ಮೂಡಿಸುವ ಕೆಲಸ ಮಾಡಬೇಕುಕನ್ನಿಕಾ ಸಿಕ್ರಿವಾಲ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ತಂಬಾಕು ಉತ್ಪನ್ನಗಳು ಸೇರಿದಂತೆ ಮಾದಕ ವಸ್ತುಗಳ ದುಶ್ಚಟಗಳಿಗೆ ಕಾರ್ಮಿಕರು ವ್ಯಸನಿಗಳಾಗುತ್ತಿದ್ದಾರೆ. ಇವರಿಗೂ ಕೆಲಸ ಸ್ಥಳಗಳಲ್ಲಿ ಅರಿವು ಮೂಡಿಸಬೇಕು.ಎಂ.ಆರ್.ರವಿ ಜಿಲ್ಲಾಧಿಕಾರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.