ADVERTISEMENT

ಜಿಲ್ಲಾಧಿಕಾರಿ ರವಿ ನಗರ ಪ್ರದಕ್ಷಿಣೆ

ಸಂಚಾರ ದಟ್ಟಣೆ, ಸ್ವಚ್ಛತೆ, ಅಭಿವೃದ್ಧಿ ಕುರಿತು ಅಧಿಕಾರಿಗಳಿಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2025, 6:03 IST
Last Updated 13 ಡಿಸೆಂಬರ್ 2025, 6:03 IST

ಕೋಲಾರ: ಜಿಲ್ಲಾಧಿಕಾರಿ ಎಂ.ಆರ್.ರವಿ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್‌ ಬಿ. ಮತ್ತು ನಗರಸಭೆ ಅಧಿಕಾರಿಗಳೊಂದಿಗೆ ನಗರ ಪ್ರದಕ್ಷಿಣೆ ನಡೆಸಿ ಸಂಚಾರ ದಟ್ಟಣೆ, ಸ್ವಚ್ಛತೆ, ಅಭಿವೃದ್ಧಿ ಕಾರ್ಯ ಮತ್ತು ನಾಗರಿಕ ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸಿದರು.

ನಗರದ ವಿವಿಧ ಪ್ರಮುಖ ಸ್ಥಳಗಳಲ್ಲಿ ಶೇಖರಣೆಯಾದ ಕಸದ ರಾಶಿ, ವಿಲೇವಾರಿ ಮತ್ತು ಸ್ವಚ್ಛತೆಯ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಕಸವನ್ನು ತ್ವರಿತವಾಗಿ ಮತ್ತು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು, ಪಾದಚಾರಿ ಒತ್ತುವರಿ ತೆರವುಗೊಳಿಸಲು ನಗರಸಭೆ ಅಧಿಕಾರಿಗಳಿಗೆ ಸ್ಥಳದಲ್ಲೇ ಸಲಹೆ ಮತ್ತು ಸೂಚನೆ ನೀಡಿದರು.

ADVERTISEMENT

ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆ ಸಮಸ್ಯೆಗಳ ಬಗ್ಗೆ ಗಮನಹರಿಸಿದರು. ಸಂಚಾರ ದಟ್ಟಣೆ ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕಾದ ಕ್ರಮಗಳು, ಪ್ರಮುಖ ವೃತ್ತಗಳಲ್ಲಿ ಸುಗಮ ವಾಹನ ಸಂಚಾರಕ್ಕೆ ಅಗತ್ಯವಿರುವ ಮಾರ್ಪಾಡುಗಳು ಹಾಗೂ ವಾಹನಗಳ ನಿಲುಗಡೆ ವ್ಯವಸ್ಥೆ ಕುರಿತು ಸಮಾಲೋಚನೆ ನಡೆಸಿದರು.

ಹೆಲ್ಮೆಟ್ ಕಡ್ಡಾಯವಾಗಿ ಧರಿಸುವುದು, ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಸಂಬಂಧ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿದರು.

ನಗರದ ರಸ್ತೆಗಳ ಅಭಿವೃದ್ಧಿ, ಪ್ರಮುಖ ವೃತ್ತಗಳ ಸೌಂದರ್ಯೀಕರಣ, ಬೀದಿ ದೀಪಗಳ ಅಳವಡಿಕೆ ಹಾಗೂ ನಿರ್ವಹಣೆಯ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.

ನಗರದ ರಸ್ತೆ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಎಲ್ಲಾ ಅಧಿಕಾರಿಗಳು ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸಿ ನಿಗದಿತ ಕಾಲಮಿತಿಯೊಳಗೆ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಿ ನಗರದ ಮೂಲ ಸೌಕರ್ಯಗಳನ್ನು ಸುಧಾರಿಸಬೇಕು ಎಂದರು.

ನಗರಸಭೆ ಆಯುಕ್ತ ನವೀನಚಂದ್ರ ಸೇರಿದಂತೆ ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.