ADVERTISEMENT

ಜಿಲ್ಲೆಯಲ್ಲಿ ಇಬ್ಬರು ಸೋಂಕಿತರ ಸಾವು

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2020, 15:32 IST
Last Updated 12 ಆಗಸ್ಟ್ 2020, 15:32 IST

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ಸರಣಿ ಮುಂದುವರಿದಿದ್ದು, ಬುಧವಾರ ಇಬ್ಬರು ಸೋಂಕಿತರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ ಕೋಲಾರ ತಾಲ್ಲೂಕು ಹಾಗೂ ಮುಳಬಾಗಿಲು ತಾಲ್ಲೂಕಿನ ತಲಾ ಒಬ್ಬರು ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಾವಿನ ಸಂಖ್ಯೆ 46ಕ್ಕೆ ಏರಿಕೆಯಾಗಿದೆ.

ಇದರ ಬೆನ್ನಲ್ಲೇ ಹೊಸದಾಗಿ 33 ಮಂದಿಗೆ ಸೋಂಕು ತಗುಲಿರುವುದು ಬುಧವಾರ ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 1,065ಕ್ಕೆ ಹೆಚ್ಚಳವಾಗಿದೆ. ಮಾಲೂರು ತಾಲ್ಲೂಕಿನಲ್ಲಿ 3 ಮಂದಿಗೆ, ಕೆಜಿಎಫ್‌ ತಾಲ್ಲೂಕಿನಲ್ಲಿ ಒಬ್ಬರಿಗೆ, ಮುಳಬಾಗಿಲು ತಾಲ್ಲೂಕಿನಲ್ಲಿ 7 ಮಂದಿಗೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನಲ್ಲಿ ಇಬ್ಬರಿಗೆ ಸೋಂಕು ಹರಡಿದೆ. ಈ 13 ಮಂದಿಯೂ ವಿಷಮ ಶೀತ ಜ್ವರದಿಂದ ಬಳಲುತ್ತಿದ್ದಾರೆ.

ADVERTISEMENT

ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 15 ಮಂದಿಗೆ ಸೋಂಕು ಬಂದಿದೆ. ವಿಷಮ ಶೀತ ಜ್ವರದಿಂದ ಬಳಲುತ್ತಿರುವ 10 ಮಂದಿಗೆ, ಸೋಂಕಿತರ ಸಂಪರ್ಕದಿಂದ 3 ಮಂದಿಗೆ ಮತ್ತು ಹೊರ ಜಿಲ್ಲೆಗೆ ಹೋಗಿದ್ದ ಒಬ್ಬರಿಗೆ ಸೋಂಕು ತಗುಲಿದೆ. ಜತೆಗೆ 22 ವರ್ಷದ ಪುರುಷರೊಬ್ಬರಿಗೆ ಸೋಂಕು ಹರಡಿದ್ದು, ಇವರ ಸೋಂಕಿನ ಮೂಲ ಪತ್ತೆಯಾಗಿಲ್ಲ.

ಬಂಗಾರಪೇಟೆ ತಾಲ್ಲೂಕಿನಲ್ಲಿ ಹೊರ ರಾಜ್ಯಕ್ಕೆ ಹೋಗಿ ಬಂದಿದ್ದ 4 ಮಂದಿಗೆ ಮತ್ತು ವಿಷಮ ಶೀತ ಜ್ವರವಿರುವ ಒಬ್ಬರಿಗೆ ಸೋಂಕು ಬಂದಿದೆ. ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶವನ್ನು ಸೀಲ್‌ಡೌನ್‌ ಮಾಡಲಾಗಿದೆ. ಸುರಕ್ಷತಾ ಕ್ರಮವಾಗಿ ಇಡೀ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಕ್ವಾರಂಟೈನ್‌ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.