ADVERTISEMENT

ಕೋಲಾರ | ಅರಸು ಸಾಮಾಜಿಕ ನ್ಯಾಯದ ಹರಿಕಾರರು: ಜಿಲ್ಲಾಧಿಕಾರಿ ಸೆಲ್ವಮಣಿ ಬಣ್ಣನೆ

'ಯೋಜನೆಗಳು ಸಮಾಜಕ್ಕೆ ದಾರಿದೀಪ'

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2021, 14:09 IST
Last Updated 20 ಆಗಸ್ಟ್ 2021, 14:09 IST
ಕೋಲಾರದಲ್ಲಿ ಶುಕ್ರವಾರ ನಡೆದ ದೇವರಾಜ ಅರಸು ಜಯಂತಿಯಲ್ಲಿ ಜಿಲ್ಲಾಧಿಕಾರಿ ಆರ್‌.ಸೆಲ್ವಮಣಿ ಮಾತನಾಡಿದರು
ಕೋಲಾರದಲ್ಲಿ ಶುಕ್ರವಾರ ನಡೆದ ದೇವರಾಜ ಅರಸು ಜಯಂತಿಯಲ್ಲಿ ಜಿಲ್ಲಾಧಿಕಾರಿ ಆರ್‌.ಸೆಲ್ವಮಣಿ ಮಾತನಾಡಿದರು   

ಕೋಲಾರ: ‘ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರು ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಕಲ್ಪಿಸಿದ ಸಾಮಾಜಿಕ ಹರಿಕಾರರು’ ಎಂದು ಜಿಲ್ಲಾಧಿಕಾರಿ ಆರ್‌.ಸೆಲ್ವಮಣಿ ಬಣ್ಣಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಇಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ದೇವರಾಜ ಅರಸು ಜಯಂತಿಯಲ್ಲಿ ಮಾತನಾಡಿ, ‘ಅರಸು ಅವರ ಅಧಿಕಾರಾವಧಿಯಲ್ಲಿ ಜಾರಿಯಾದ ಯೋಜನೆಗಳು ರಾಜ್ಯದಲ್ಲಿ ಇಂದಿಗೂ ಮನೆ ಮಾತಾಗಿವೆ’ ಎಂದು ಅಭಿಪ್ರಾಯಪಟ್ಟರು.

‘ಸರ್ವರಿಗೂ ಸಮಬಾಳು ಮತ್ತು ಸರ್ವರಿಗೂ ಸಮಪಾಲು ಕಲ್ಪಿಸಲು ಅರಸು ಸಾಕಷ್ಟು ಶ್ರಮಿಸಿದರು. ಅವರ ಯೋಜನೆಗಳು ಸಮಾಜಕ್ಕೆ ದಾರಿದೀಪ. 28 ವರ್ಷ ಶಾಸಕರಾಗಿದ್ದ ಅವರು ಮುಖ್ಯಮಂತ್ರಿಯಾಗಿಯೂ ಸೇವೆ ಸಲ್ಲಿಸಿದರು. ಅವರ ಅಧಿಕಾರಾವಧಿಯಲ್ಲಿ ಬಡವರು, ಹಿಂದುಳಿದ ವರ್ಗದವರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದರು. ಬಡವರು ಮತ್ತು ಶೋಷಿತರ ಪರ ಕಾರ್ಯಕ್ರಮ ರೂಪಿಸಿದ ಮಹಾನ್ ಮುತ್ಸದಿ’ ಎಂದು ಸ್ಮರಿಸಿದರು.

ADVERTISEMENT

‘ಈ ಹಿಂದೆ ಬಡವರು ಬೆಳೆದ ಬೆಳೆಯನ್ನು ಶ್ರೀಮಂತರು ದೋಚಿಕೊಂಡು ಹೋಗುತ್ತಿದ್ದರು. ಇದನ್ನು ಸಹಿಸದ ಅರಸು ಉಳುವವನಿಗೆ ಭೂಮಿ ಯೋಜನೆ ಜಾರಿಗೊಳಿಸಿದರು. ಅವರ ಸೇವೆಯನ್ನು ರೈತರು ಎಂದಿಗೂ ಮರೆಯಬಾರದು. ಹಿಂದುಳಿದ ವರ್ಗಗಳ ಶೈಕ್ಷಣಿಕ ಅಭಿವೃದ್ಧಿಗೆ ರಾಜ್ಯದಲ್ಲಿ ವಿದ್ಯಾರ್ಥಿನಿಲಯ ಸ್ಥಾಪಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಅವರ ಆದರ್ಶ ಸಾರ್ವಕಾಲಿಕ’ ಎಂದರು.

ಮೌನ ಕ್ರಾಂತಿ: ‘ಅರಸು ಅವರು ಜೀತದಾಳು ಹಾಗೂ ಮಲಹೊರುವ ಪದ್ಧತಿ ನಿಷೇಧಿಸಿ ಪ್ರಜಾಪ್ರಭುತ್ವಕ್ಕೆ ಅರ್ಥ ಕಲ್ಪಿಸಿದರು. ಎಲ್ಲಾ ಬಡವರಿಗೂ ವಸತಿ ಸೌಲಭ್ಯ, ಶಿಕ್ಷಣದಲ್ಲಿ ಸಮಾನತೆ ಕಲ್ಪಿಸುವ ಮೂಲಕ ಸಮಾಜಮುಖಿಯಾಗಿ ಕೆಲಸ ಮಾಡಿದರು. ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ಕಲ್ಪಿಸಿ ಸಹಾಯಧನ ನೀಡಿದರು. ಮೌನ ಕ್ರಾಂತಿ ಮೂಲಕ ಸಾಮಾಜಿಕ ಬದಲಾವಣೆಗೆ ನಾಂದಿ ಹಾಡಿದರು’ ಎಂದು ತಿಳಿಸಿದರು.

‘ಅರಸು ಅವರು ಮೈಸೂರು ರಾಜ್ಯಕ್ಕೆ ಕರ್ನಾಟಕವೆಂದು ನಾಮಕರಣ ಮಾಡಿದರು. ಕರ್ನಾಟಕವನ್ನು ಇಡೀ ದೇಶಕ್ಕೆ ಮಾದರಿಯಾಗುವಂತೆ ಮುನ್ನಡೆಸಿ ಹಿಂದುಳಿದ ವರ್ಗದವರನ್ನು ಮುಖ್ಯವಾಹಿನಿಗೆ ತಂದ ಕೀರ್ತಿ ಅವರಿಗೆ ಸಲ್ಲುತ್ತದೆ. ಸಮಾಜದಲ್ಲಿ ಸಮಾನತೆಯ ಬೀಜ ಬಿತ್ತಿ ಅದನ್ನು ನನಸಾಗಿಸುವ ಕನಸು ಕಂಡಿದ್ದರು. ಹೀಗಾಗಿ ಸಣ್ಣ ಪುಟ್ಟ ಜಾತಿಗಳೂ ಅವಕಾಶ ಸಿಕ್ಕಿ ಆರ್ಥಿಕವಾಗಿ ಬೆಳೆಯಲು ಸಾಧ್ಯವಾಯಿತು’ ಎಂದು ಹೇಳಿದರು.

ಸುಶಿಕ್ಷಿತರಾಗಿ: ‘ಅರಸು ಅವರು ಕೃಷಿ ಕ್ಷೇತ್ರಕ್ಕೂ ಆದ್ಯತೆ ನೀಡಿದ್ದರು. ಆಗಲೇ ರೈತರ ಸಾಲ ಮನ್ನಾ ಮಾಡಿದ್ದರು. ಅಸಮಾನತೆ ತೊಡೆದು ಹಾಕಲು ಹೆಚ್ಚು ಶ್ರಮ ವಹಿಸಿ ಅಹಿಂದ ವರ್ಗಗಳಿಗೆ ಪ್ರಗತಿಪರ ಯೋಜನೆಗಳನ್ನು ಜಾರಿಗೊಳಿಸಿದರು. ಹಿಂದುಳಿದ ವರ್ಗಗಳ ಸಾಮಾಜಿಕ ನ್ಯಾಯಕ್ಕಾಗಿ ದುಡಿದ ಧೀಮಂತ ನಾಯಕ. ಅವರ ಉದಾತ್ತ ಚಿಂತನೆ ಎಲ್ಲರಿಗೂ ಆದರ್ಶವಾಗಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ್ ಕಿವಿಮಾತು ಹೇಳಿದರು.

‘ಅರಸು ಅವರು ಒಂದು ವರ್ಗಕ್ಕೆ ಸೀಮಿತರಾಗಿರಲಿಲ್ಲ. ಅವರು ಹಿಂದುಳಿದ ವರ್ಗಗಳ ಏಳಿಗೆಗಾಗಿ ವಿದ್ಯಾರ್ಥಿವೇತನ, ರಾಜಕೀಯ ಮತ್ತು ಸಾಮಾಜಿಕ ಮೀಸಲಾತಿ ಜಾರಿಗೆ ತಂದರು. ಅವರನ್ನು ಹಿಂದುಳಿದ ವರ್ಗಗಳ ದೇವರೆಂದು ಭಾವಿಸಬೇಕು. ಅವರು ಜಾರಿಗೊಳಿಸಿದ ಜನಪರ ಯೋಜನೆಗಳನ್ನು ಮುಂದುವರಿಸಿಕೊಂಡು ಹೋಗಬೇಕು’ ಎಂದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ರಾಜಣ್ಣ, ಹಿಂದುಳಿದ ವರ್ಗಗಳ ಮುಖಂಡರು ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.