ಕೋಲಾರ: ಕೇಂದ್ರ ಹಾಗೂ ರಾಜ್ಯ ಸರ್ಕಾರ ಇತ್ತೀಚೆಗೆ ಹೊರಡಿಸಿರುವ ಸುಗ್ರೀವಾಜ್ಞೆಗಳು ಮತ್ತು ರೂಪಿಸಿರುವ ಮಸೂದೆಗಳನ್ನು ಖಂಡಿಸಿ ಸೋಮವಾರ (ಸೆ.28) ನಡೆಸಲು ಉದ್ದೇಶಿಸಿರುವ ರಾಜ್ಯ ಬಂದ್‌ಗೆ ಸಂಪೂರ್ಣ ಬೆಂಬಲ ನೀಡಲು ಇಲ್ಲಿ ಶನಿವಾರ ನಡೆದ ವಿವಿಧ ಸಂಘಟನೆಗಳ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಮತ್ತು ಕಾರ್ಮಿಕ ಕಾಯ್ದೆಗಳ ತಿದ್ದುಪಡಿ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರೈತ, ದಲಿತ ಹಾಗೂ ಕಾರ್ಮಿಕರ ಐಕ್ಯ ಹೋರಾಟ ಸಮಿತಿಯು ಈಗಾಗಲೇ ರಾಜ್ಯ ವ್ಯಾಪಿ ಬಂದ್‌ಗೆ ಕರೆ ನೀಡಿದೆ.
ಈ ಹಿನ್ನೆಲೆಯಲ್ಲಿ ಬಂದ್‌ನ ರೂಪುರೇಷೆ ಸಂಬಂಧ ಇಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಸಭೆಯಲ್ಲಿ ಪಾಲ್ಗೊಂಡ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ರೈತ, ದಲಿತ, ಕಾರ್ಮಿಕ ಹಾಗೂ ಪ್ರಗತಿಪರ ಸಂಘಟನೆಗಳ ಸದಸ್ಯರು, ‘ಬಂದ್‌ನ ಭಾಗವಾಗಿ ಜಿಲ್ಲೆಯನ್ನು ಸಂಪೂರ್ಣ ಬಂದ್ ಮಾಡುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರದ ಗಮನ ಸೆಳೆಯಬೇಕು’ ಎಂದು ಸಲಹೆ ನೀಡಿದರು.
‘ಸರ್ಕಾರಗಳು ರೈತ ಮತ್ತು ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿವೆ. ಸರ್ಕಾರಗಳ ನಡೆಗೆ ದೇಶದೆಲ್ಲೆಡೆ ತೀವ್ರ ವಿರೋಧ ವ್ಯಕ್ತವಾಗಿದೆ. ರೈತ, ಕಾರ್ಮಿಕ ಹಾಗೂ ಜನ ವಿರೋಧಿ ಆಗಿರುವ ಕಾಯ್ದೆಗಳನ್ನು ಹಿಂಪಡೆಯುವಂತೆ ಸರ್ಕಾರಗಳ ಮೇಲೆ ಒತ್ತಡ ಹೇರಲು ಬಂದ್‌ಗೆ ಕರೆ ನೀಡಲಾಗಿದೆ. ಈ ಜನಪರ ಹೋರಾಟಕ್ಕೆ ಎಲ್ಲಾ ಸಂಘಟನೆಗಳು ಕೈಜೋಡಿಸಬೇಕು’ ಎಂದು ಸಿಐಟಿಯು ಜಿಲ್ಲಾ ಘಟಕದ ಉಪಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ಮನವಿ ಮಾಡಿದರು.
‘ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಆರಂಭದಿಂದಲೂ ರೈತ ಹಾಗೂ ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸುತ್ತಿದೆ. ಬಂಡವಾಳಶಾಹಿಗಳು ಮತ್ತು ಬಹುರಾಷ್ಟ್ರೀಯ ಕಂಪನಿಗಳ ಕೈಗೊಂಬೆಯಾಗಿರುವ ಸರ್ಕಾರಗಳು ಜನಹಿತ ಕಡೆಗಣಿಸಿವೆ’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಕಿಡಿಕಾರಿದರು.
ಚರ್ಚೆಗೆ ಅವಕಾಶವಿಲ್ಲ: ‘ನೂತನ ಕಾಯ್ದೆಗಳ ಸಂಬಂಧ ಸರ್ಕಾರಗಳು ಸಂಸತ್ ಮತ್ತು ಶಾಸನ ಸಭೆಯಲ್ಲಿ ಮುಕ್ತ ಚರ್ಚೆಗೆ ಅವಕಾಶ ನೀಡುತ್ತಿಲ್ಲ. ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿರುವ ಸರ್ಕಾರಗಳು ಪ್ರಜಾಪ್ರಭುತ್ವ ವ್ಯವಸ್ಥೆಗೆ ದೊಡ್ಡ ಕೊಡಲಿ ಪೆಟ್ಟು ಕೊಟ್ಟಿವೆ’ ಎಂದು ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾ ಘಟಕದ ಕಾರ್ಯದರ್ಶಿ ಟಿ.ಎಂ.ವೆಂಕಟೇಶ್ ಅಸಮಾಧಾನ ವ್ಯಕ್ತಪಡಿಸಿದರು.
‘ಜನಸಾಮಾನ್ಯರ ಉಳಿವಿಗಾಗಿ ನಡೆಯುತ್ತಿರುವ ಬಂದ್‌ಗೆ ಪಕ್ಷಾತೀತವಾಗಿ ಬೆಂಬಲ ನೀಡಬೇಕು. ಬಂದ್‌ನ ಸಂಬಂಧ ಪ್ರಚಾರ ನಡೆಸಬೇಕು. ಜಿಲ್ಲೆಯ ತಾಲ್ಲೂಕು ಕೇಂದ್ರಗಳಲ್ಲಿ ಸಭೆ ಮಾಡಬೇಕು, ಬೈಕ್ ಜಾಥಾ ಮೂಲಕ ಬಂದ್‌ನ ಮಹತ್ವದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು’ ಎಂದು ರೈತ ಸಂಘ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಅಬ್ಬಣಿ ಶಿವಪ್ಪ ಕೋರಿದರು.
ಸಿಐಟಿಯು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ, ಕಾರ್ಯದರ್ಶಿ ಪಿ.ಶ್ರೀನಿವಾಸ್, ಕೋಚಿಮುಲ್ ನಿರ್ದೇಶಕ ಹರೀಶ್, ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಘಟಕದ ಅಧ್ಯಕ್ಷ ಶಾಮೀರ್ ಪಾಷಾ, ದಲಿತ ಸಂಘರ್ಷ ಸಮಿತಿ ಸದಸ್ಯ ಟಿ.ವಿಜಯಕುಮಾರ್, ಜನವಾದಿ ಮಹಿಳಾ ಸಂಘಟನೆ ಸದಸ್ಯೆ ವಿಜಯಕುಮಾರಿ, ದಲಿತ ಹಕ್ಕುಗಳ ಸಮಿತಿ ಸದಸ್ಯ ವಿ.ಅಂಬರೀಷ್, ಟಿಪ್ಪು ಸೆಕ್ಯೂಲರ್ ಸೇನೆ ಸದಸ್ಯ ಆಸೀಫ್, ಜನಾಧಿಕಾರ ಸಂಘಟನೆ ಸದಸ್ಯ ಸಂತೋಷ್ ಪಾಲ್ಗೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.