ADVERTISEMENT

ವೈದ್ಯಕೀಯ ತ್ಯಾಜ್ಯ ವಿಲೇವಾರಿಯಲ್ಲಿ ಲೋಪ

ಇಟಿಸಿಎಂ ಆಸ್ಪತ್ರೆ ಆಡಳಿತ ಮಂಡಳಿಗೆ ಅಧಿಕಾರಿಗಳ ತರಾಟೆ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2019, 19:31 IST
Last Updated 21 ಡಿಸೆಂಬರ್ 2019, 19:31 IST
ಕೋಲಾರದ ಇಟಿಸಿಎಂ ಆಸ್ಪತ್ರೆಯ ವೈದ್ಯಕೀಯ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಬೆಂಕಿ ಹಚ್ಚಿ ಸುಡುತ್ತಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ನಗರಸಭೆ ಅಧಿಕಾರಿಗಳು ಆಸ್ಪತ್ರೆ ಆವರಣದಲ್ಲಿ ಶನಿವಾರ ಪರಿಶೀಲನೆ ನಡೆಸಿದರು.
ಕೋಲಾರದ ಇಟಿಸಿಎಂ ಆಸ್ಪತ್ರೆಯ ವೈದ್ಯಕೀಯ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಬೆಂಕಿ ಹಚ್ಚಿ ಸುಡುತ್ತಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ನಗರಸಭೆ ಅಧಿಕಾರಿಗಳು ಆಸ್ಪತ್ರೆ ಆವರಣದಲ್ಲಿ ಶನಿವಾರ ಪರಿಶೀಲನೆ ನಡೆಸಿದರು.   

ಕೋಲಾರ: ನಗರದ ಇಟಿಸಿಎಂ ಆಸ್ಪತ್ರೆಯ ವೈದ್ಯಕೀಯ ತ್ಯಾಜ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ನಗರಸಭೆ ಆರೋಗ್ಯ ವಿಭಾಗದ ಅಧಿಕಾರಿಗಳು ಆಸ್ಪತ್ರೆಗೆ ಶನಿವಾರ ದಿಢೀರ್‌ ಭೇಟಿ ನೀಡಿ ಆಡಳಿತ ಮಂಡಳಿ ಸದಸ್ಯರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಆಸ್ಪತ್ರೆಯಲ್ಲಿ ಉತ್ಪತ್ತಿಯಾಗುವ ವೈದ್ಯಕೀಯ ತ್ಯಾಜ್ಯವನ್ನು ಆಡಳಿತ ಮಂಡಳಿಯು ಸಮರ್ಪಕವಾಗಿ ವಿಲೇವಾರಿ ಮಾಡದೆ ಆಸ್ಪತ್ರೆ ಆವರಣದಲ್ಲಿ ರಾಶಿ ಹಾಕಿ ಬೆಂಕಿ ಹಚ್ಚಿ ಸುಡುತ್ತಿತ್ತು. ಈ ಬಗ್ಗೆ ಸಾರ್ವಜನಿಕರು ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ನಗರಸಭೆಗೆ ದೂರು ಕೊಟ್ಟಿದ್ದರು.

ಈ ದೂರು ಆಧರಿಸಿ ಕಾರ್ಯಾಚರಣೆಗಿಳಿದ ಅಧಿಕಾರಿಗಳು ಆಸ್ಪತ್ರೆ ಕೆಲಸಗಾರರು ಆವರಣದಲ್ಲಿ ವೈದ್ಯಕೀಯ ತ್ಯಾಜ್ಯ ಸುರಿದು ಬೆಂಕಿ ಹಚ್ಚಿ ಸುಡುತ್ತಿರುವುದನ್ನು ಪತ್ತೆ ಮಾಡಿದರು. ಅಲ್ಲದೇ, ಸ್ಥಳಕ್ಕೆ ಅಗ್ನಿಶಾಮಕ ದಳದ ವಾಹನ ಕರೆಸಿ ವೈದ್ಯಕೀಯ ತ್ಯಾಜ್ಯಕ್ಕೆ ಹಚ್ಚಲಾಗಿದ್ದ ಬೆಂಕಿ ನಂದಿಸಿದರು.

ADVERTISEMENT

ಜಿಲ್ಲಾ ಪರಿಸರ ಅಧಿಕಾರಿ ಸಿ.ಆರ್‌.ಮಂಜುನಾಥ್‌, ‘ವೈದ್ಯಕೀಯ ತ್ಯಾಜ್ಯವನ್ನು ಏಕೆ ಸಮರ್ಪಕವಾಗಿ ವಿಲೇವಾರಿ ಮಾಡುತ್ತಿಲ್ಲ’ ಎಂದು ಆಸ್ಪತ್ರೆ ಆಡಳಿತ ಮಂಡಳಿ ಸದಸ್ಯರನ್ನು ಪ್ರಶ್ನಿಸಿದರು. ಇದಕ್ಕೆ ಸದಸ್ಯರು ಸಮರ್ಪಕ ಉತ್ತರ ನೀಡಲಿಲ್ಲ.

ಇದರಿಂದ ಅಸಮಾಧಾನಗೊಂಡ ಮಂಜುನಾಥ್‌, ‘ವೈದ್ಯಕೀಯ ತ್ಯಾಜ್ಯವನ್ನು ಕಂಡಕಂಡಲ್ಲಿ ವಿಲೇವಾರಿ ಮಾಡಬಾರದು. ಬದಲಿಗೆ ಮೀರಾ ಎನ್ವಿರೊಟೆಕ್‌ ಪ್ರೈವೇಟ್‌ ಲಿಮಿಟೆಡ್‌ ಏಜೆನ್ಸಿ ಸಿಬ್ಬಂದಿಗೆ ಕೊಡಬೇಕು. ತ್ಯಾಜ್ಯ ವಿಲೇವಾರಿಯಲ್ಲಿ ನಿರ್ಲಕ್ಷ್ಯ ತೋರಿದರೆ ಕ್ರಿಮಿನಲ್ ಪ್ರಕರಣ ದಾಖಲಿಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ಎಚ್ಚರ ವಹಿಸುತ್ತೇವೆ: ‘ವೈದ್ಯಕೀಯ ತ್ಯಾಜ್ಯವನ್ನು ಖಾಸಗಿ ಏಜೆನ್ಸಿಯವರು ಹಲವು ತಿಂಗಳಿಂದ ತೆಗೆದುಕೊಂಡು ಹೋಗಿಲ್ಲ. ತ್ಯಾಜ್ಯ ಹೆಚ್ಚಿದ್ದರಿಂದ ಆಸ್ಪತ್ರೆಯ ಡಿ ಗ್ರೂಪ್ ನೌಕರರು ಆವರಣದಲ್ಲಿ ರಾಶಿ ಹಾಕಿ ಬೆಂಕಿ ಹಚ್ಚಿದ್ದಾರೆ. ಇನ್ನು ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸುತ್ತೇವೆ’ ಎಂದು ಆಡಳಿತ ಮಂಡಳಿ ಸದಸ್ಯರು ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಮಂಜುನಾಥ್, ‘ಇಟಿಸಿಎಂ ಸೇರಿದಂತೆ ನಗರದ ಬಹುಪಾಲು ಆಸ್ಪತ್ರೆಗಳು ವೈದ್ಯಕೀಯ ತ್ಯಾಜ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿವೆ. ಈ ಆಸ್ಪತ್ರೆಗಳು ವೈದ್ಯಕೀಯ ತ್ಯಾಜ್ಯ ವಿಲೇವಾರಿ ವಿಚಾರದಲ್ಲಿ ಸರ್ಕಾರದ ಆದೇಶ ಪಾಲಿಸಬೇಕು. ಇಲ್ಲದಿದ್ದರೆ ಯಾವುದೇ ಮುಲಾಜಿಲ್ಲದೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಶಿಸ್ತುಕ್ರಮ ಜರುಗಿಸುತ್ತೇವೆ’ ಎಂದು ಹೇಳಿದರು.

ನಗರಸಭೆ ಆಯುಕ್ತ ಶ್ರೀಕಾಂತ್, ಆರೋಗ್ಯ ನಿರೀಕ್ಷಕಿ ದೀಪಾ ಹಾಗೂ ಸಿಬ್ಬಂದಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.