
ಕೋಲಾರ: ಜಿಲ್ಲೆಯ ಎಲ್ಲಾ ತಾಲ್ಲೂಕು ಮಟ್ಟದಲ್ಲಿ ಅಂಗವಿಕಲರ ಕುಂದುಕೊರತೆ ಸಭೆ ನಡೆಸಿ, ಅವರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಲಾಗುತ್ತಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಎಂ.ಮಂಗಳಾ ತಿಳಿಸಿದರು.
ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಶನಿವಾರ ನಡೆದ ಅಂಗವಿಕಲರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಅಂಗವಿಕಲರ ಸಮಸ್ಯೆಗಳಿಗೆ ಸ್ಥಳೀಯವಾಗಿ ಸ್ಪಂದಿಸಿ, ಪರಿಹರಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕು ಮಟ್ಟದಲ್ಲಿ ಕುಂದುಕೊರತೆ ಸಭೆಗಳನ್ನು ನಿಯಮಿತವಾಗಿ ಆಯೋಜಿಸಿ ಅವರ ಸಮಸ್ಯೆಗೆ ಪರಿಹಾರ ಒದಗಿಸಲು ಪ್ರಯತ್ನಿಸಲಾಗುತ್ತಿದೆ ಎಂದರು.
ಸರ್ಕಾರ ಅಂಗವಿಕಲರ ಏಳಿಗೆಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ಯೋಜನೆಯ ಲಾಭ ಅರ್ಹ ಅಂಗವಿಕಲರಿಗೆ ದೊರಕಿಸಲು ಅಧಿಕಾರಿಗಳು ಕ್ರಮ ವಹಿಸುತ್ತಿದ್ದಾರೆ. ಅರ್ಹರು ಸಹ ಇಂತಹ ಯೋಜನೆಗಳ ಮಾಹಿತಿ ಪಡೆದು ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಅಂಗವಿಕಲರು ಸಾಧನೆ ಮಾಡುವಲ್ಲಿ ಯಾರಿಗಿಂತಲೂ ಕಡಿಮೆಯಿಲ್ಲ. ಇತರರಿಗಿಂತ ಹೆಚ್ಚು ಯೋಚನಾ ಶಕ್ತಿ, ಧೈರ್ಯ, ಆತ್ಮಸ್ಥೈರ್ಯ ಹೊಂದಿದ್ದಾರೆ ಎಂದು ಸ್ಫೂರ್ತಿ ತುಂಬಿದರು.
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಆರ್.ಮಂಜುಳಾ ಮಾತನಾಡಿ, ಇಲಾಖೆಯಿಂದ 10 ದ್ವಿಚಕ್ರ ವಾಹನ ಹಾಗೂ ಕಾರ್ಮಿಕ ಇಲಾಖೆಯಿಂದ 11 ದ್ವಿಚಕ್ರ ವಾಹನಗಳನ್ನು ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಅಂಗವೈಕಲ್ಯ ಸಾಧನೆಗೆ ಅಡ್ಡಿಯಲ್ಲ ಎಂಬುವುದನ್ನು ಅಂಗವಿಕಲರು ಮತ್ತೊಮ್ಮೆ ಸಾಬೀತು ಪಡಿಸಿದರು. ಅಂಗವಿಕಲರ ಕ್ರೀಡಾಕೂಟದಲ್ಲಿ ನೂರಾರು ಮಕ್ಕಳು ಸಕ್ರಿಯವಾಗಿ ಪಾಲ್ಗೊಂಡು ಕ್ರೀಡಾ ಸ್ಫೂರ್ತಿ ಮೆರೆದರು. ಓಟ, ಗುಂಡು ಎಸೆತ, ಚೆಂಡು ಎಸೆತ, ಗಾಯನ ಸೇರಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಮಕ್ಕಳ ವಿಶೇಷ ಪ್ರತಿಭೆ ಅನಾವರಣಕ್ಕೆ ಕ್ರೀಡಾಕೂಟ ವೇದಿಕೆ ಕಲ್ಪಿಸಿತು.
ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಆರ್.ಗೀತಾ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಶ್ರೀನಿವಾಸಸ್, ಅಂತರಗಂಗೆ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಯ ಮುಖ್ಯಸ್ಥ ಶಂಕರ್, ಇಲಾಖೆಯ ಸಿಬ್ಬಂದಿ, ವಿವಿಧ ಅಂಗವಿಕಲರ ಸ್ವಯಂ ಸೇವಾ ಸಂಘಗಳು ಹಾಗೂ ಅಂಗವಿಕಲರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.