ADVERTISEMENT

ಸಾಮಾಜಿಕ– ಶೈಕ್ಷಣಿಕ ವರದಿ ಬಹಿರಂಗಪಡಿಸಿ: ಕೆ.ಎಂ.ರಾಮಚಂದ್ರಪ್ಪ

​ಪ್ರಜಾವಾಣಿ ವಾರ್ತೆ
Published 29 ಜನವರಿ 2020, 13:58 IST
Last Updated 29 ಜನವರಿ 2020, 13:58 IST

ಕೋಲಾರ: ‘ರಾಜ್ಯ ಸರ್ಕಾರವು ಸಾಮಾಜಿಕ ಶೈಕ್ಷಣಿಕ ವರದಿ ಬಹಿರಂಗಪಡಿಸಿ ಹಿಂದುಳಿದ ವರ್ಗಗಳಿಗೆ ಸೂಕ್ತ ಮೀಸಲಾತಿ ಕಲ್ಪಿಸಬೇಕು’ ಎಂದು ರಾಜ್ಯ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಕೆ.ಎಂ.ರಾಮಚಂದ್ರಪ್ಪ ಒತ್ತಾಯಿಸಿದರು.

ಇಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಮೀಸಲಾತಿಯಲ್ಲಿ ಆಗಿರುವ ಅನ್ಯಾಯ ಸರಿಪಡಿಸುವ ಉದ್ದೇಶಕ್ಕೆ ಸಿದ್ದರಾಮಯ್ಯ ಅವರ ಸರ್ಕಾರದ ಅವಧಿಯಲ್ಲಿ ₹ 168 ಕೋಟಿ ವೆಚ್ಚದಲ್ಲಿ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ನಡೆದು ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿದೆ. ಆದರೆ, ಆ ವರದಿ ಬಹಿರಂಗಪಡಿಸಲು ಸರ್ಕಾರ ಮೀನಮೇಷ ಎಣಿಸುತ್ತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ರಾಜ್ಯದ ಜನಸಂಖ್ಯೆಯಲ್ಲಿ ಹಿಂದುಳಿದ ವರ್ಗಗಳ ಜನಸಂಖ್ಯೆ ಶೇ 30ರಷ್ಟಿದೆ. ಯಾವುದೇ ಸರ್ಕಾರವನ್ನು ನಡುಗಿಸುವ ಸಾಮರ್ಥ್ಯ ಹಿಂದುಳಿದ ವರ್ಗಗಳಿಗೆ ಇದೆ. ಹಿಂದುಳಿದ ವರ್ಗಗಳಲ್ಲಿನ ಪ್ರವರ್ಗ 2ಎಗೆ ಇರುವ ಶೇ 15ರ ಮೀಸಲಾತಿಯನ್ನು ಶೇ 20ಕ್ಕೆ ಏರಿಸಬೇಕು. ಪ್ರವರ್ಗ 1ರ ಮೀಸಲಾತಿಯನ್ನು ಶೇ 5ಕ್ಕೆ ಹೆಚ್ಚಿಸಬೇಕು’ ಎಂದು ಮನವಿ ಮಾಡಿದರು.

ADVERTISEMENT

‘ಉತ್ತರ ಕರ್ನಾಟಕದಲ್ಲಿ ಪ್ರಬಲವಾಗಿರುವ ಬಣಜಿಗರನ್ನು ಹಿಂದುಳಿದ ವರ್ಗಕ್ಕೆ ಸೇರಿಸಬೇಕೆಂಬ ಒತ್ತಡವಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೋದ ಕಡೆಯಲೆಲ್ಲಾ ಈ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡುತ್ತಿದ್ದಾರೆ. ಆದರೆ, ಪ್ರಬಲ ವರ್ಗವನ್ನು ಹಿಂದುಳಿದ ವರ್ಗಕ್ಕೆ ಸೇರಿಸಿದರೆ ಸಮುದಾಯಕ್ಕೆ ಹಾಗೂ ಮುಂದಿನ ಪೀಳಿಗೆಯ ಮಕ್ಕಳಿಗೆ ಅನ್ಯಾಯವಾಗುತ್ತದೆ’ ಎಂದು ಹೇಳಿದರು.

‘ಸಿದ್ದರಾಮಯ್ಯ ಅವರ ಅವಧಿಯಲ್ಲಿ ವಿದ್ಯಾಸಿರಿ ಯೋಜನೆ ಸೇರಿದಂತೆ ಸಮುದಾಯಕ್ಕೆ ಅನೇಕ ಸೌಲಭ್ಯ ಕಲ್ಪಿಸಲಾಗಿದೆ. ಸಿದ್ದರಾಮಯ್ಯ ಅವರು ಬಜೆಟ್‌ ಮಂಡನೆಗೂ ಮುನ್ನ ಸಮುದಾಯದ ಮುಖಂಡರೊಂದಿಗೆ ಚರ್ಚಿಸುತ್ತಿದ್ದರು. ಆದರೆ, ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸಮುದಾಯದ ಮುಖಂಡರ ಒಂದೇ ಒಂದು ಸಭೆ ಕರೆಯಲಿಲ್ಲ’ ಎಂದು ಕಿಡಿಕಾರಿದರು.

‘ಬಿಜೆಪಿ ಸರ್ಕಾರ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿವೇತನ ನಿಲ್ಲಿಸಿದೆ. ಸರ್ಕಾರದ ಕ್ರಮದ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುತ್ತೇವೆ’ ಎಂದು ವಿವರಿಸಿದರು.

ಒಕ್ಕೂಟದ ಉಪಾಧ್ಯಕ್ಷರಾದ ವೇಣುಗೋಪಾಲ್, ಮರಿಬಸವಾಚಾರ್, ಪ್ರಧಾನ ಕಾರ್ಯದರ್ಶಿ ಆರ್.ವೆಂಕಟರಾಮ್, ಖಜಾಂಚಿ ಬದ್ರಿನಾಥ್, ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಪ್ರಸಾದ್‌ಬಾಬು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.