ADVERTISEMENT

ಮುಖ್ಯಮಂತ್ರಿ ಭೂತದಹನ: ಧರಣಿ

ಜಿಲ್ಲೆಯ ಅಭಿವೃದ್ಧಿ ಕಡೆಗಣನೆ: ರೈತ ಸಂಘ ಸದಸ್ಯರ ಆರೋಪ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2019, 15:30 IST
Last Updated 27 ಸೆಪ್ಟೆಂಬರ್ 2019, 15:30 IST
ಬಿಜೆಪಿ ಸರ್ಕಾರ ಜಿಲ್ಲೆಯ ಅಭಿವೃದ್ಧಿ ಕಡೆಗಣಿಸಿದೆ ಎಂದು ಆರೋಪಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಕೋಲಾರದಲ್ಲಿ ಶುಕ್ರವಾರ ಮುಖ್ಯಮಂತ್ರಿ ಯಡಿಯೂರಪ್ಪರ ಭೂತದಹನ ಮಾಡಿ ಧರಣಿ ನಡೆಸಿದರು.
ಬಿಜೆಪಿ ಸರ್ಕಾರ ಜಿಲ್ಲೆಯ ಅಭಿವೃದ್ಧಿ ಕಡೆಗಣಿಸಿದೆ ಎಂದು ಆರೋಪಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಕೋಲಾರದಲ್ಲಿ ಶುಕ್ರವಾರ ಮುಖ್ಯಮಂತ್ರಿ ಯಡಿಯೂರಪ್ಪರ ಭೂತದಹನ ಮಾಡಿ ಧರಣಿ ನಡೆಸಿದರು.   

ಕೋಲಾರ: ರಾಜ್ಯ ಬಿಜೆಪಿ ಸರ್ಕಾರ ಜಿಲ್ಲೆಯ ಅಭಿವೃದ್ಧಿ ಕಡೆಗಣಿಸಿದೆ ಎಂದು ಆರೋಪಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಇಲ್ಲಿ ಶುಕ್ರವಾರ ಧರಣಿ ನಡೆಸಿದರು.

ಮೆಕ್ಕೆ ವೃತ್ತದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪರ ಭೂತದಹನ ಮಾಡಿದ ಧರಣಿನಿರತರು, ‘ಕಾಂಗ್ರೆಸ್‌– ಜೆಡಿಎಸ್‌ ಮೈತ್ರಿ ಸರ್ಕಾರ ಈ ಹಿಂದೆ ಜಿಲ್ಲೆಯ ಅಭಿವೃದ್ಧಿಗಾಗಿ ಬಿಡುಗಡೆ ಮಾಡಿದ್ದ ಅನುದಾನವನ್ನು ಬಿಜೆಪಿ ಸರ್ಕಾರ ತಡೆ ಹಿಡಿದಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಬಿಜೆಪಿ ಸರ್ಕಾರ ರಾಜಕೀಯ ದುರುದ್ದೇಶದಿಂದ ಜಿಲ್ಲೆಯ ಅಭಿವೃದ್ಧಿ ಕಡೆಗಣಿಸುತ್ತಿದೆ. ಜನಪ್ರತಿನಿಧಿಗಳ ಒತ್ತಡಕ್ಕೆ ಮಣಿದು ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಗಳನ್ನು ಜಿಲ್ಲೆಯಿಂದ ವರ್ಗಾವಣೆ ಮಾಡುತ್ತಿದೆ. ಯಡಿಯೂರಪ್ಪ ಅವರು ಜಿಲ್ಲೆಯ ಜನಪ್ರತಿನಿಧಿಗಳ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ’ ಎಂದು ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ದೂರಿದರು.

ADVERTISEMENT

‘ಜಿಲ್ಲೆಯಲ್ಲಿ ಸತತ ಬರ ಪರಿಸ್ಥಿತಿಯಿದೆ. ಮಳೆಯಿಲ್ಲದೆ ಬೆಳೆ ನಷ್ಟವಾಗಿ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಾನುವಾರುಗಳಿಗೆ ಮೇವು ಹಾಗೂ ಕುಡಿಯುವ ನೀರಿಲ್ಲ. ಜಿಲ್ಲೆಯ ಅಭಿವೃದ್ಧಿ ಕುಂಠಿತಗೊಂಡಿದೆ. ನೀರು ಹಾಗೂ ಮೇವಿನ ಸಮಸ್ಯೆ ಬಗೆಹರಿಸುವಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ವಿಫಲರಾಗಿದ್ದಾರೆ’ ಎಂದು ಆರೋಪಿಸಿದರು.

ವರ್ಗಾವಣೆ ದಂಧೆ: ‘ಬಿಜೆಪಿ ಸರ್ಕಾರ ಸ್ಥಳೀಯ ಸಂಸದರ ಒತ್ತಡಕ್ಕೆ ಮಣಿದು ವರ್ಗಾವಣೆ ದಂಧೆ ನಡೆಸುತ್ತಿದೆ. ಸರ್ಕಾರಕ್ಕೆ ಜನ ಹಿತಕ್ಕಿಂತ ಪಕ್ಷದ ಮುಖಂಡರ ಹಿತರಕ್ಷಣೆಯೇ ಮುಖ್ಯವಾಗಿದೆ. ಜನಪ್ರತಿನಿಧಿಗಳು ಜಿಲ್ಲೆಯ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ’ ಎಂದು ಧರಣಿನಿರತರು ಕಿಡಿಕಾರಿದರು.

‘ಬರದಿಂದ ತತ್ತರಿಸಿರುವ ಜಿಲ್ಲೆಗೆ ವಿಶೇಷ ಪ್ಯಾಕೇಜ್‌ ಘೋಷಿಸಬೇಕು. ಮೇವು ಹಾಗೂ ನೀರಿನ ಸಮಸ್ಯೆ ಪರಿಹರಿಸಬೇಕು. ತಡೆ ಹಿಡಿದಿರುವ ಅನುದಾನ ಬಿಡುಗಡೆ ಮಾಡಬೇಕು. ದಕ್ಷ ಅಧಿಕಾರಿಗಳ ವರ್ಗಾವಣೆ ದಂಧೆ ನಿಲ್ಲಿಸಬೇಕು. ಇಲ್ಲದಿದ್ದರೆ ಜಿಲ್ಲೆಯಾದ್ಯಂತ ತೀವ್ರ ಹೋರಾಟ ನಡೆಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ಸಂಘಟನೆಯ ಜಿಲ್ಲಾ ಘಟಕದ ಸಂಚಾಲಕ ಕೆ.ಶ್ರೀನಿವಾಸಗೌಡ, ಮಹಿಳಾ ಘಟಕದ ಅಧ್ಯಕ್ಷೆ ಎ.ನಳಿನಿ, ಕೋಲಾರ ತಾಲ್ಲೂಕು ಘಟಕದ ಅಧ್ಯಕ್ಷ ಮಂಜುನಾಥ್‌, ಸದಸ್ಯರಾದ ನಾಗೇಶ್, ತಿಮ್ಮಣ್ಣ, ವೆಂಕಟೇಶಪ್ಪ, ಆಂಜಿನಪ್ಪ, ರಾಮಕೃಷ್ಣಪ್ಪ, ಜಗದೀಶ್, ರವೀಂದ್ರ, ಸುಧಾಕರ್, ಎಪಿಎಂಸಿ ಪುಟ್ಟರಾಜು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.