ADVERTISEMENT

ಕೋಲಾರ: ಸಮರೋಪಾದಿಯಲ್ಲಿ ಕಾರ್ಯ ನಿರ್ವಹಣೆ: ಡಾ.ಪ್ರದೀಪ್‌ಕುಮಾರ್

​ಪ್ರಜಾವಾಣಿ ವಾರ್ತೆ
Published 16 ಜುಲೈ 2020, 16:36 IST
Last Updated 16 ಜುಲೈ 2020, 16:36 IST

ಕೋಲಾರ: ‘ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಕಳೆದ 4 ತಿಂಗಳಿಂದ ಚಿಕಿತ್ಸೆ ನೀಡುತ್ತಿದ್ದೇವೆ’ ಎಂದು ಆರ್.ಎಲ್ ಜಾಲಪ್ಪ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಉಪ ಕುಲಪತಿ ಡಾ.ಪ್ರದೀಪ್‌ಕುಮಾರ್ ತಿಳಿಸಿದರು.

ಇಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿಯು ಕೋವಿಡ್–19 ವಿರುದ್ಧ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ವೇಳೆ ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿಗೂ ಸೋಂಕು ತಗುಲಿದೆ’ ಎಂದರು.

‘ಆಸ್ಪತ್ರೆ ವೈದ್ಯಕೀಯ ಸಿಬ್ಬಂದಿಯು ಜೀವದ ಹಂಗು ತೊರೆದು ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಆದರೆ, ಕೆಲವರು ಆಸ್ಪತ್ರೆ ವಿರುದ್ಧ ವಿನಾಕಾರಣ ಟೀಕೆ ಮಾಡುತ್ತಿದ್ದಾರೆ. ಆಸ್ಪತ್ರೆಯು ರಾಜ್ಯದ ಗಡಿ ಭಾಗದಲ್ಲಿದ್ದು, ಆಂಧ್ರಪ್ರದೇಶ, ತಮಿಳುನಾಡು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಸ್ಪತ್ರೆಗಳಲ್ಲಿ ಬೆಡ್‌ ಸಿಗದ ಕಾರಣ ಅಲ್ಲಿನ ಸೋಂಕಿತರು ಚಿಕಿತ್ಸೆಗಾಗಿ ನಮ್ಮ ಆಸ್ಪತ್ರೆಗೆ ಬರುತ್ತಿದ್ದಾರೆ’ ಎಂದು ವಿವರಿಸಿದರು.

ADVERTISEMENT

‘ಸೋಂಕಿತರ ಸಂಪರ್ಕಕ್ಕೆ ಬಂದವರನ್ನು ಕ್ವಾರಂಟೈನ್‌ ಮಾಡಲು ಆಸ್ಪತ್ರೆಯಲ್ಲಿ ಸ್ಥಳಾವಕಾಶವಿಲ್ಲ. ಹೀಗಾಗಿ ಅವರನ್ನು ಬೇರೆ ಆಸ್ಪತ್ರೆಗಳಿಗೆ ಕಳುಹಿಸಲಾಗುತ್ತಿದೆ. ಆದರೆ, ಈ ಬಗ್ಗೆ ಜನರಿಗೆ ತಪ್ಪು ಸಂದೇಶ ರವಾನೆಯಾಗಿದೆ. ನಾವು ಸೊಂಕಿತರಿಗೆ ಚಿಕಿತ್ಸೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದೇವೆ’ ಎಂದು ಸ್ಪಷ್ಟಪಡಿಸಿದರು.

ಆಸ್ಪತ್ರೆ ವೈದ್ಯಕೀಯ ಸೂಪರಿಂಟೆಂಡೆಂಟ್‌ ಡಾ.ಎಸ್‌.ಎಂ.ಅಜೀಂ ಮೋಹಿಯುದ್ದೀನ್, ವೈದ್ಯರಾದ ಡಾ.ಎಂ.ಡಿ.ಪ್ರಸನ್ನಕುಮಾರ್‌, ಡಾ.ಸುನೀಲ್‌ಕುಮಾರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.