ADVERTISEMENT

ಕರಡು ಮತದಾರರ ಪಟ್ಟಿ ಪ್ರಕಟ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2020, 16:18 IST
Last Updated 30 ನವೆಂಬರ್ 2020, 16:18 IST

ಕೋಲಾರ: ಜಿಲ್ಲೆಯ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ಸಾರ್ವಜನಿಕರು ಪರಿಶೀಲನೆ ಮಾಡಬಹುದು ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತಗಟ್ಟೆಗಳು, ತಾಲ್ಲೂಕು ಕಚೇರಿಗಳು, ಉಪ ವಿಭಾಗಾಧಿಕಾರಿ ಕಚೇರಿ ಹಾಗೂ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ. ಜತೆಗೆ ಮುಖ್ಯ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿಯವರ ವೆಬ್‌ಸೈಟ್‌ನಲ್ಲೂ ಮತದಾರರ ಪಟ್ಟಿ ಲಭ್ಯವಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರತಿ ಮತಗಟ್ಟೆಗೆ ಮತಗಟ್ಟೆ ಅಧಿಕಾರಿ ನೇಮಿಸಲಾಗಿದೆ. ಮತದಾರರು ತಮ್ಮ ಭಾಗದ ಮತಗಟ್ಟೆ ಹಂತದ ಅಧಿಕಾರಿಯನ್ನು ಸಂಪರ್ಕಿಸಿ ಮತದಾರರ ಪಟ್ಟಿಗೆ ಸಂಬಂಧಿಸಿದ ಮಾಹಿತಿ ಪಡೆಯಬಹುದು. ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ನಮೂನೆ-6 ಮತ್ತು ನಮೂನೆ-7ರಲ್ಲಿ ಆಕ್ಷೇಪಣಾ ಅರ್ಜಿ ಸಲ್ಲಿಸಲು ಡಿ.17ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಹೇಳಿದ್ದಾರೆ.

ADVERTISEMENT

2021ರ ಜ.1ಕ್ಕೆ 18 ವರ್ಷ ಪೂರ್ಣಗೊಳ್ಳುವ ಯುವಕ, ಯುವತಿಯರು ತಮ್ಮ ಹೆಸರನ್ನು ಹೊಸದಾಗಿ ಮತದಾರರ ಪಟ್ಟಿಗೆ ನೋಂದಾಯಿಸಲು ನಮೂನೆ-6ರಲ್ಲಿ ಅರ್ಜಿ ಸಲ್ಲಿಸಬೇಕು. ತಾವು ವಿದ್ಯಾಭ್ಯಾಸ ಮಾಡುತ್ತಿರುವ ಶಿಕ್ಷಣ ಸಂಸ್ಥೆ, ತಮ್ಮ ಭಾಗದ ಮತಗಟ್ಟೆ ಹಂತದ ಅಧಿಕಾರಿಗೆ, ತಾಲ್ಲೂಕು ಕಚೇರಿಗೆ ಅಥವಾ ಆನ್‌ಲೈನ್‌ ಮೂಲಕ ಕೇಂದ್ರ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.

ಮತದಾರರ ಹೆಸರು ಕೈಬಿಟ್ಟು ಹೋಗಿದ್ದರೆ ಅಂತಹವರು ಹೆಸರು ನೋಂದಾಯಿಸಬಹುದು. ಮೃತಪಟ್ಟಿರುವ ಅಥವಾ ಶಾಶ್ವತವಾಗಿ ಸ್ಥಳಾಂತರಗೊಂಡಿರುವ ಮತದಾರರ ಹೆಸರು ಕೈಬಿಡಲು ನಮೂನೆ-7ರಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಸ್ಪಷ್ಟಪಡಿಸಿದ್ದಾರೆ.

ಒಂದು ಭಾಗದ ಮತದಾರರ ಪಟ್ಟಿಯಿಂದ ಮತ್ತೊಂದು ಭಾಗದ ಮತದಾರರ ಪಟ್ಟಿಗೆ ವರ್ಗಾವಣೆ ಬಯಸುವ ಮತದಾರರು ನಮೂನೆ-8ಎರಲ್ಲಿ ಅರ್ಜಿ ಸಲ್ಲಿಸಬೇಕು. ಮತದಾರರ ಪಟ್ಟಿಯಲ್ಲಿನ ತಿದ್ದುಪಡಿ ಮತ್ತು ವಿಳಾಸ ಬದಲಾವಣೆ, ಭಾವಚಿತ್ರ ಬದಲಾವಣೆಗೆ ಸಂಬಂಧಪಟ್ಟಂತೆ ನಮೂನೆ-8ರಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.