ADVERTISEMENT

ಮಕ್ಕಳ ಸುರಕ್ಷತೆಗೆ ಒತ್ತು ಕೊಡಿ: ಗಂಗಾಧರ್ ಕಿವಿಮಾತು

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಗಂಗಾಧರ್ ಕಿವಿಮಾತು

​ಪ್ರಜಾವಾಣಿ ವಾರ್ತೆ
Published 23 ಜನವರಿ 2020, 13:47 IST
Last Updated 23 ಜನವರಿ 2020, 13:47 IST
ಮಕ್ಕಳ ಹಕ್ಕುಗಳು ಮತ್ತು ಕಾನೂನು ಕುರಿತು ಅಂಗನವಾಡಿ ಕಾರ್ಯಕರ್ತೆಯರಿಗೆ ಕೋಲಾರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಚ್.ಗಂಗಾಧರ್ ಮಾತನಾಡಿದರು.
ಮಕ್ಕಳ ಹಕ್ಕುಗಳು ಮತ್ತು ಕಾನೂನು ಕುರಿತು ಅಂಗನವಾಡಿ ಕಾರ್ಯಕರ್ತೆಯರಿಗೆ ಕೋಲಾರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಚ್.ಗಂಗಾಧರ್ ಮಾತನಾಡಿದರು.   

ಕೋಲಾರ: ‘ಅಂಗನವಾಡಿ ಕೇಂದ್ರದ ಸಿಬ್ಬಂದಿಯು ಮಕ್ಕಳ ಸುರಕ್ಷತೆಗೆ ಹೆಚ್ಚು ಒತ್ತು ಕೊಡಬೇಕು’ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಚ್.ಗಂಗಾಧರ್ ಕಿವಿಮಾತು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘದ ಸಹಯೋಗದಲ್ಲಿ ಇಲ್ಲಿ ಗುರುವಾರ ಅಂಗನವಾಡಿ ಕಾರ್ಯಕರ್ತೆಯರಿಗೆ ಮಕ್ಕಳ ಹಕ್ಕುಗಳು ಮತ್ತು ಕಾನೂನು ಕುರಿತು ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

‘ಮಕ್ಕಳಿಗೆ ವಂಚಿಸಿದರೆ ಅಥವಾ ಕಿರುಕುಳ ನೀಡಿದರೆ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಮಕ್ಕಳ ರಕ್ಷಣೆಗೆ ಇರುವ ಕಾನೂನುಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಮಕ್ಕಳ ಪೋಷಕರಿಗೆ ಕಾನೂನು ಬಗ್ಗೆ ಅರಿವು ಮೂಡಿಸಬೇಕು’ ಎಂದು ಸಲಹೆ ನೀಡಿದರು.

ADVERTISEMENT

‘ಸಮಾಜದಲ್ಲಿ ಅನ್ಯಾಯಕ್ಕೆ ಒಳಗಾದವರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ನ್ಯಾಯ ಪಡೆಯಬಹುದು. ವಾರ್ಷಿಕ ₹ 3 ಲಕ್ಷಕ್ಕಿಂತ ಕಡಿಮೆ ಆದಾಯ ಇರುವ ಬಡವರ ಪರವಾಗಿ ಪ್ರಾಧಿಕಾರವೇ ವಕೀಲರನ್ನು ನೇಮಿಸುತ್ತದೆ. ಬಡ ಜನರು ಇದ ಪ್ರಯೋಜನ ಪಡೆಯಬೇಕು’ ಎಂದು ಮನವಿ ಮಾಡಿದರು.

‘ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿರುವ ಪ್ರಕರಣಗಳ ಸಂಬಂಧ ರಾಜಿ ಸಂಧಾನ ನಡೆಸಿ ಪ್ರಕರಣ ಇತ್ಯರ್ಥಪಡಿಸಲಾಗುವುದು. ಗ್ರಾಮ ಪಂಚಾಯಿತಿ, ಶಾಲಾ ಕಾಲೇಜುಗಳಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಸುತ್ತಿದ್ದು, ಇದಕ್ಕೆ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಹಕರಿಸಬೇಕು. ಮಕ್ಕಳ ಹಕ್ಕುಗಳ ರಕ್ಷಣೆಗೆ ಪ್ರತಿಯೊಬ್ಬರು ಕೈಜೋಡಿಸಬೇಕು’ ಎಂದು ಕೋರಿದರು.

ಎಚ್ಚರ ವಹಿಸಿ: ‘ಪೋಷಕರ ನಂತರ ಮಕ್ಕಳನ್ನು ರಕ್ಷಣೆ ಮಾಡುವ ಜವಾಬ್ದಾರಿ ಅಂಗನವಾಡಿ ಕಾರ್ಯಕರ್ತೆಯರ ಮೇಲಿದೆ. ಅಂಗನವಾಡಿ ಕೇಂದ್ರದ ಅಡುಗೆ ಸಿದ್ಧತಾ ಕೊಠಡಿಗಳಿಗೆ ಮಕ್ಕಳು ಬಾರದಂತೆ ಎಚ್ಚರ ವಹಿಸಬೇಕು. ಅಗ್ನಿ ಅನಾಹುತದ ಬಗ್ಗೆ ಜಾಗೃತರಾಗಿಬೇಕು’ ಎಂದು ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಎನ್.ಡಿ.ಶ್ರೀನಿವಾಸ್ ಸಲಹೆ ನೀಡಿದರು.

‘ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಡುಗೆ ಸಹಾಯಕರು ಕಡಿಮೆ ವೇತನಕ್ಕೆ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಜೀವನ ನಿರ್ವಹಣೆಗೆ ಕಷ್ಟವಾಗಿದೆ. ಸರ್ಕಾರವು ಅಂಗನವಾಡಿ ಸಿಬ್ಬಂದಿಯ ವೇತನ ಹೆಚ್ಚಳ ಮಾಡಬೇಕು. ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗಲು ಕಾನೂನು ಜಾರಿಗೊಳಿಸಲಾಗಿದೆ’ ಎಂದು ಹೇಳಿದರು.

ಮಕ್ಕಳಸ್ನೇಹಿ ವಾತಾವರಣ: ‘ಮಕ್ಕಳ ಹಿತದೃಷ್ಟಿಯಿಂದ ಕಾನೂನು ಅರಿವು ಕಾರ್ಯಕ್ರಮ ನಡೆಸಲಾಗುತ್ತಿದೆ. ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯಕರ್ತೆಯರು ಮಕ್ಕಳಸ್ನೇಹಿ ವಾತಾವರಣ ಸೃಷ್ಟಿಸಬೇಕು’ ಎಂದು ಬಚ್‍ಪನ್ ಬಚಾವೋ ಆಂದೋಲನದ ರಾಜ್ಯ ಸಂಯೋಜಕ ಬಿನು ವರ್ಗೀಸ್ ತಿಳಿಸಿದರು.

‘ಬಾಲಾಪರಾಧಿಗಳ ಪ್ರಕರಣವನ್ನು ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಮಾಡುವುದು ಹಾಗೂ ಅವರಿಗೆ ಶಿಕ್ಷಣ, ಸಂಸ್ಕಾರ ನೀಡುವ ಮೂಲಕ ಸಾಮಾಜದ ಮುಖ್ಯವಾಹಿನಿಗೆ ತರುವ ಕೆಲಸವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಹಯೋಗದಲ್ಲಿ ಮಾಡಲಾಗುತ್ತದೆ’ ಎಂದು ಮಾಹಿತಿ ನೀಡಿದರು.

ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎಸ್.ಎಚ್.ಚೌಡಪ್ಪ, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಎನ್.ಎಂ.ಜಗದೀಶ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.