ADVERTISEMENT

ಪ್ರಜಾಪ್ರಭುತ್ವಕ್ಕೆ ಪ್ರಜ್ಞಾವಂತರ ಕೊಡಲಿ ಪೆಟ್ಟು

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಗಂಗಾಧರ ಚನ್ನಬಸಪ್ಪ ಹಡಪದ್‌ ಕಳವಳ

​ಪ್ರಜಾವಾಣಿ ವಾರ್ತೆ
Published 25 ಜನವರಿ 2021, 14:01 IST
Last Updated 25 ಜನವರಿ 2021, 14:01 IST
ಕೋಲಾರದಲ್ಲಿ ಸೋಮವಾರ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಸಾರ್ವಜನಿಕರು ಕಡ್ಡಾಯ ಮತದಾನದ ಪ್ರತಿಜ್ಞಾವಿಧಿ ಸ್ವೀಕರಿಸಿದರು.
ಕೋಲಾರದಲ್ಲಿ ಸೋಮವಾರ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಸಾರ್ವಜನಿಕರು ಕಡ್ಡಾಯ ಮತದಾನದ ಪ್ರತಿಜ್ಞಾವಿಧಿ ಸ್ವೀಕರಿಸಿದರು.   

ಕೋಲಾರ: ‘ದೇಶದಲ್ಲಿ ಪ್ರಜ್ಞಾವಂತ ಮತದಾರರೇ ಮತದಾನದಿಂದ ದೂರ ಉಳಿಯುತ್ತಿರುವುದು ವಿಷಾದಕರ. ಇದರಿಂದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕೊಡಲಿ ಪೆಟ್ಟು ಬೀಳುತ್ತದೆ’ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಗಂಗಾಧರ ಚನ್ನಬಸಪ್ಪ ಹಡಪದ್‌ ಕಳವಳ ವ್ಯಕ್ತಪಡಿಸಿದರು.

ಜಿಲ್ಲಾಡಳಿತವು ಇಲ್ಲಿ ಸೋಮವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಮಾತನಾಡಿ, ‘ಮತದಾನವು ಮೂಲಭೂತ ಹಕ್ಕು. ಮತದಾನದ ಮಹತ್ವ ಮತ್ತು ಪ್ರಜೆಗಳ ಜವಾಬ್ದಾರಿ ಬಗ್ಗೆ ಜಾಗೃತಿ ಮೂಡಿಸಲು ರಾಷ್ಟ್ರೀಯ ಮತದಾರರ ದಿನ ಆಚರಿಸಲಾಗುತ್ತಿದೆ’ ಎಂದರು.

‘ಭಾರತವು ವಿಶ್ವದ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಎಲ್ಲಾ ಜಾತಿ, ಧರ್ಮ, ಭಾಷೆ ಒಳಗೊಂಡ ಜಾತ್ಯಾತೀತ ರಾಷ್ಟ್ರ. ಯುವಕರು ಮತದಾನದಿಂದ ಹೊರಗುಳಿಯಬಾರದು. ಜನರಿಗೆ ಒಳಿತು ಮಾಡುವ ನಾಯಕರನ್ನು ಆಯ್ಕೆ ಮಾಡಬೇಕು. ದೇಶದ ಅಭಿವೃದ್ಧಿಗೆ ಪ್ರತಿ ಮತವು ಮುಖ್ಯ. ಆದ್ದರಿಂದ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಉತ್ತಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕು’ ಎಂದು ಸಲಹೆ ನೀಡಿದರು.

ADVERTISEMENT

‘ಗ್ರಾಮೀಣ ಪ್ರದೇಶಕ್ಕಿಂತ ನಗರ ಪ್ರದೇಶದಲ್ಲಿ ಮತದಾನ ಪ್ರಮಾಣ ಕಡಿಮೆಯಾಗುತ್ತಿದೆ. ನಗರವಾಸಿಗಳು ಶೈಕ್ಷಣಿಕವಾಗಿ ಮುಂದುವರಿದಿದ್ದರೂ ಅವರಿಗೆ ರಾಜಕೀಯ ಪ್ರಜ್ಞೆಯಿಲ್ಲ. ಮತದಾರರು ಮತದಾನದ ಮಹತ್ವ ತಿಳಿಯಬೇಕು. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಯುವಕರು ಹೆಚ್ಚು ಪಾಲ್ಗೊಳ್ಳುವಂತೆ ಮಾಡುವ ಉದ್ದೇಶಕ್ಕೆ ಮತದಾನದ ವಯಸ್ಸನ್ನು 21 ವರ್ಷದಿಂದ 18 ವರ್ಷಕ್ಕೆ ಇಳಿಸಲಾಗಿದೆ’ ಎಂದು ತಿಳಿಸಿದರು.

‘ಚುನಾವಣಾ ಆಯೋಗವು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುತ್ತಿದೆ. ಚುನಾವಣೆಗೆ ಸ್ಪರ್ಧಿಸಿದ ಅಭ್ಯರ್ಥಿಗಳು ಜಾತಿ, ಮತ, ಧರ್ಮದ ಆಧಾರದಲ್ಲಿ ಮತ ಕೇಳುವಂತಿಲ್ಲ. 18 ವರ್ಷ ತುಂಬಿದ ಎಲ್ಲರೂ ಕಡ್ಡಾಯವಾಗಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಬೇಕು’ ಎಂದು ಕಿವಿಮಾತು ಹೇಳಿದರು.

ಸ್ವಾಯತ್ತ ಸಂಸ್ಥೆ: ‘ಮತದಾರರನ್ನು ಅಧಿಕಾರಯುಕ್ತ, ಜಾಗರೂಕ, ಸುರಕ್ಷಿತ ಮತ್ತು ಮಾಹಿತಿಯುಕ್ತರಾಗಿ ಮಾಡುವುದು ಈ ವರ್ಷದ ಮತದಾರರ ದಿನಾಚರಣೆಯ ಘೋಷ ವಾಕ್ಯ. ಚುನಾವಣಾ ಆಯೋಗ ಸ್ವಾಯತ್ತ ಸಂಸ್ಥೆಯಾಗಿದೆ. ದೇಶದ ಪ್ರಗತಿಗೆ ಸಂಪನ್ಮೂಲ, ತಾಂತ್ರಿಕತೆ, ಆರ್ಥಿಕ ಸೌಲಭ್ಯದ ಜತೆಗೆ ಉತ್ತಮ ರಾಜಕೀಯ ವ್ಯವಸ್ಥೆ ಅಗತ್ಯ. ಉತ್ತಮ ಸರ್ಕಾರ ಆಡಳಿತಕ್ಕೆ ಬಂದರೆ ದೇಶದ ಪ್ರಗತಿ ಸಾಧ್ಯ’ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅಭಿಪ್ರಾಯಪಟ್ಟರು.

‘12ನೇ ಶತಮಾನದಲ್ಲೇ ಉತ್ತಮ ಪ್ರಜಾಪ್ರಭುತ್ವ ವ್ಯವಸ್ಥೆಯಿತ್ತು. ಬಸವಣ್ಣನವರ ಅನುಭವ ಮಂಟಪ ಉತ್ತಮ ಸಂಸತ್ ಆಗಿತ್ತು. ಈ ಹಿಂದೆ ಅನಕ್ಷರಸ್ಥರಿಗೆ, ದಲಿತರಿಗೆ, ಮಹಿಳೆಯರಿಗೆ, ಹಿಂದುಳಿದವರಿಗೆ, ಭೂರಹಿತರಿಗೆ ಮತದಾನ ಮಾಡುವ ಅವಕಾಶ ಇರಲಿಲ್ಲ. ಆದರೆ, ಸಂವಿಧಾನ ಎಲ್ಲರಿಗೂ ಮತದಾನದ ಅವಕಾಶ ಕಲ್ಪಿಸಿಕೊಟ್ಟಿದೆ’ ಎಂದು ವಿವರಿಸಿದರು.

‘ಪ್ರತಿ ವರ್ಷ ಜ.1ಕ್ಕೆ 18 ವರ್ಷ ತುಂಬಿದ ಎಲ್ಲರನ್ನೂ ಮತದಾರರ ಪಟ್ಟಿಗೆ ಸೇರಿಸಿಕೊಳ್ಳಲಾಗುವುದು. ಮತದಾರರಿಗೆ ಎಪಿಕ್ ಕಾರ್ಡ್‌ ನೀಡಲಾಗುವುದು. ಜಿಲ್ಲೆಯಲ್ಲಿ 12,37,309 ಮತದಾರರಿದ್ದಾರೆ. ಈ ಪೈಕಿ 6,18,139 ಮಂದಿ ಪುರುಷ ಹಾಗೂ 6,19,170 ಮಹಿಳಾ ಮತದಾರರಿದ್ದಾರೆ. ಇವರಲ್ಲಿ 13,145 ಮಂದಿ ಯುವ ಮತದಾರರನ್ನು ನೋಂದಣಿ ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು.

ಬಹುಮಾನ: ಉತ್ತಮವಾಗಿ ಕಾರ್ಯ ನಿರ್ವಹಿಸಿದ ಬಿಎಲ್‌ಓಗಳಿಗೆ ಪ್ರಶಂಸನೀಯ ಪ್ರಮಾಣಪತ್ರ ಮತ್ತು ನಗದು ಬಹುಮಾನ ನೀಡಲಾಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಸ್ನೇಹಾ, ತಹಶೀಲ್ದಾರ್‌ ಶೋಭಿತಾ, ಉಪ ವಿಭಾಗಾಧಿಕಾರಿ ವಿ.ಸೋಮಶೇಖರ್, ಜವಳಿ ಮತ್ತು ಕೈಮಗ್ಗ ಇಲಾಖೆ ಉಪ ನಿರ್ದೇಶಕಿ ಸೌಮ್ಯ, ಪದವಿ ಪೂರ್ವ ಹಾಗೂ ವೃತ್ತಿ ಶಿಕ್ಷಣ ಇಲಾಖೆ ಉಪ ನಿರ್ದೇಶಕ ತಿಮ್ಮಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೃಷ್ಣಮೂರ್ತಿ, ಸರ್ಕಾರಿ ಮಹಿಳಾ ಕಾಲೇಜಿನ ಪ್ರಾಂಶುಪಾಲ ಗಂಗಾಧರ್‌ರಾವ್ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.