ADVERTISEMENT

ರಾಜಕೀಯ ಮರೆತು ಅಭಿವೃದ್ಧಿಗೆ ಶ್ರಮಿಸಿ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2019, 9:51 IST
Last Updated 27 ಸೆಪ್ಟೆಂಬರ್ 2019, 9:51 IST
ಶಾಸಕ ಕೆ.ಶ್ರೀನಿವಾಸಗೌಡ ಕೋಲಾರ ತಾಲ್ಲೂಕಿನ ಮುದುವತ್ತಿ ಗ್ರಾಮದಲ್ಲಿ ಗುರುವಾರ ಗ್ರಾ.ಪಂ ಕಚೇರಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ಶಾಸಕ ಕೆ.ಶ್ರೀನಿವಾಸಗೌಡ ಕೋಲಾರ ತಾಲ್ಲೂಕಿನ ಮುದುವತ್ತಿ ಗ್ರಾಮದಲ್ಲಿ ಗುರುವಾರ ಗ್ರಾ.ಪಂ ಕಚೇರಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.   

ಕೋಲಾರ: ‘ಗ್ರಾಮ ಪಂಚಾಯಿತಿ ಸದಸ್ಯರು ರಾಜಕೀಯ ಮರೆತು ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕು’ ಎಂದು ಶಾಸಕ ಕೆ.ಶ್ರೀನಿವಾಸಗೌಡ ಕಿವಿಮಾತು ಹೇಳಿದರು.

ತಾಲ್ಲೂಕಿನ ಮುದುವತ್ತಿ ಗ್ರಾಮದಲ್ಲಿ ಗುರುವಾರ ಗ್ರಾ.ಪಂ ಕಚೇರಿ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ‘ಸರ್ಕಾರ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದರೆ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ’ ಎಂದು ತಿಳಿಸಿದರು.

‘ಹಳ್ಳಿಗಳಲ್ಲಿ ಏನೇ ಸಮಸ್ಯೆ ಎದುರಾದರೂ ಜನ ಪಂಚಾಯಿತಿಗೆ ಬರುತ್ತಾರೆ. ಸಮರ್ಪಕವಾಗಿ ತೆರಿಗೆ ವಸೂಲಿ ಮಾಡುವುದರ ಜತೆಗೆ ಗ್ರಾಮಗಳ ಅಭಿವೃದ್ಧಿಗೆ ಒತ್ತು ಕೊಡಿ. ರಾಜಕೀಯ ಚುನಾವಣೆ ಸಂದರ್ಭಕ್ಕಷ್ಟೇ ಸೀಮಿತವಾಗಲಿ’ ಎಂದು ಸಲಹೆ ನೀಡಿದರು.

ADVERTISEMENT

‘ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ನಡುವೆ ಸಮನ್ವಯ ಇದ್ದರೆ ಮಾತ್ರ ಜನರ ಸಮಸ್ಯೆ ಬಗೆಹರಿಸಲು ಸಾಧ್ಯ. ಗ್ರಾಮಗಳು ಅಭಿವೃದ್ಧಿಯಾಗಲು ಎಲ್ಲರೂ ಮುಕ್ತ ಮನಸ್ಸಿನಿಂದ ಒಗ್ಗೂಡಿ ಕೆಲಸ ಮಾಡಬೇಕು. ಆಗ ಮಾತ್ರ ಗ್ರಾಮಗಳು ಸುಧಾರಣೆಯಾಗುತ್ತವೆ. ಸರ್ಕಾರದ ಅನುದಾನ ಮತ್ತು ಸೌಲಭ್ಯಗಳ ಸದ್ಬಳಕೆಯಾಗಬೇಕು’ ಎಂದು ಸೂಚಿಸಿದರು.

‘ಸರ್ಕಾರದ ವಿವಿಧ ಯೋಜನೆಗಳಿಗೆ ಫಲಾನುಭವಿ ಆಯ್ಕೆ ಮಾಡುವಾಗ ಪ್ರಾಮಾಣಿಕತೆಯಿಂದ ಬಡ ಕುಟುಂಬಗಳನ್ನು ಗುರುತಿಸಬೇಕು. ಮನೆ ಹಂಚಿಕೆಯಲ್ಲಿ ಅರ್ಹ ಬಡ ಕುಟುಂಬಗಳಿಗೆ ಆದ್ಯತೆ ನೀಡಿ ವಸತಿ ಸೌಲಭ್ಯ ಕಲ್ಪಿಸಬೇಕು’ ಎಂದು ಹೇಳಿದರು.

ಮುದವತ್ತಿ ಗ್ರಾ.ಪಂ ಅಧ್ಯಕ್ಷೆ ನೀಲಮ್ಮ, ಸದಸ್ಯರಾದ ಶಿಲ್ಪಾ, ಮಂಜುಳಾ, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಡಿ.ನಾಗರಾಜ್, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ವಿ.ರಾಮು, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಸಿ.ಎಸ್.ಕುಮಾರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.