ADVERTISEMENT

ವಾಲ್ಮೀಕಿ ಸಮುದಾಯಕ್ಕೆ ಮೋಸ: ಆರೋಪ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2020, 16:35 IST
Last Updated 19 ಅಕ್ಟೋಬರ್ 2020, 16:35 IST

ಕೋಲಾರ: ‘ವಾಲ್ಮೀಕಿ ಸಮುದಾಯಕ್ಕೆ ಶೇ 7.5ರಷ್ಟು ಮೀಸಲಾತಿ ನೀಡುವುದಾಗಿ ಭರವಸೆ ಕೊಟ್ಟಿದ್ದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸಮುದಾಯಕ್ಕೆ ಮೋಸ ಮಾಡಿದ್ದಾರೆ’ ಎಂದು ಶ್ರೀರಾಮುಲು ಬ್ರಿಗೇಡ್‌ ಸಂಸ್ಥಾಪಕ ಅಧ್ಯಕ್ಷ ನವೀನ್ ಮದಕರಿ ಆರೋಪಿಸಿದರು.

ಇಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಶ್ರೀರಾಮುಲು ಅವರನ್ನು ಏಕಾಏಕಿ ಆರೋಗ್ಯ ಸಚಿವ ಸ್ಥಾನದಿಂದ ಕೆಳಗಿಳಿಸಿ ಸಮಾಜ ಕಲ್ಯಾಣ ಖಾತೆ ನೀಡಿರುವುದು ಸರಿಯಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳು ರಾಜ್ಯದ ಜನತೆಗೆ ಹಾಗೂ ಸಮುದಾಯಕ್ಕೆ ಸ್ಪಷ್ಟನೆ ನೀಡಬೇಕು’ ಎಂದು ಒತ್ತಾಯಿಸಿದರು.

‘ರಾಜ್ಯ ಸರ್ಕಾರ ಚಿತ್ರದುರ್ಗದಲ್ಲಿ ₹ 100 ಕೋಟಿ ಅಂದಾಜು ವೆಚ್ಚದಲ್ಲಿ ಮದಕರಿ ನಾಯಕರ ಥೀಮ್ ಪಾರ್ಕ್ ಮಾಡುವುದಾಗಿ ಘೋಷಿಸಿತ್ತು. ಆದರೆ, ಈ ಘೋಷಣೆ ಈವರೆಗೂ ಅನುಷ್ಠಾನಕ್ಕೆ ಬಂದಿಲ್ಲ. ಸರ್ಕಾರ ಈ ಬಗ್ಗೆ ಗಮನಹರಿಸಿ ವಾಲ್ಮೀಕಿ ಸಮುದಾಯದ ಬೇಡಿಕೆ ಈಡೇರಿಸಬೇಕು’ ಎಂದು ಸಂಘಟನೆ ಕಾರ್ಯದರ್ಶಿ ಶಿವು ಮನವಿ ಮಾಡಿದರು.

ADVERTISEMENT

‘ಸಚಿವ ಸಂಪುಟ ವಿಸ್ತರಣೆ ವೇಳೆ ಶ್ರೀರಾಮುಲು ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು. ವಾಲ್ಮೀಕಿ ಸಮುದಾಯಕ್ಕೆ ಶೇ 7.5ರಷ್ಟು ಮೀಸಲಾತಿ ನೀಡಬೇಕು. ಈ ಬೇಡಿಕೆಗಳನ್ನು ಈಡೇರಿಸದಿದ್ದರೆ ಸಮುದಾಯದ ವತಿಯಿಂದ ಬಿಜೆಪಿ ವಿರುದ್ಧ ಹೋರಾಟ ಹಮ್ಮಿಕೊಳ್ಳಲಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಸಂಘಟನೆ ಸದಸ್ಯರಾದ ವೆಂಕಟೇಶ್‌ನಾಯಕ್‌, ಪ್ರಶಾಂತ್, ಶ್ರೀನಿವಾಸ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.