ADVERTISEMENT

ಗ್ರಾಮ ಸ್ವರಾಜ್ಯ ಪರಿಕಲ್ಪನೆ ಪ್ರಸ್ತುತ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2018, 15:22 IST
Last Updated 2 ಅಕ್ಟೋಬರ್ 2018, 15:22 IST
ಕೋಲಾರ ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ ಮಂಗಳವಾರ ಗಾಂಧಿ ಜಯಂತಿ ಆಚರಿಸಲಾಯಿತು.
ಕೋಲಾರ ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ ಮಂಗಳವಾರ ಗಾಂಧಿ ಜಯಂತಿ ಆಚರಿಸಲಾಯಿತು.   

ಕೋಲಾರ: ‘ಮಹಾತ್ಮ ಗಾಂಧೀಜಿಯ ಗ್ರಾಮ ಸ್ವರಾಜ್ಯದ ಪರಿಕಲ್ಪನೆ ಇಂದಿಗೂ ಪ್ರಸ್ತುತ. ಭಾರತದಂತಹ ಅಭಿವೃದ್ಧಿಶೀಲ ದೇಶಗಳ ಆರ್ಥಿಕ ಸ್ವಾವಲಂಬನೆಗೆ ಗ್ರಾಮ ಸ್ವರಾಜ್ಯ ಪರಿಕಲ್ಪನೆ ಅತ್ಯಗತ್ಯ’ ಎಂದು ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಮುನಿಯಪ್ಪ ಹೇಳಿದರು.

ಶಾಲೆಯಲ್ಲಿ ಮಂಗಳವಾರ ನಡೆದ ಗಾಂಧಿ ಜಯಂತಿಯಲ್ಲಿ ಮಾತನಾಡಿ, ‘ಗ್ರಾಮ ಸ್ವರಾಜ್ಯ ನಿರ್ಮಾಣಕ್ಕೆ ಪ್ರತಿಯೊಬ್ಬರು ಸಂಕಲ್ಪ ಮಾಡಬೇಕು. ಗಾಂಧೀಜಿ ಆದರ್ಶಗಳನ್ನು ವಿದ್ಯಾರ್ಥಿಗಳು ಪಾಲಿಸಬೇಕು’ ಎಂದು ಸಲಹೆ ನೀಡಿದರು.

‘ಗಾಂಧೀಜಿ ಮತ್ತು ಲಾಲ್‌ಬಹದ್ದೂರ್ ಶಾಸ್ತ್ರಿ ಅವರ ಆದರ್ಶ, ಪ್ರಾಮಾಣಿಕತೆ, ದೇಶಪ್ರೇಮ ರೂಢಿಸಿಕೊಂಡರೆ ಸತ್ಪ್ರಜೆಗಳಾಗಬಹುದು. ಭಾರತದ ಶೇ 72ರಷ್ಟು ಭಾಗವು ಗ್ರಾಮೀಣ ಪ್ರದೇಶದಿಂದ ಕೂಡಿದೆ. ಗ್ರಾಮಗಳ ಸರ್ವತ್ತೋಮುಖ ಅಭಿವೃದ್ಧಿಯಾದರೆ ಜನರ ಬದುಕು ಹಸನಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.

ADVERTISEMENT

ಸ್ವಾವಲಂಬಿ ಜೀವನ: ‘ದೇಶದ ಪ್ರತಿಯೊಬ್ಬರು ಸ್ವಾವಲಂಬಿ ಜೀವನ ನಡೆಸಬೇಕು ಎಂಬುದು ಗಾಂಧೀಜಿಯ ಆಶಯವಾಗಿತ್ತು. ಜನ ಆರ್ಥಿಕವಾಗಿ ಸಬಲರಾದರೆ ಮಾತ್ರ ದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತದೆ. ಗಾಂಧೀಜಿಯು ಗ್ರಾಮಗಳನ್ನು ಅಭಿವೃದ್ಧಿಪಡಿಸಬೇಕೆಂಬ ಉದ್ದೇಶದಿಂದಲೇ ಗ್ರಾಮ ಸ್ವರಾಜ್ಯದ ಪರಿಕಲ್ಪನೆಯೊಂದಿಗೆ ಗ್ರಾಮಗಳ ಉದ್ಧಾರಕ್ಕೆ ಶ್ರಮಿಸಿದರು’ ಎಂದು ಶಾಲೆಯ ಮುಖ್ಯ ಶಿಕ್ಷಕ ಸಿ.ಎನ್.ಪ್ರದೀಪ್‌ಕುಮಾರ್ ತಿಳಿಸಿದರು.

‘ಆರೋಗ್ಯಕರ ಜೀವನಕ್ಕೆ ಸ್ವಚ್ಛತೆ ಅತ್ಯಗತ್ಯ. ಹೀಗಾಗಿ ವಿದ್ಯಾರ್ಥಿಗಳು ಸ್ವಚ್ಛ ಸಮಾಜ ನಿರ್ಮಾಣ ಮಾಡುವತ್ತ ಸಾಗಬೇಕು. ಗಾಂಧೀಜಿ ಆಶಯದಂತೆ ತಿಂಗಳಿಗೊಂದು ದಿನ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.

ವಿದ್ಯಾರ್ಥಿಗಳು ಶ್ರಮದಾನ ನಡೆಸಿ, ಭಜನೆ ಮತ್ತು ಸರ್ವಧರ್ಮ ಪ್ರಾರ್ಥನೆಯೊಂದಿಗೆ ಗಾಂಧೀಜಿಯ ಆದರ್ಶಗಳ ಸ್ಮರಣೆ ಮಾಡಿದರು. ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ನಾಗರಾಜ್, ಶಿಕ್ಷಕರಾದ ಲೀಲಾ, ಎಸ್‌.ಸತೀಶ್, ಶ್ವೇತಾ, ಸುಗುಣಾ, ಲೀಲಾ, ನಾರಾಯಣಸ್ವಾಮಿ, ವೆಂಕಟರೆಡ್ಡಿ, ಶ್ರೀನಿವಾಸಲು, ಎಸ್.ಅನಂತಪದ್ಮನಾಭ್, ಎಸ್‌ಡಿಎಂಸಿ ಸದಸ್ಯರಾದ ಮುನಿಯಪ್ಪ, ರಾಘವೇಂದ್ರ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.