ADVERTISEMENT

ತಿಗಳ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಿ: ವೆಂಕಟೇಶ್

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2020, 16:33 IST
Last Updated 15 ಅಕ್ಟೋಬರ್ 2020, 16:33 IST

ಕೋಲಾರ: ‘ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನ ಸೇರಿದಂತೆ ಮುಂಬರುವ ಸ್ಥಳೀಯ ಚುನಾವಣೆಗಳಲ್ಲಿ ತಿಗಳ ಸಮುದಾಯಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು’ ಎಂದು ತಿಗಳ ಜನಾಂಗದ ಸಮನ್ವಯ ಸಮಿತಿ ಉಪಾಧ್ಯಕ್ಷ ವೆಂಕಟೇಶ್ ಒತ್ತಾಯಿಸಿದರು.

ಇಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ರಾಜ್ಯದಲ್ಲಿ ತಿಗಳ ಸಮುದಾಯ ಜನಸಂಖ್ಯೆ ಸುಮಾರು 40 ಲಕ್ಷವಿದೆ. ಜಿಲ್ಲೆಯಲ್ಲಿ ಸಮುದಾಯದ 1.23 ಲಕ್ಷ ಮಂದಿ ಮತದಾರರಿದ್ದಾರೆ. ಸಮುದಾಯದ ಬಹುತೇಕರು ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸುತ್ತಾ ಬಂದಿದ್ದರೂ ರಾಜಕೀಯ ಸ್ಥಾನಮಾನ ಸಿಕ್ಕಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

‘ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷರ ಆಯ್ಕೆ ವೇಳೆ ಸಮುದಾಯಕ್ಕೆ ಆದ್ಯತೆ ನೀಡಬೇಕು. ಜಿ.ಪಂ ಮತ್ತು ತಾ.ಪಂ ಚುನಾವಣೆಯಲ್ಲಿ ತಿಗಳ ಜನಾಂಗಕ್ಕೆ ಹೆಚ್ಚಿನ ಸ್ಥಾನ ನೀಡಬೇಕು. ವಿಧಾನಸಭೆ ಮತ್ತು ವಿಧಾನ ಪರಿಷತ್ ಚುನಾವಣೆಗಳಲ್ಲೂ ಅವಕಾಶ ನೀಡಬೇಕು. ಈ ಸಂಬಂಧ ಸಮುದಾಯದ ಮುಖಂಡರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ ಎಂದು ವಿವರಿಸಿದರು.

ADVERTISEMENT

ತಿಗಳ ಜನಾಂಗದ ಸಮನ್ವಯ ಸಮಿತಿ ರಾಜ್ಯ ಘಟಕದ ನಿರ್ದೇಶಕ ಗೋಪಿ, ಜಿಲ್ಲಾ ಘಟಕದ ಸದಸ್ಯರಾದ ಮುನಿಯಪ್ಪ, ನಾಗೇಶ್‌ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.