ADVERTISEMENT

ಗೊಲ್ಲ ನಿಗಮ| ಅಧ್ಯಕ್ಷರು, ಸದಸ್ಯರನ್ನು ನೇಮಿಸಿ: ಗೋಕುಲ್ ನಾರಾಯಣಸ್ವಾಮಿ ಒತ್ತಾಯ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2020, 15:52 IST
Last Updated 29 ಸೆಪ್ಟೆಂಬರ್ 2020, 15:52 IST

ಕೋಲಾರ: ‘ರಾಜ್ಯ ಸರ್ಕಾರ ಶೀಘ್ರವೇ ಕಾನೂನಾತ್ಮಕವಾಗಿ ಗೊಲ್ಲ ಸಮುದಾಯದ ನಿಗಮ ರೂಪಿಸಿ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಿಸಬೇಕು’ ಎಂದು ಜಿಲ್ಲಾ ಯಾದವ ಸಂಘದ ಅಧ್ಯಕ್ಷ ಗೋಕುಲ್ ನಾರಾಯಣಸ್ವಾಮಿ ಒತ್ತಾಯಿಸಿದರು.

ಇಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಗೊಲ್ಲ ಸಮುದಾಯದ ಅಭಿವೃದ್ಧಿಗೆ ಬಜೆಟ್‌ನಲ್ಲಿ ₹ 100 ಕೋಟಿ ಅನುದಾನ ಮೀಸಲಿಡಬೇಕು. ಹಿಂದಿನ ವಿಧಾನಸಭೆ ಚುನಾವಣೆ ವೇಳೆ ಯಡಿಯೂರಪ್ಪ ಅವರು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ. ಸಮುದಾಯದ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಿ ಸಹಕರಿಸಬೇಕು’ ಎಂದು ಮನವಿ ಮಾಡಿದರು.

‘ರಾಜ್ಯದಲ್ಲಿ ಗೊಲ್ಲ ಸಮುದಾಯದ ಜನಸಂಖ್ಯೆ ಸುಮಾರು 40 ಲಕ್ಷವಿದೆ. ಸಮುದಾಯವು ರಾಜಕೀಯವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದಿತ್ತು. ಇಂತಹ ಪರಿಸ್ಥಿತಿಯಲ್ಲಿ ಯಡಿಯೂರಪ್ಪ ಮತ್ತು ಮಂತ್ರಿಮಂಡಲದ ಸದಸ್ಯರು ಸಮುದಾಯಕ್ಕೆ ಸಾಮಾಜಿಕ ನ್ಯಾಯ ಕಲ್ಪಿಸುವ ನಿಟ್ಟಿನಲ್ಲಿ ಗೊಲ್ಲ ಸಮುದಾಯದ ನಿಗಮಕ್ಕೆ ಒಪ್ಪಿಗೆ ಸೂಚಿಸಿದ್ದಾರೆ’ ಎಂದರು.

ADVERTISEMENT

‘ರಾಜ್ಯದಲ್ಲಿ ಗೊಲ್ಲ ಸಮುದಾಯದಿಂದ ಏಕೈಕ ಶಾಸಕಿಯಾಗಿ ಆಯ್ಕೆಯಾಗಿರುವ ಹಿರಿಯೂರು ಕ್ಷೇತ್ರದ ಪೂರ್ಣಿಮಾ ಅವರಿಗೆ ಸಚಿವ ಸ್ಥಾನ ನೀಡಬೇಕು. ಜತೆಗೆ ರಾಜ್ಯ ಯಾದವ ಸಂಘದ ಅಧ್ಯಕ್ಷ ಶ್ರೀನಿವಾಸ್‌ ಅವರಿಗೆ ಆಗ್ನೇಯ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆ ಅಥವಾ ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಟಿಕೆಟ್‌ ನೀಡಬೇಕು’ ಎಂದು ಕೋರಿದರು.

ಜಿಲ್ಲಾ ಯಾದವ ಸಂಘದ ಉಪಾಧ್ಯಕ್ಷ ಆರ್.ಗೋಪಾಲ್, ಖಜಾಂಚಿ ಕೆ.ಎಂ.ಕೆ.ಗೋಪಾಲ್, ರಾಜ್ಯ ಯಾದವ ಸಂಘದ ನಿರ್ದೇಶಕ ಶ್ರೀನಿವಾಸ್, ಕೋಲಾರ ತಾಲ್ಲೂಕು ಯಾದವ ಸಂಘದ ಕಾರ್ಯಾಧ್ಯಕ್ಷ ವೆಂಕಟೇಶ್, ಖಜಾಂಚಿ ಮಂಜುನಾಥ್, ಮಾಲೂರು ತಾಲ್ಲೂಕು ಯಾದವ ಸಂಘದ ಅಧ್ಯಕ್ಷ ಎ.ವೈ.ಗೋವಿಂದಪ್ಪ. ಖಂಜಾಚಿ ರವಿಕುಮಾರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.