ADVERTISEMENT

ಸರ್ಕಾರಿ ಕೆಲಸ ದೇವರ ಕೆಲಸ

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2019, 15:47 IST
Last Updated 24 ಆಗಸ್ಟ್ 2019, 15:47 IST
ಜಿಲ್ಲಾ ಸರ್ಕಾರಿ ನೌಕರರ ಸಂಘವು ಕೋಲಾರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಜಿ.ಪಂನ ನಿರ್ಗಮಿತ ಸಿಇಒ ಜಿ.ಜಗದೀಶ್‌ ಅವರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಸರ್ಕಾರಿ ನೌಕರರ ಸಂಘವು ಕೋಲಾರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಜಿ.ಪಂನ ನಿರ್ಗಮಿತ ಸಿಇಒ ಜಿ.ಜಗದೀಶ್‌ ಅವರನ್ನು ಸನ್ಮಾನಿಸಲಾಯಿತು.   

ಕೋಲಾರ: ‘ಸರ್ಕಾರಿ ಕೆಲಸ ದೇವರ ಕೆಲಸ. ಈ ಮಾತನ್ನು ಸಾರ್ಥಕ ಪಡಿಸಬೇಕಾದರೆ ಸರ್ಕಾರಿ ನೌಕರರು ಸೇವಾ ಮನೋಭಾವದಿಂದ ದುಡಿಯಬೇಕು’ ಎಂದು ಜಿಲ್ಲಾ ಪಂಚಾಯಿತಿ ನಿರ್ಗಮಿತ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ಜಗದೀಶ್‌ ಕಿವಿಮಾತು ಹೇಳಿದರು.

ಜಿಲ್ಲಾ ಸರ್ಕಾರಿ ನೌಕರರ ಸಂಘವು ಇಲ್ಲಿ ಶನಿವಾರ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ‘ಕೋಲಾರ ಜಿಲ್ಲೆಯ ಜನ ಚಿನ್ನದಂತಹವರು’ ಎಂದು ಬಣ್ಣಿಸಿದರು.

‘ಜನಸಾಮಾನ್ಯರು ತಮ್ಮ ಸಮಸ್ಯೆಗೆ ಪರಿಹಾರ ಸಿಗಬಹುದೆಂಬ ನಿರೀಕ್ಷೆಯಲ್ಲಿ ಸರ್ಕಾರಿ ಕಚೇರಿಗೆ ಬರುತ್ತಾರೆ. ಆಗ ಅಧಿಕಾರಿಗಳು ಅವರನ್ನು ಪ್ರೀತಿಯಿಂದ ಕಂಡು ಗೌರವಯುತವಾಗಿ ನಡೆದುಕೊಳ್ಳಬೇಕು. ಜನ ಸಾಮಾನ್ಯರೊಂದಿಗೆ ಸದ್ಭಾವನೆಯಿಂದ ಮಾತನಾಡಬೇಕು’ ಎಂದು ಸಲಹೆ ನೀಡಿದರು.

ADVERTISEMENT

‘ಸದಾ ಕಚೇರಿಯ ಕಡತಗಳೊಂದಿಗೆ ವ್ಯವಹರಿಸುವ ಸರ್ಕಾರಿ ನೌಕರರು ಬಿಡುವಿನ ಅವಧಿಯಲ್ಲಿ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದು ಒಳ್ಳೆಯದು. ಇದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಸಧೃಡವಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.

‘ಜಿಲ್ಲೆಯ ಜನಮಾನಸದಲ್ಲಿ ಶಾಶ್ವತವಾಗಿ ಉಳಿಯುವಂತಹ ಕೆಲಸ ಮಾಡಿರುವ ಜಗದೀಶ್ ಅವರು ಪ್ರಾಮಾಣಿಕ ವ್ಯಕ್ತಿತ್ವದಿಂದ ಹೆಸರುವಾಸಿಯಾಗಿದ್ದಾರೆ’ ಎಂದು ಜಿಲ್ಲಾ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಕೆ.ಬಿ.ಅಶೋಕ್ ಸ್ಮರಿಸಿದರು.

ಜಿಲ್ಲಾ ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಆರ್.ಅನಿಲ್‌ಕುಮಾರ್. ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಜಿ.ಶ್ರೀನಿವಾಸ್, ಪರಿಶಿಷ್ಟ ಜಾತಿ ವರ್ಗಗಳ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಕಾರ್ಯದರ್ಶಿ ಕೆ.ಟಿ.ನಾಗರಾಜ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.