ADVERTISEMENT

ಗ್ರಾ.ಪಂ ಕಚೇರಿಗಳು ಭ್ರಷ್ಟಾಚಾರದ ಕೂಪ

ಪ್ರಗತಿ ಪರಿಶೀಲನಾ ಸಭೆಯಲ್ಲಿ ತಾ.ಪಂ ಅಧ್ಯಕ್ಷ ಆಂಜಿನಪ್ಪ ಕಿಡಿ

​ಪ್ರಜಾವಾಣಿ ವಾರ್ತೆ
Published 14 ಜುಲೈ 2020, 13:14 IST
Last Updated 14 ಜುಲೈ 2020, 13:14 IST
ತಾ.ಪಂ ಅಧ್ಯಕ್ಷ ಎಂ.ಆಂಜಿನಪ್ಪ ಕೋಲಾರದಲ್ಲಿ ಮಂಗಳವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ತಾ.ಪಂ ಅಧ್ಯಕ್ಷ ಎಂ.ಆಂಜಿನಪ್ಪ ಕೋಲಾರದಲ್ಲಿ ಮಂಗಳವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.   

ಕೋಲಾರ: ‘ತಾಲ್ಲೂಕಿನಲ್ಲಿ ಗ್ರಾಮ ಪಂಚಾಯಿತಿ ಕಚೇರಿಗಳು ಭ್ರಷ್ಟಾಚಾರದ ಕೂಪವಾಗಿವೆ. ಗ್ರಾ.ಪಂ ಅಧಿಕಾರಿಗಳು ಜನರನ್ನು ಸರ್ಕಾರಿ ಸೌಕರ್ಯಗಳಿಂದ ವಂಚಿಸುತ್ತಿದ್ದಾರೆ’ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಂ.ಆಂಜಿನಪ್ಪ ಕಿಡಿಕಾರಿದರು.

ಇಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ‘ಗ್ರಾಮಗಳ ಅಭಿವೃದ್ಧಿ ದೃಷ್ಟಿಯಿಂದ ನೋಡಲ್‌ ಅಧಿಕಾರಿಗಳನ್ನು ನೇಮಿಸಲಾಗಿದೆ. ಆದರೆ, ಈ ಅಧಿಕಾರಿಗಳಿಗೆ ಆಡಳಿತದ ಮೇಲೆ ಹಿಡಿತವಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ಪರಿಸ್ಥಿತಿಯ ಲಾಭ ಪಡೆಯುತ್ತಿದ್ದಾರೆ. ತಮ್ಮ ಅನುಕೂಲಕ್ಕೆ ತಕ್ಕಂತೆ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ನೋಡಲ್‌ ಅಧಿಕಾರಿಗಳು ಇವರ ಕೈಗೊಂಬೆಗಳಂತೆ ಕೆಲಸ ಮಾಡುತ್ತಾರೆ. ಗ್ರಾ.ಪಂಗಳಲ್ಲಿನ ಅವ್ಯವಸ್ಥೆ ಹೇಳತೀರದು’ ಎಂದು ಕೆಂಡಾಮಂಡಲರಾದರು.

ADVERTISEMENT

‘ಸರ್ಕಾರದಿಂದ 14ನೇ ಹಣಕಾಸು ಯೋಜನೆಯಲ್ಲಿ ಅನುದಾನ ಬಂದಿದ್ದರೂ ಸಮರ್ಪಕವಾಗಿ ಬಳಕೆಯಾಗಿಲ್ಲ. ಈ ಬಗ್ಗೆ ಸಾಕಷ್ಟು ದೂರ ಬಂದಿವೆ. ನರೇಗಾ ಯೋಜನೆಯ ಕಾಮಗಾರಿಗಳ ಸಾಮಗ್ರಿ ಬಿಲ್‌ನ ಹೆಸರಿನಲ್ಲಿ ಗುತ್ತಿಗೆದಾರರಿಗೆ ಹಣ ಸೇರಿದೆ. ಸರ್ಕಾರದ ಮಾರ್ಗಸೂಚಿ ಪ್ರಕಾರ ಹಣ ಖರ್ಚು ಮಾಡಿಲ್ಲ. 2019 ಮತ್ತು 2020ನೇ ಸಾಲಿನ ಒಟ್ಟು ಖರ್ಚು ವೆಚ್ಚದ ಮಾಹಿತಿ ನೀಡಬೇಕು’ ಎಂದು ತಾಕೀತು ಮಾಡಿದರು.

ಮೀಸಲಾತಿ ಪಾಲಿಸಿಲ್ಲ: ‘ಪ್ರತಿ ಇಲಾಖೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ 35, ಅಂಗವಿಕಲರಿಗೆ ಶೇ 5ರಷ್ಟು ಮೀಸಲಾತಿ ಇದೆ. ಆದರೆ, ಯಾವುದೇ ಗ್ರಾ.ಪಂ ಮೀಸಲಾತಿ ನಿಯಮ ಪಾಲಿಸಿಲ್ಲ. ಸಾಮಾಜಿಕ ಅರಣ್ಯ ವಿಭಾಗದಿಂದ ಪ್ರತಿ ಗ್ರಾ.ಪಂಗೆ ₹ 30 ಲಕ್ಷ ಬಂದಿದ್ದರೂ ಸಮರ್ಪಕವಾಗಿ ಕೆಲಸ ಮಾಡಿಲ್ಲ. ನೋಡಲ್ ಅಧಿಕಾರಿಗಳು ಪ್ರತಿ ವರ್ಷದ ಹಣಕಾಸು ಲೆಕ್ಕಾಚಾರದ ಬಗ್ಗೆ ಶೀಘ್ರವೇ ಪರಿಶೀಲನೆ ನಡೆಸಬೇಕು’ ಎಂದು ಸೂಚಿಸಿದರು.

‘ತಾಲ್ಲೂಕಿನಲ್ಲಿ ಮಳೆಗಾಲ ಆರಂಭವಾಗಿದ್ದು, ಬಿತ್ತನೆ ಚಟುವಟಿಕೆ ಚುರುಕುಗೊಂಡಿದೆ. ರೈತರಿಗೆ ಬಿತ್ತನೆ ಬೀಜ ಮತ್ತು ರಸಗೊಬ್ಬರದ ಕೊರತೆ ಆಗಬಾರದು. ಸರ್ಕಾರ ನಿಗದಿಪಡಿಸಿದ ಬೆಲೆಗೆ ಗೊಬ್ಬರ ಮತ್ತು ಬಿತ್ತನೆ ಬೀಜ ಮಾರಾಟ ಮಾಡಬೇಕು. ನಿಯಮಬಾಹಿರವಾಗಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಅಂಗಡಿ ಮಾಲೀಕರ ವಿರುದ್ಧ ಶಿಸ್ತುಕ್ರಮ ಜರುಗಿಸಿ’ ಎಂದು ತಾ.ಪಂ ಕಾರ್ಯ ನಿರ್ವಹಣಾಧಿಕಾರಿ ಬಾಬು ಆದೇಶಿಸಿದರು.

ಕಡಿವಾಣ ಹಾಕಿ: ‘ಪ್ರತಿ ಇಲಾಖೆ ಅಧಿಕಾರಿಗಳು ಸರ್ಕಾರದ ಸೌಕರ್ಯ ಪಡೆದ ಫಲಾನುಭವಿಗಳ ಮಾಹಿತಿಯನ್ನು ಮುಂದಿನ ಸಭೆಯಲ್ಲಿ ಕಡ್ಡಾಯವಾಗಿ ನೀಡಬೇಕು. ಇಲಾಖೆಯಿಂದ ನೀಡುವ ಪ್ರೋತ್ಸಾಹಧನ ನೇರವಾಗಿ ರೈತರಿಗೆ ತಲುಪಬೇಕು. ದಲ್ಲಾಳಿಗಳು ಹಾವಳಿಗೆ ಕಡಿವಾಣ ಹಾಕಿ’ ಎಂದು ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ್‌ ಗುಡುಗಿದರು.

ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.