ADVERTISEMENT

ಮನುಷ್ಯನ ದುರಾಸೆಗೆ ಪರಿಸರ ನಾಶ: ವೃಕ್ಷೋತ್ಸವದಲ್ಲಿ ಉಸ್ತುವಾರಿ ಸಚಿವ ನಾಗೇಶ್‌

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2019, 13:07 IST
Last Updated 20 ಸೆಪ್ಟೆಂಬರ್ 2019, 13:07 IST
ವೃಕ್ಷೋತ್ಸವದ ಅಂಗವಾಗಿ ಜಿಲ್ಲಾಡಳಿತ ಕೋಲಾರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬೀಜ ಬಿತ್ತನೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ನಾಗೇಶ್‌ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆ ಫಲಾನುಭವಿಗಳಿಗೆ ಸೌರ ವಿದ್ಯುತ್‌ ದೀಪ ವಿತರಿಸಿದರು.
ವೃಕ್ಷೋತ್ಸವದ ಅಂಗವಾಗಿ ಜಿಲ್ಲಾಡಳಿತ ಕೋಲಾರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬೀಜ ಬಿತ್ತನೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ನಾಗೇಶ್‌ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆ ಫಲಾನುಭವಿಗಳಿಗೆ ಸೌರ ವಿದ್ಯುತ್‌ ದೀಪ ವಿತರಿಸಿದರು.   

ಕೋಲಾರ: ‘ಪರಿಸರ ನಾಶದಿಂದ ಮನುಷ್ಯನ ಮೇಲೆ ಆಗುತ್ತಿರುವ ದುಷ್ಪರಿಣಾಮ ತಪ್ಪಿಸಲು ಹಸರೀಕರಣಕ್ಕೆ ಹೆಚ್ಚು ಒತ್ತು ನೀಡಬೇಕು' ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್ ಸಲಹೆ ನೀಡಿದರು.

ವೃಕ್ಷೋತ್ಸವದ ಅಂಗವಾಗಿ ಜಿಲ್ಲಾಡಳಿತವು ಇಲ್ಲಿನ ಶತಶೃಂಗ ಬೆಟ್ಟದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬೀಜ ಬಿತ್ತನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಅರಣ್ಯ ನಾಶದಿಂದ ಇಂಗಾಲದ ಡೈಆಕ್ಸೈಡ್ ಪ್ರಮಾಣ ಹೆಚ್ಚಿ ಆರೋಗ್ಯ ಸಮಸ್ಯೆ ಸೃಷ್ಟಿಯಾಗುತ್ತಿದೆ. ವಾಹನಗಳ ಹೊಗೆಯಿಂದಲೂ ಸಮಸ್ಯೆ ಎದುರಾಗುತ್ತಿದೆ’ ಎಂದರು.

‘ಜಿಲ್ಲೆಯಲ್ಲಿ ಉತ್ತಮ ಮಳೆಯಾಗದ ಕಾರಣ ಬೆಳೆಗಳು ಒಣಗುತ್ತಿವೆ. ಅನಾವೃಷ್ಟಿಗೆ ಕಾರಣ ಏನೆಂದು ಅರಿತು ಸಮಸ್ಯೆ ನಿವಾರಣೆಗೆ ಮುಂದಾಗಬೇಕು. ಉತ್ತಮ ಮಳೆ, ಬೆಳೆಗೆ ಅರಣ್ಯ ಸಂಪತ್ತು ಹೆಚ್ಚಬೇಕು. ಅರಣ್ಯ ಇಲಾಖೆ ಅಧಿಕಾರಿಗಳು ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಮಕ್ಕಳಲ್ಲಿ ಪರಿಸರ ಸಂರಕ್ಷಣೆಗೆ ಜಾಗೃತಿ ಮೂಡಿಸಬೇಕು’ ಎಂದು ಸೂಚಿಸಿದರು.

ADVERTISEMENT

‘ಅರಿವಿನ ಕೊರತೆಯಿಂದ ಮನುಷ್ಯ ಪರಿಸರದ ಮೇಲೆ ದಾಳಿ ನಡೆಸುತ್ತಿದ್ದು, ಇದರಿಂದ ಪ್ರಾಕೃತಿಕ ಅಸಮತೋಲನವಾಗುತ್ತಿದೆ. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ. ಆದರೆ, ಇತ್ತೀಚಿನ ವರ್ಷಗಳಲ್ಲಿ ಮನುಷ್ಯನ ದುರಾಸೆಯ ಫಲವಾಗಿ ಪರಿಸರ ನಾಶವಾಗಿದೆ’ ಎಂದು ಕಳವಳ ವ್ಯಕ್ತಪಡಿಸಿದರು.

‘ಹಿಂದಿನ ಕಾಲದಲ್ಲಿ ಖಾಲಿ ಜಾಗದಲ್ಲಿ ಗಿಡ ಮರ ಕಾಣುತ್ತಿದ್ದೆವು. ಅರಣ್ಯ ಸಂಪತ್ತು ಸಮೃದ್ಧವಾಗಿತ್ತು. ಹೀಗಾಗಿ ಸಕಾಲಕ್ಕೆ ಮಳೆಯಾಗಿ ಕೆರೆ ಕುಂಟೆಗಳಲ್ಲಿ ನೀರು ಸಂಗ್ರಹವಾಗುತ್ತಿತ್ತು. ಆದರೆ, ಈಗ ಗಿಡ ಮರ ನಾಶದಿಂದ ವಾತಾವರಣ ಕಲುಷಿತಗೊಂಡು ಆರೋಗ್ಯ ಸಮಸ್ಯೆ ಎದುರಾಗಿದೆ. ಜತೆಗೆ ಪ್ರಾಕೃತಿಕ ವಿಕೋಪ ಸಂಭವಿಸುತ್ತಿವೆ’ ಎಂದು ವಿಷಾದಿಸಿದರು.

ಜಲಾಮೃತ ಯೋಜನೆ: ‘ಜಿಲ್ಲೆಯ ನೀರಿನ ಸಮಸ್ಯೆ ನಿವಾರಣೆಗೆ ಜಲಾಮೃತ ಯೋಜನೆ ರೂಪಿಸಿದ್ದು, ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಪ್ರತಿಯೊಬ್ಬರು ಕೈಜೋಡಿಸಬೇಕು’ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ಮನವಿ ಮಾಡಿದರು.

‘ನೀರಿನ ಸಮಸ್ಯೆ ಎದುರಿಸಲು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ಬೃಹತ್ ಕಟ್ಟಡಗಳಲ್ಲಿ ಮಳೆ ನೀರು ಕೊಯ್ಲು ಪದ್ಧತಿ ಅಳವಡಿಸುವಂತೆ ಕಟ್ಟಡ ಮಾಲೀಕರಿಗೆ ಸೂಚಿಸಲಾಗಿದೆ. ಮಳೆಗಾಲದಲ್ಲಿ ವ್ಯರ್ಥವಾಗಿ ಹರಿದು ಹೋಗವು ಮಳೆ ನೀರನ್ನು ಸಂಗ್ರಹಿಸುವ ಮನೋಭಾವ ಜನರಲ್ಲಿ ಮೂಡಬೇಕು’ ಎಂದು ಆಶಿಸಿದರು.

‘ಬೆಟ್ಟ-ಗುಡ್ಡದಲ್ಲಿ ಸಸಿ ನೆಟ್ಟು ಬೆಳೆಸುವ ಮೂಲಕ ಅರಣ್ಯೀಕರಣಕ್ಕೆ ಸಂಕಲ್ಪ ಮಾಡಬೇಕು. ಮನೆ ಹಾಗೂ ಶಾಲೆಯ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಂಡು ಇತರರಿಗೆ ಮಾದರಿಯಾಗಬೇಕು. ಜಿಲ್ಲೆಯ ಬೆಟ್ಟ- ಗುಡ್ಡ ಪ್ರದೇಶದಲ್ಲಿ ಬೀಜಾಮೃತ ಲೇಪಿತ ಬೀಜ ಬಿತ್ತುವ ಅಭಿಯಾನ ಆರಂಭಿಸಲಾಗಿದ್ದು, ಶಾಲಾ -ಕಾಲೇಜು ವಿದ್ಯಾರ್ಥಿಗಳ ಮೂಲಕ ಬೀಜ ಬಿತ್ತನೆ ಮಾಡಿಸಲಾಗುತ್ತಿದೆ’ ಎಂದರು.

ಪ್ಲಾಸ್ಟಿಕ್‌ ನಿರ್ಬಂಧ: ‘ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿರ್ಬಂಧಿಸಲಾಗಿದೆ. ಪ್ಲಾಸ್ಟಿಕ್ ಕೈ ಚೀಲ, ಬ್ಯಾನರ್ ಮತ್ತು ಫ್ಲೆಕ್ಸ್‌ ಬಳಸುವಂತಿಲ್ಲ. ಆದರೂ ಜನ ಮಿತಿ ಮೀರಿ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುತ್ತಿದ್ದಾರೆ. ಇದರಿಂದ ಪರಿಸರದ ಮೇಲೆ ಪ್ರತಿಕೂಲ ಪರಿಣಾಮವಾಗುತ್ತಿದೆ. ಬಟ್ಟೆ ಚೀಲ ಬಳಸುವ ಮೂಲಕ ಪ್ಲಾಸ್ಟಿಕ್ ನಿರ್ಮೂಲನೆಗೆ ಸಂಕಲ್ಪ ಮಾಡಬೇಕು’ ಎಂದು ಕಿವಿಮಾತು ಹೇಳಿದರು.

ಜಿಲ್ಲಾ ಪಂಚಾಯಿತಿ ಸದಸ್ಯರಾದ ಪ್ರಕಾಶ್‌ ರಾಮಚಂದ್ರ, ಅರವಿಂದ್, ಅಶ್ವಿನಿ, ಉಪ ವಿಭಾಗಾಧಿಕಾರಿ ಸೋಮಶೇಖರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಚಕ್ರಪಾಣಿ, ಜಿಲ್ಲಾ ವಲಯ ಅರಣ್ಯಾಧಿಕಾರಿ ದೇವರಾಜ್, ತಾಲ್ಲೂಕು ವಲಯ ಅರಣ್ಯಾಧಿಕಾರಿ ಬಿ.ಮಂಜುನಾಥ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.