
ಕೋಲಾರ: ರಾಜ್ಯದ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಲಾಭ ತಂದುಕೊಡುವ ಸಲುವಾಗಿ ಇದೇ 28ರಂದು ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ಆರಂಭಿಸಲಾಗುತ್ತಿದೆ. ಮೂರು ತಿಂಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಸೊಸೈಟಿ ವಿಸ್ತರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಬೆಂಗಳೂರಿನಲ್ಲಿ ನ.28 ರಂದು ನಡೆಯಲಿರುವ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ (ಐಸಿಡಿಎಸ್) ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘದ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಕೋಲಾರದ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಸ್ತ್ರೀಯರು ಹಾಗೂ ಮಕ್ಕಳ ಹಿತದೃಷ್ಟಿಯಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿ 50 ವರ್ಷಗಳ ಹಿಂದೆ ಐಸಿಡಿಎಸ್ ಯೋಜನೆ ಜಾರಿಗೆ ತಂದು ಅಂಗನವಾಡಿ ಆರಂಭಿಸಿದರು. ಯೋಜನೆಯ ಸುವರ್ಣ ಮಹೋತ್ಸವವನ್ನು ಸಂಭ್ರಮಿಸುವ ಜೊತೆಗೆ ಮುಂದಿನ 50 ವರ್ಷಕ್ಕೆ ಸ್ತ್ರೀ ಸಬಲೀಕರಣಕ್ಕೆ ಅಣಿಗೊಳಿಸುವುದಕ್ಕೆ ಹೆಜ್ಜೆ ಇಡುವ ಗಳಿಗೆ ಇದಾಗಿದೆ ಎಂದರು.
ಸಂಘದ ಬ್ಯಾಂಕ್‌ನಲ್ಲಿ ₹ 1 ಸಾವಿರ ಪಾವತಿಸಿ ಷೇರುದಾರರು ಆಗಬೇಕು. ಪ್ರತಿ ತಿಂಗಳು ₹ 200 ಠೇವಣಿ ಇಡಬೇಕು. ಆರು ತಿಂಗಳ ಬಳಿಕ ಸಂಘದ ಮೂಲಕ ₹ 3 ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಫಲಾನುಭವಿಗಳಿಗೆ ಸಾಲ ನೀಡಲಾಗುವುದು. ಜೀವವಿಮೆ ಕೂಡ ಇರಲಿದೆ. ಈಗ ಕೆಲವೆಡೆ ಮಹಿಳೆಯರಿಗೆ ಚಕ್ರಬಡ್ಡಿ ರೂಪದಲ್ಲಿ ತೊಂದರೆ ಕೊಡಲಾಗುತ್ತಿದೆ. ಈ ಬ್ಯಾಂಕ್ ಮೂಲಕ ಮಹಿಳೆಯರ ನೆರವಿಗೆ ನಿಲ್ಲಲಾಗುವುದು. ಯಾವುದೇ ಸರ್ಕಾರ ಬಂದರೂ ಈ ಬ್ಯಾಂಕ್ ಮುಂದುವರಿಸಿಕೊಂಡು ಹೋಗಬೇಕಾಗುತ್ತದೆ. ಇದು ನನ್ನ ಕನಸಿನ ಕೂಸು ಎಂದು ಹೇಳಿದರು.
ಬಡ ಮಕ್ಕಳಿಗೆ ತಳಹಂತದಲ್ಲಿ ಗುಣಮಟ್ಟದ ಶಿಕ್ಷಣ ಸಿಗುವ ದೃಷ್ಟಿಯಿಂದ ಅಂಗನವಾಡಿ ಕೇಂದ್ರದಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲಾಗುತ್ತಿದೆ. ಪೌಷ್ಟಿಕ ಆಹಾರದ ಜೊತೆಗೆ ಉತ್ತಮ ಶಿಕ್ಷಣ ಬಡಮಕ್ಕಳಿಗೆ ಸಿಗಬೇಕು ಎಂಬುದೇ ನಮ್ಮ ಉದ್ದೇಶ ಎಂದರು.
ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ, 'ಮಹಿಳೆಯರು ಹಾಗೂ ಮಕ್ಕಳಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕಿದೆ. ಜಿಲ್ಲೆಯಲ್ಲಿ ಈಗಾಗಲೇ ಅಂಗನವಾಡಿ ಕೇಂದ್ರಗಳಿಗೆ ಶೇ 100ರಷ್ಟು ಖಾತೆ ಮಾಡಿಕೊಟ್ಟಿದ್ದೇವೆ. ಇದು ರಾಜ್ಯದಲ್ಲಿಯೇ ಮೊದಲು. ಈ ಇಲಾಖೆಗೆ ಇನ್ನೂ ಹೆಚ್ಚಿನ ಒತ್ತು ನೀಡಬೇಕು’ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್‌ಕುಮಾರ್ , 'ಗ್ಯಾರಂಟಿ ಯೋಜನೆಗಳಲ್ಲಿ ಅತಿ ಹೆಚ್ಚು ಹಣ ಗೃಹಲಕ್ಷ್ಮಿ ಯೋಜನೆಗೆ ಹೋಗುತ್ತಿದೆ. ಮಧ್ಯವರ್ತಿಗಳ ಹಾವಳಿ ಇಲ್ಲದೆ ಯೋಜನೆ ತಲುಪಿಸಲಾಗುತ್ತಿದೆ. ಸರ್ಕಾರದ ಯೋಜನೆ ಪಡೆಯಲು ಎಷ್ಟು ಎಂಬುದು ಗೊತ್ತಿದೆ. ಆದರೆ, ಈ ಯೋಜನೆಗೆ ಯಾರಾದರೂ ಹಣ ನೀಡಿದ್ದೀರಾ' ಎಂದು ಮಹಿಳೆಯರನ್ನು ಕೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಾರಾಯಣಸ್ವಾಮಿ ಸ್ವಾಗತಿಸಿದರು. 28ರ ಬೆಂಗಳೂರು ಕಾರ್ಯಕ್ರಮಕ್ಕೆ ಜಿಲ್ಲೆಯಿಂದ 48 ಬಸ್ಸುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ತೆರಳಲಿದ್ದಾರೆ ಎಂದರು. ಮಂಜುಳಾ ಕೊಂಡರಾಜನಹಳ್ಳಿ ನಿರೂಪಿಸಿದರು.
ಸಂಸದ ಎಂ.ಮಲ್ಲೇಶ್ ಬಾಬು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ವೈ.ಶಿವಕುಮಾರ್, ನಗರಸಭೆ ಮಾಜಿ ಅಧ್ಯಕ್ಷೆ ಲಕ್ಷ್ಮಿದೇವಮ್ಮ, ಜಿಲ್ಲಾಧಿಕಾರಿ ಎಂ.ಆರ್.ರವಿ, ಜಿಲ್ಲಾ ಪಂಚಾಯಿತಿ ಸಿಇಒ ಪ್ರವೀಣ್ ಪಿ.ಬಾಗೇವಾಡಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರವಿಶಂಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿಶ್ವನಾಥ್, ಮುನಿರಾಜು, ಅಧಿಕಾರಿಗಳು, ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಇದ್ದರು.
ಹೆಣ್ಣು ಮಕ್ಕಳ ಸುರಕ್ಷತೆ ‘ಅಕ್ಕ ಪಡೆ’
ಮಹಿಳೆಯರಿಗೆ ಶಕ್ತಿ ತುಂಬಲು ಹಾಗೂ ರಕ್ಷಣೆ ನೀಡುವ ಸಲುವಾಗಿ ‘ಅಕ್ಕ ಪಡೆ’ ಆರಂಭಿಸಲಾಗುತ್ತಿದ್ದು ಇದರಿಂದ ಮಹಿಳೆಯರಿಗೆ ನೈತಿಕವಾಗಿ ಸ್ಥೈರ್ಯ ಬರಲಿದೆ. ಜನನಿಬಿಡ ಪ್ರದೇಶದಲ್ಲಿ ಅಕ್ಕಪಡೆ ಸಂಚರಿಸಲಿದ್ದು ಮನೆಯ ಒಳಗೆ ಹಾಗೂ ಹೊರಗೆ ಹೆಣ್ಣುಮಕ್ಕಳು ಯಾವುದೇ ರೀತಿಯಲ್ಲಿ ತೊಂದರೆ ಅನುಭವಿಸಿದರೂ ಸಹಾಯವಾಣಿ ಮೂಲಕ ಗಮನಕ್ಕೆ ತರಬಹುದು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಪೊಲೀಸ್ ಇಲಾಖೆ ನೆರವಿನೊಂದಿಗೆ ಈ ಇಲಾಖೆ ಕಾರ್ಯನಿರ್ವಹಿಸಲಿದೆ. ಹೋಮ್ ಗಾರ್ಡ್ಸ್ ಎನ್‌ಸಿಸಿ ವಿದ್ಯಾರ್ಥಿಗಳು ಅಕ್ಕ ಪಡೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಬೆಳಿಗ್ಗೆ 8 ರಿಂದ ರಾತ್ರಿ 8ರ ವರೆಗೆ ಅಕ್ಕಪಡೆ ಶಾಲಾ ಕಾಲೇಜು ಪಾರ್ಕ್ ಶಾಪಿಂಗ್ ಮಾಲ್ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಗಸ್ತು ತಿರುಗಲಿದೆ. ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಸಹಾಯ ಮಾಡಲಿದೆ ಎಂದರು. ಡೀಪ್ ಫೇಕ್ ಹಾವಳಿ ಜಾಸ್ತಿ ಆಗುತ್ತಿದ್ದು ಇದಕ್ಕೆ ಹೆಣ್ಣುಮಕ್ಕಳು ಮಹಿಳೆಯರೇ ಟಾರ್ಗೆಟ್ ಆಗುತ್ತಿದ್ದಾರೆ. ಇದನ್ನು ತಡೆಯಲು ಅಕ್ಕ ಪಡೆ ಕೆಲಸ ಮಾಡಲಿದೆ. ಜೊತೆಗೆ ಆರಂಭಗೊಂಡ ಮೂರು ತಿಂಗಳಲ್ಲಿ ಮನೆ ಮನೆಗೆ ತೆರಳಲಿದೆ ಜನರಿಗೆ ಜಾಗೃತಿ ಮೂಡಿಸಲಿದೆ ಎಂದು ತಿಳಿಸಿದರು.
ಗೌರವಧನ ಹೆಚ್ಚಳ
ಮತ್ತೊಂದು ಗ್ಯಾರಂಟಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಸಿದ್ದರಾಮಯ್ಯ ಮೊದಲ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದಾಗ ₹2 ಸಾವಿರ ಗೌರವಧನ ಹೆಚ್ಚಿಸಿದ್ದರು. ಮತ್ತೆ ಅವರೇ ಮುಖ್ಯಮಂತ್ರಿ ಆಗಿ ಬಂದ ಮೇಲೆ ₹ 1 ಸಾವಿರ ಏರಿಕೆ ಮಾಡಿದರು. ಆ ನಡುವೆ ಬೇರೆ ಯಾವುದೇ ಸರ್ಕಾರ ಗಮನಿಸಲಿಲ್ಲ. ಮುಂಬರುವ ಬಜೆಟ್‌ನಲ್ಲಿ ಮತ್ತೊಂದು ಸಾವಿರ ಹೆಚ್ಚಿಸಲಾಗುವುದು. ಅದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಮಾಡಲಾಗುವುದು. ಇದು ನಮ್ಮ ಸರ್ಕಾರದ ಮತ್ತೊಂದು ಗ್ಯಾರಂಟಿ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.