ಮಾಲೂರು: ನಗರದ ಆಶ್ರಯ ಸಮಿತಿ ಸೇರಿದಂತೆ ತಾಲೂಕಿನ 28 ಗ್ರಾ.ಪಂ ವ್ಯಾಪ್ತಿಯಲ್ಲಿ ಸುಮಾರು 6 ಸಾವಿರ ವಸತಿ ರಹಿತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖಾಂತರ ನಿವೇಶನ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಕೆ.ವೈ.ನಂಜೇಗೌಡ ತಿಳಿಸಿದರು.
ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸರ್ಕಾರಿ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಅಕ್ಟೋಬರ್ 30ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಮಾಲೂರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಭೂಮಿ ಪೂಜೆ ನೆರವೇರಿಸುವ ಕಾರ್ಯಕ್ರಮ ನಿಗದಿಯಾಗಿದೆ. ಎಲ್ಲ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖಾವಾರು ಇರುವ ಯೋಜನೆಗಳ ಬಗ್ಗೆ ಪೂರ್ಣ ಮಾಹಿತಿ ಕಲೆಹಾಕಿ ಫಲಾನುಭವಿಗಳಿಗೆ ನೀಡುವ ಕಾರ್ಯ ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಯಾವುದಾದರೂ ಲೋಪ ಕಂಡು ಬಂದರೆ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಉಚಿತ ನಿವೇಶನ: ನಗರಸಭೆಯಿಂದ ಈಗಾಗಲೇ ಸುಮಾರು 1 ಸಾವಿರ ಫಲಾನುಭವಿಗಳಿಗೆ ಉಚಿತ ನಿವೇಶನ ನೀಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಅದೇ ರೀತಿ 28 ಗ್ರಾಮ ಪಂಚಾಯಿತಿ ಕ್ಷೇತ್ರಗಳ ವ್ಯಾಪ್ತಿಯಲ್ಲಿ 15 ಸಾವಿರ ನಿವೇಶನ ರಹಿತರಿಂದ ಅರ್ಜಿ ಬಂದಿವೆ. ಅದರಲ್ಲಿ ಆರ್ಹ ಫಲಾನುಭವಿಗಳು ಸುಮಾರು 6,270 ಮಂದಿಯನ್ನು ಗುರ್ತಿಸಿರುವುದಾಗಿ ಕಂದಾಯ ಇಲಾಖೆ ಹಾಗೂ ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದರು.
ಕ್ಷೇತ್ರಕ್ಕೆ ₹2.500 ಕೋಟಿ ಅನುದಾನ ತರಲಾಗಿದೆ. ₹21ಕೋಟಿ ವೆಚ್ಚದಲ್ಲಿ ನೂತನ ಬಸ್ ನಿಲ್ದಾಣ, ಪಟ್ಟಣದ ದೊಡ್ಡ ಕೆರೆಯನ್ನು ಹೈಟಕ್ ಮಾದರಿಯಲ್ಲಿ ₹35 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. 20 ಎಕರೆ ಭೂಮಿಯಲ್ಲಿ ₹40 ಕೋಟಿ ವೆಚ್ಚದಲ್ಲಿ ನೂತನ ಸರ್ಕಾರಿ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ, ₹3.20ಕೋಟಿ ವೆಚ್ಚದಲ್ಲಿ ಪೊಲೀಸ್ ವಸತಿ ಗೃಹ ನಿರ್ಮಾಣ ಉದ್ಘಾಟನೆ, ವಿಶೇಷವಾಗಿ ತಾಲ್ಲೂಕಿನ ಚವೇನಹಳ್ಳಿ ಬಳಿ ರೈತರ ಅನುಕೂಲಕ್ಕಾಗಿ ₹10.20 ಕೋಟಿ ವೆಚ್ಚದಲ್ಲಿ ಕೋಲ್ಡ್ ಸ್ಟೋರೆಜ್ ನಿರ್ಮಾಣಕ್ಕೆ ಭೂಮಿ ಪೂಜೆ, ₹106 ಕೋಟಿ ವೆಚ್ಚದಲ್ಲಿ ನಗರದ ರಸ್ತೆಗಳ ಅಭಿವೃದ್ಧಿ ಕಾಮಗಾರಿ ಭೂಮಿ ಪೂಜೆಗೆ ಚಾಲನೆ ನೀಡಲಿದ್ದಾರೆ ಎಂದರು.
ತಾಲ್ಲೂಕಿನ 28 ಇಲಾಖೆ ಅಧಿಕಾರಿಗಳು ತಮ್ಮ ಇಲಾಖೆಗಳಲ್ಲಿನ ಯೋಜನೆಗಳ ಪೂರ್ಣ ಮಾಹಿತಿ ನೀಡುವ ಮೂಲಕ ಅರ್ಹರನ್ನು ಗುರುತಿಸಬೇಕು ಎಂದು ಸೂಚನೆ ನೀಡಿದರು.
ತಹಶೀಲ್ದಾರ್ ಎಂ.ವಿ.ರೂಪ, ಇ.ಒ ಕೃಷ್ಣಪ್ಪ, ನಗರಸಭೆ ಮುಖ್ಯಾಧಿಕಾರಿ ಪ್ರದೀಪ್ ಕುಮಾರ್, ಸರ್ವೆ ಇಲಾಖೆ ಅಧಿಕಾರಿ ವಸಂತ್, ನಗರ ಪ್ರಾಧಿಕಾರ ಅಧ್ಯಕ್ಷ ಆಹಮದ್ ನಯುಂ ಖಾನ್, ಗ್ಯಾರಂಟಿ ಸಮಿತಿ ಅಧ್ಯಕ್ಷ ಆಂಜಿನಪ್ಪ, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುನೀಲ್ ನಂಜೇಗೌಡ, ಕೋಮುಲ್ ನಿರ್ದೇಶಕ ಶ್ರೀನಿವಾಸ್ ಸೇರಿದಂತೆ ಎಲ್ಲ ಇಲಾಖೆವಾರು ಅಧಿಕಾರಿಗಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.