ADVERTISEMENT

ಸರಕು ವಾಹನ ಪ್ರಯಾಣಿಕರನ್ನು ಸಾಗಿಸಿದರೆ ಕ್ರಮ

​ಪ್ರಜಾವಾಣಿ ವಾರ್ತೆ
Published 27 ಮೇ 2019, 14:55 IST
Last Updated 27 ಮೇ 2019, 14:55 IST
ಕೋಲಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ನಡೆಯಿತು.
ಕೋಲಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ನಡೆಯಿತು.   

ಕೋಲಾರ:ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಾತನಾಡಿ, ರಸ್ತೆ ಅಪಘಾತಗಳಾಗದಂತೆ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದರೆ ಅಗುವ ಪರಿಣಾಮದ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.

ಹೆದ್ದಾರಿಯಲ್ಲಿ ಇರುವ ಕಾಲುವೆಗಳು, ಮುಚ್ಚಿ ಹೋಗಿದ್ದು ಇವನ್ನು ತೆರವುಗೊಳಿಸಿ ಮಳೆ ನೀರು ಸರಾಗವಾಗಿ ಕೆರೆಗಳಿಗೆ ಹರಿಯಲು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಮಾಡಬೇಕು. ಮುಂದಿನ ಸಭೆಯಲ್ಲಿ ಜಂಕ್ಷನ್‍ಗಳು ಹಾಗೂ ಅಗತ್ಯವಿರುವೆಡೆ ಕೈಗೊಂಡಿರುವ ರಸ್ತೆ ಸುರಕ್ಷತಾ ಕ್ರಮಗಳ ಕುರಿತು ಪಿಪಿಟಿ ಪ್ರಸಂಟೇಷನ್ ಮೂಲಕ ಮಾಹಿತಿ ಒದಗಿಸಬೇಕು ಎಂದು ಹೇಳಿದರು.

ಸರಕು ವಾಹನಗಳಲ್ಲಿ ಪ್ರಯಾಣಿಕರನ್ನು ಸಾಗಿಸುವುದರಿಂದ ಸಾಕಷ್ಟು ಅಪಘಾತಗಳು ಸಂಭವಿಸಿವೆ. ಈ ಸಂಬಂಧ ಈಗಾಗಲೇ ಹಲವು ವಾಹನಗಳನ್ನು ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಶಾಲಾ ವಾಹನಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಂಡಿರಬೇಕು. ಸಾಮಥ್ರ್ಯಕ್ಕಿಂತ ಹೆಚ್ಚಿನ ಮಕ್ಕಳನ್ನು ಸಾಗಿಸುವವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.

ADVERTISEMENT

ಲೋಕೋಪಯೋಗಿ ಇಲಾಖೆಯವರು ಜಿಲ್ಲೆಯಲ್ಲಿ ರಸ್ತೆ ಗುಂಡಿಗಳಿರುವೆಡೆ ಮುಚ್ಚಿಬೇಕು. ಕಚೇರಿಯಲ್ಲಿ ಕುಳಿತುಕೊಂಡಿದ್ದರೆ ಯಾವ ರಸ್ತೆಯಲ್ಲಿ ಗುಂಡಿ ನಿರ್ಮಾಣವಾಗಿದೆ ಎಂಬುದು ಗೊತ್ತಾಗುವುದಿಲ್ಲ. ಪುಟ್‍ಬಾತ್‍ಗಳಲ್ಲಿ ವ್ಯಾಪಾರ ಮಾಡುವುದರಿಂದ ಪಾದಚಾರಿಗಳಿಗೆ ಹಾಗೂ ವಾಹನ ಚಾಲಕರಿಗೆ ತೊಂದರೆಯಾಗುತ್ತಿದೆ. ನಗರಸಭೆಯ ಅಧಿಕಾರಿಗಳು ಶೀಘ್ರದಲ್ಲೇ ತೆರವುಗೊಳಿಸಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರೋಹಿಣಿ ಕಟೋಚ್ ಸಪೆಟ್ ಮಾತನಾಡಿ, ಜಿಲ್ಲೆಯಲ್ಲಿ 14 ಕಡೆ ಅಪಘಾತ ವಲಯಗಳನ್ನು ಗುರುತಿಸಿದ್ದು, ಇಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಪ್ರಮುಖ ಸ್ಥಳಗಳಲ್ಲಿ ದೀಪ ಅಳವಡಿಸಬೇಕು, ಕೊಂಡರಾಜನಹಳ್ಳಿ ಹಾಗೂ ಜಿಲ್ಲಾಧಿಕಾರಿಗಳ ಕಛೇರಿ ಬಳಿ ಸರ್ವೀಸ್ ರಸ್ತೆ ನಿರ್ಮಾಣ, ಪಾದಚಾರಿ ಬ್ರಿಡ್ಜ್ ಹಾಗೂ ಬಸ್‍ಶೆಲ್ಟರ್ ನಿರ್ಮಿಸಲು ಲ್ಯಾಂಕೋ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ನಗರ ಪ್ರದೇಶಗಳಲ್ಲಿ ಈಗಾಗಲೇ ಹೆಲ್ಮೆಟ್ ಕಡ್ಡಾಯಗೊಳಿಸಲಾಯಿತು. ಅದೇ ರೀತಿ ಗ್ರಾಮಾಂತರ ಪ್ರದೇಶಗಳು ಸೇರಿದಂತೆ ಜಿಲ್ಲೆಯಾದ್ಯಂತ ಜು.1ರಿಂದ ಹೆಲ್ಮೆಟ್ ಕಡ್ಡಾಯಗೊಳಿಸಲಾಗುವುದು. ಪ್ರತಿ ಬಾರಿತಪಾಸಣೆಯಲ್ಲೂ ₨ 100 ದಂಡ ಪಾವತಿ ಮಾಡುವ ಬದಲು₨ 500 ನೀಡಿ ಹೆಲ್ಮೆಟ್ ಖರೀದಿಸಿ ಬಳಸುವಂತೆ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುವುದು ಎಂದು ಹೇಳಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ನೇಪಾನಂದ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.