ADVERTISEMENT

ಕಟ್ಟಡ ಕಾರ್ಮಿಕರಿಗೆ ಪರಿಹಾರ ಹೆಚ್ಚಿಸಿ

​ಪ್ರಜಾವಾಣಿ ವಾರ್ತೆ
Published 31 ಜುಲೈ 2021, 15:08 IST
Last Updated 31 ಜುಲೈ 2021, 15:08 IST

ಕೋಲಾರ: ‘ಕೋವಿಡ್‌ ಸಂಕಷ್ಟದ ಹಿನ್ನೆಲೆಯಲ್ಲಿ ಕಟ್ಟಡ ಕಾರ್ಮಿಕರಿಗೆ ಸರ್ಕಾರ ನೀಡುತ್ತಿರುವ ಪರಿಹಾರ ಮೊತ್ತವನ್ನು ₹ 3 ಸಾವಿರದಿಂದ ₹ 5 ಸಾವಿರಕ್ಕೆ ಹೆಚ್ಚಿಸಬೇಕು’ ಎಂದು ಶಾಸಕ ಕೆ.ಶ್ರೀನಿವಾಸಗೌಡ ಒತ್ತಾಯಿಸಿದರು.

ತಾಲ್ಲೂಕಿನಲ್ಲಿ ವೇಮಗಲ್‌ನಲ್ಲಿ ಶನಿವಾರ ಕಟ್ಟಡ ಕಾರ್ಮಿಕರಿಗೆ ಆಹಾರ ಧಾನ್ಯಗಳ ಕಿಟ್‌ ವಿತರಿಸಿ ಮಾತನಾಡಿ, ‘ಕಟ್ಟಡ ಕಾರ್ಮಿಕರು ಸಮಾಜದ ಕಟ್ಟಕಡೆಯ ಉದ್ಯೋಗವಾದ ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ತೊಡಗಿಸಿಕೊಂಡು ದಿನಭತ್ಯೆ ಮೇಲೆ ಜೀವನ ರೂಪಿಸಿಕೊಂಡಿದ್ದಾರೆ. ಕೋವಿಡ್‌ ಹಿನ್ನೆಲೆಯಲ್ಲಿ ಸರ್ಕಾರ ಇವರಿಗೆ ಘೋಷಿಸಿರುವ ₹ 3 ಸಾವಿರ ಆರ್ಥಿಕ ನೆರವು ತುಂಬಾ ಕಡಿಮೆ’ ಎಂದು ಅಭಿಪ್ರಾಯಪಟ್ಟರು.

‘ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಕಟ್ಟಡ ಕಾರ್ಮಿಕರಿಗೆ ಜೀವನ ನಿರ್ವಹಣೆ ಮಾಡುವುದು ಕಷ್ಟವಾಗಿದೆ. ಹೀಗಾಗಿ ಇವರಿಗೆ ಹೆಚ್ಚಿನ ಆರ್ಥಿಕ ನೆರವು ನೀಡಬೇಕು. ಬ್ಯಾಂಕ್‌ ಖಾತೆಗೆ ಆಧಾರ್‌ ಸಂಖ್ಯೆ ಜೋಡಣೆಯಾಗದ ಕಾರಣ ಸಾಕಷ್ಟು ಕಾರ್ಮಿಕರಿಗೆ ಸರ್ಕಾರದ ನೆರವು ಸಿಕ್ಕಿಲ್ಲ. ಜಿಲ್ಲಾಧಿಕಾರಿಯು ಈ ತಾಂತ್ರಿಕ ಸಮಸ್ಯೆ ಪರಿಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಬೇಕು’ ಎಂದು ಹೇಳಿದರು.

ADVERTISEMENT

‘ಸರ್ಕಾರ ಕಾರ್ಮಿಕ ಇಲಾಖೆ ಮೂಲಕ ಫಲಾನುಭವಿ ಕಾರ್ಮಿಕರನ್ನು ನೋಂದಣಿ ಮಾಡಿಕೊಳ್ಳುತ್ತಿದೆ. ಈ ಕಾರ್ಮಿಕರಿಗೆ ಸರ್ಕಾರದ ಸವಲತ್ತುಗಳ ಅರಿವು ಮೂಡಿಸಬೇಕು. ಅಧಿಕಾರಿಗಳು ಅರ್ಹ ಕಾರ್ಮಿಕರಿಗೆ ಸಕಾಲಕ್ಕೆ ಸರ್ಕಾರದ ಸೇವೆ ಸಿಗುವಂತೆ ಮಾಡಬೇಕು’ ಎಂದು ಡಿಸಿಸಿ ಬ್ಯಾಂಕ್‌ ನಿರ್ದೇಶಕ ಸೋಮಣ್ಣ ಕಿವಿಮಾತು ಹೇಳಿದರು.

ಕೌಶಲ ತರಬೇತಿ: ‘ಕಟ್ಟಡ ಕಾರ್ಮಿಕರ ಕೌಶಲ ಅಭಿವೃದ್ಧಿಗೆ ಕೌಶಲ ಅಭಿವೃದ್ಧಿ ನಿಗಮದ ಮೂಲಕ ತರಬೇತಿ ನೀಡಲಾಗುತ್ತಿದೆ. ತರಬೇತಿ ಪಡೆಯಲಿಚ್ಛಿಸುವ ಕಾರ್ಮಿಕರು ಹೆಸರು ನೋಂದಾಯಿಸಿದರೆ 1 ತಿಂಗಳು ಉಚಿತವಾಗಿ ತರಬೇತಿ ನೀಡಲಾಗುವುದು’ ಎಂದು ಅಸಂಘಟಿತ ಕಾರ್ಮಿಕರ ಪರಿಷತ್ ಅಧ್ಯಕ್ಷ ಕೆ.ವಿ.ಸುರೇಶ್‌ಕುಮಾರ್ ವಿವರಿಸಿದರು.

ವೇಮಗಲ್ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷ ನಾಗೇಶ್‌ಗೌಡ, ನಿರ್ದೇಶಕರಾದ ಬೈರಾರೆಡ್ಡಿ, ಬಾಬಣ್ಣ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಶಶಿಕಲಾ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.