ADVERTISEMENT

ಹಾಲು ಖರೀದಿ ದರ ಹೆಚ್ಚಳ: ಹೈನೋದ್ಯಮಕ್ಕೆ ಬಲ

ಅವಿಭಜಿತ ಕೋಲಾರ ಜಿಲ್ಲೆಯ ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ

ಜೆ.ಆರ್.ಗಿರೀಶ್
Published 20 ಜನವರಿ 2021, 14:09 IST
Last Updated 20 ಜನವರಿ 2021, 14:09 IST
ಕೋಲಾರದಲ್ಲಿರುವ ಕೋಚಿಮುಲ್‌ ಆಡಳಿತ ಕಚೇರಿಯ ಹೊರ ನೋಟ.
ಕೋಲಾರದಲ್ಲಿರುವ ಕೋಚಿಮುಲ್‌ ಆಡಳಿತ ಕಚೇರಿಯ ಹೊರ ನೋಟ.   

ಕೋಲಾರ: ಹೈನುಗಾರಿಕೆಯೇ ಜೀವನಾಡಿಯಾಗಿರುವ ಅವಿಭಜಿತ ಕೋಲಾರ ಜಿಲ್ಲೆಯ ಹಾಲು ಉತ್ಪಾದಕರಿಗೆ ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟವು (ಕೋಚಿಮುಲ್‌) ಸಿಹಿ ಸುದ್ದಿ ನೀಡಿದ್ದು, ಹಾಲು ಖರೀದಿ ದರವನ್ನು ಲೀಟರ್‌ಗೆ ₹ 2 ಹೆಚ್ಚಿಸಿದೆ.

ಕೋಚಿಮುಲ್‌ ವ್ಯಾಪ್ತಿಯ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 1,870 ಪ್ರಾಥಮಿಕ ಹಾಲು ಸಹಕಾರ ಸಂಘಗಳಿದ್ದು, ಸುಮಾರು 2.87 ಲಕ್ಷ ಹಾಲು ಉತ್ಪಾದಕರು ಒಕ್ಕೂಟದ ಸದಸ್ಯರಾಗಿದ್ದಾರೆ. ಹಾಲು ಸಂಗ್ರಹಣೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನದಲ್ಲಿರುವ ಒಕ್ಕೂಟದಲ್ಲಿ ದಿನನಿತ್ಯ 8.87 ಲಕ್ಷ ಲೀಟರ್‌ ಹಾಲು ಶೇಖರಣೆಯಾಗುತ್ತಿದೆ.

ಕಳೆದ ವರ್ಷ ಕೋವಿಡ್‌–19 ಮತ್ತು ಲಾಕ್‌ಡೌನ್‌ ಹೊಡೆತಕ್ಕೆ ಹಾಲು ಹಾಗೂ ಹಾಲಿನ ಉತ್ಪನ್ನಗಳ ಮಾರಾಟ ಪ್ರಮಾಣ ಗಣನೀಯವಾಗಿ ಕುಸಿದಿತ್ತು. ಲಾಕ್‌ಡೌನ್‌ನಿಂದ ಸರಕು ಸಾಗಣೆ ಸೇವೆಯಲ್ಲಿ ವ್ಯತ್ಯಯವಾಗಿ ಹೊರ ರಾಜ್ಯ ಮತ್ತು ಜಿಲ್ಲೆಗಳಿಗೆ ಹಾಲು ಪೂರೈಕೆ ಸ್ಥಗಿತಗೊಂಡಿತ್ತು.

ADVERTISEMENT

ಜಾಗತಿಕವಾಗಿ ಹಾಲಿನ ಪುಡಿ, ಬೆಣ್ಣೆ ಬೆಲೆಯು ದಾಖಲೆ ಪ್ರಮಾಣದಲ್ಲಿ ಕುಸಿದು ಮಾರುಕಟ್ಟೆಯಲ್ಲಿ ಬೇಡಿಕೆ ಇಲ್ಲವಾಗಿತ್ತು. ಹಾಲಿನ ಪುಡಿ ಮತ್ತು ಬೆಣ್ಣೆಯು ಗೋದಾಮುಗಳಲ್ಲೇ ಉಳಿದು ಒಕ್ಕೂಟಕ್ಕೆ ನಷ್ಟದ ಭೀತಿ ಎದುರಾಗಿತ್ತು. ನಷ್ಟದಿಂದ ಪಾರಾಗಲು ಕೋಚಿಮುಲ್‌ ಆಡಳಿತ ಮಂಡಳಿಯು ಹಾಲು ಉತ್ಪಾದಕರ ಮೇಲೆ ದರ ಇಳಿಕೆಯ ಅಸ್ತ್ರ ಪ್ರಯೋಗಿಸಿತ್ತು.

ಲಾಕ್‌ಡೌನ್‌ ಸಡಿಲಿಕೆ ಬಳಿಕ ಕೊರೊನಾ ಆತಂಕ ದೂರವಾಗಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ಚೇತರಿಸಿಕೊಂಡಿದೆ. ಹೀಗಾಗಿ ಹಾಲು ಖರೀದಿ ದರ ಹೆಚ್ಚಿಸಬೇಕೆಂಬ ಕೂಗು ರೈತರಿಂದ ಬಲವಾಗಿ ಕೇಳಿಬಂದಿತ್ತು.

ಬೇಡಿಕೆಗೆ ಸ್ಪಂದನೆ: ಕೊನೆಗೂ ರೈತರ ಬೇಡಿಕೆಗೆ ಸ್ಪಂದಿಸಿರುವ ಒಕ್ಕೂಟವು ಹಾಲು ಖರೀದಿ ದರ ಹೆಚ್ಚಳ ಮಾಡಿದೆ. ಸಂಕಷ್ಟದಲ್ಲಿರುವ ಹೈನೋದ್ಯಮಕ್ಕೆ ಬಲ ತುಂಬುವ ನಿಟ್ಟಿನಲ್ಲಿ ಕೋಚಿಮುಲ್‌ ಆಡಳಿತ ಮಂಡಳಿಯು ಈ ನಿರ್ಧಾರ ಕೈಗೊಂಡಿದೆ.

ಸದ್ಯ ಹಾಲು ಖರೀದಿ ದರ ಲೀಟರ್‌ಗೆ ₹ 24 ಇದೆ. ದರ ಹೆಚ್ಚಳದ ನಂತರ ಪರಿಷ್ಕೃತ ದರ ಲೀಟರ್‌ಗೆ ₹ 26ಕ್ಕೆ ಏರಿಕೆಯಾಗಿದೆ. ಹೊಸ ದರ ಜ.24ರಿಂದ ಜಾರಿಗೆ ಬರಲಿದೆ. ಇದರ ಜತೆಗೆ ಪ್ರೋತ್ಸಾಹಧನವಾಗಿ ಸರ್ಕಾರ ಲೀಟರ್‌ಗೆ ₹ 5 ಕೊಡುತ್ತದೆ.

ಬೆನ್ನೆಲುಬು: ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳು ಬರಪೀಡಿತ ಜಿಲ್ಲೆಗಳಾಗಿದ್ದು, ಕೃಷಿ ನಿರ್ವಹಣೆ ಕಷ್ಟವಾಗಿದೆ. ಅಂತರ್ಜಲ ಮಟ್ಟ ಪಾತಾಳಕ್ಕೆ ಕುಸಿದಿದ್ದು, 2 ಸಾವಿರ ಅಡಿ ಕೊಳವೆ ಬಾವಿ ಕೊರೆದರೂ ನೀರು ಸಿಗುವುದು ಕಷ್ಟ. ಹೀಗಾಗಿ ರೈತರು ಕೃಷಿಯ ಬದಲಿಗೆ ಹೈನುಗಾರಿಕೆಯತ್ತ ಮುಖ ಮಾಡಿದ್ದು, ಹೈನುಗಾರಿಕೆಯು ಬಹುಪಾಲು ರೈತ ಕುಟುಂಬಗಳ ಬೆನ್ನೆಲುಬಾಗಿದೆ. ಕೃಷಿಗೆ ಪರ್ಯಾಯವಾಗಿ ಹೈನುಗಾರಿಕೆಯು ಪ್ರಮುಖ ಆದಾಯ ಮೂಲವಾಗಿದೆ. ಕೋವಿಡ್‌ ಸಂಕಷ್ಟದ ನಡುವೆಯೂ ಹಾಲು ಖರೀದಿ ದರ ಹೆಚ್ಚಿಸಿರುವುದು ರೈತರ ಮೊಗದಲ್ಲಿ ಸಂತಸ ಮೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.