ADVERTISEMENT

ಕೋಲಾರ | ಗರ್ಭಿಣಿ ಸೇರಿ ಇಬ್ಬರಿಗೆ ಸೋಂಕು

​ಪ್ರಜಾವಾಣಿ ವಾರ್ತೆ
Published 30 ಜೂನ್ 2020, 16:18 IST
Last Updated 30 ಜೂನ್ 2020, 16:18 IST

ಕೋಲಾರ: ಜಿಲ್ಲೆಯಲ್ಲಿ ಮಂಗಳವಾರ ಗರ್ಭಿಣಿ ಸೇರಿದಂತೆ ಇಬ್ಬರಿಗೆ ಕೊರೊನಾ ಸೋಂಕು ತಗುಲಿದ್ದು, ಜನರಲ್ಲಿ ಆತಂಕ ಹೆಚ್ಚಿದೆ.

ಕೋಲಾರ ನಗರದ 23 ವರ್ಷದ ಗರ್ಭಿಣಿಯು ಆರೋಗ್ಯ ತಪಾಸಣೆಗಾಗಿ ಇತ್ತೀಚೆಗೆ ಎಸ್‌ಎನ್‌ಆರ್‌ ಆಸ್ಪತ್ರೆಗೆ ಬಂದಿದ್ದರು. ಅವರ ಕಫಾ ಮತ್ತು ರಕ್ತ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಮಂಗಳವಾರ ರಾತ್ರಿ ಬಂದ ಪ್ರಯೋಗಾಲಯ ವರದಿಯಲ್ಲಿ ಇವರಿಗೆ ಸೋಂಕು ಇರುವುದು ದೃಢಪಟ್ಟಿದೆ.

ಎಸ್‌ಎನ್‌ಆರ್‌ ಆಸ್ಪತ್ರೆಯಲ್ಲಿ ಕೆಲಸ ಮಾಡುವ ಮಾಲೂರು ತಾಲ್ಲೂಕಿನ ಆರೋಗ್ಯ ಕಾರ್ಯಕರ್ತೆಯೊಬ್ಬರಿಗೆ ಸೋಂಕು ಇರುವುದು ಖಚಿತವಾಗಿದೆ. ಇವರಿಗೆ ಸೋಂಕು ಹೇಗೆ ಹರಡಿತು ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಸೋಂಕಿತ ಗರ್ಭಿಣಿ ಮತ್ತು ಆರೋಗ್ಯ ಕಾರ್ಯಕರ್ತೆಯನ್ನು ಎಸ್‌ಎನ್‌ಆರ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರ ಸಂಪರ್ಕಕ್ಕೆ ಬಂದಿರುವ ವ್ಯಕ್ತಿಗಳನ್ನು ಕ್ವಾರಂಟೈನ್‌ ಮಾಡಲಾಗಿದೆ.

ADVERTISEMENT

ಶವದಲ್ಲಿ ಪತ್ತೆ: ಅನಾರೋಗ್ಯದ ಕಾರಣದಿಂದ ಎಸ್‌ಎನ್‌ಆರ್‌ ಆಸ್ಪತ್ರೆಯಲ್ಲಿ ಮಂಗಳವಾರ ಮೃತಪಟ್ಟ ಕೋಲಾರದ ಕೆ.ಜಿ ಮೊಹಲ್ಲಾ ಬಡಾವಣೆಯ 35 ವರ್ಷದ ಮಹಿಳೆಗೆ ಕೊರೊನಾ ಸೋಂಕು ಇದ್ದ ಸಂಗತಿ ಗೊತ್ತಾಗಿದೆ.

ಪ್ರಯೋಗಾಲಯ ಸಿಬ್ಬಂದಿಯು ಮೃತ ಮಹಿಳೆಯ ಶವದಿಂದ ಕಫಾ ಮಾದರಿ ಸಂಗ್ರಹಿಸಿ ಪರೀಕ್ಷೆ ಮಾಡಿದಾಗ ಸೋಂಕು ಇರುವುದು ಖಚಿತವಾಗಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದ ಇವರು ಸೋಮವಾರ ರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಎಸ್‌ಎನ್‌ಆರ್‌ ಆಸ್ಪತ್ರೆಗೆ ಬಂದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.