ADVERTISEMENT

ಸೋಂಕು ತಡೆ ಪ್ರಥಮ ಆದ್ಯತೆಯಾಗಲಿ

ಸಭೆಯಲ್ಲಿ ಪಿಡಿಒಗಳಿಗೆ ಶಾಸಕ ಶ್ರೀನಿವಾಸಗೌಡ ಸೂಚನೆ

​ಪ್ರಜಾವಾಣಿ ವಾರ್ತೆ
Published 4 ಮೇ 2021, 12:58 IST
Last Updated 4 ಮೇ 2021, 12:58 IST
ಶಾಸಕ ಕೆ.ಶ್ರೀನಿವಾಸಗೌಡ ಕೋವಿಡ್‌ ನಿರ್ವಹಣೆ ಸಂಬಂಧ ಕೋಲಾರದಲ್ಲಿ ಮಂಗಳವಾರ ಪಿಡಿಒಗಳ ಸಭೆ ನಡೆಸಿದರು.
ಶಾಸಕ ಕೆ.ಶ್ರೀನಿವಾಸಗೌಡ ಕೋವಿಡ್‌ ನಿರ್ವಹಣೆ ಸಂಬಂಧ ಕೋಲಾರದಲ್ಲಿ ಮಂಗಳವಾರ ಪಿಡಿಒಗಳ ಸಭೆ ನಡೆಸಿದರು.   

ಕೋಲಾರ: ‘ದೇಶದಲ್ಲಿ ಕೋವಿಡ್‌ ಎರಡನೇ ಅಲೆ ಆರ್ಭಟ ಜೋರಾಗಿದ್ದು, ಕೊರೊನಾ ಸೋಂಕು ಹರಡುವಿಕೆ ತಡೆಯುವ ಕಾರ್ಯವನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪ್ರಥಮ ಆದ್ಯತೆಯಾಗಿ ತೆಗೆದುಕೊಳ್ಳಬೇಕು’ ಎಂದು ಶಾಸಕ ಕೆ.ಶ್ರೀನಿವಾಸಗೌಡ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.

ಕೋವಿಡ್‌ ಪರಿಸ್ಥಿತಿ ನಿರ್ವಹಣೆ ಸಂಬಂಧ ಇಲ್ಲಿ ಮಂಗಳವಾರ ನಡೆದ ತಾಲ್ಲೂಕಿನ ಪಿಡಿಒಗಳ ಸಭೆಯಲ್ಲಿ ಮಾತನಾಡಿ, ‘ಮೊದಲು ಜನ ಬದುಕಬೇಕು. ಈ ನಿಟ್ಟಿನಲ್ಲಿ ರಸ್ತೆ, ಚರಂಡಿ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ಬರುವ ಅನುದಾನ ಬಳಸಿಕೊಂಡು ಕೊರೊನಾ ಸೋಂಕು ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ಕೊಡಿ’ ಎಂದು ತಿಳಿಸಿದರು.

‘ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವಿಕೆ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಜನರಿಗೆ ಕೋವಿಡ್‌ನ ತೀವ್ರತೆ ಮತ್ತು ಸೋಂಕಿನಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಬೇಕು. ಜಿಲ್ಲೆಯನ್ನು ಕೊರೊನಾ ಮುಕ್ತ ಜಿಲ್ಲೆಯಾಗಿಸಲು ಗ್ರಾ.ಪಂ ವ್ಯಾಪ್ತಿಯಲ್ಲಿ ಅಧಿಕಾರಿಗಳು ಶಕ್ತಿ ಮೀರಿ ಕೆಲಸ ಮಾಡಬೇಕು. ಕೊರೊನಾ ಸೋಂಕು ನಗರ ಪ್ರದೇಶಕ್ಕಷ್ಟೇ ಸೀಮಿತವಾಗದೆ ಹಳ್ಳಿಗಳಿಗೂ ವೇಗವಾಗಿ ವ್ಯಾಪಿಸುತ್ತಿದೆ’ ಎಂದು ಆತಂಕ ವ್ಯಕ್ತಪಡಿಸಿದರು.

ADVERTISEMENT

‘ಕೋವಿಡ್‌ ನಿಯಂತ್ರಣಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯ. ಸಾರ್ವಜನಿಕರು ಕೊರೊನಾ ಬಗ್ಗೆ ಹೆಚ್ಚು ಜಾಗೃತರಾಗಬೇಕು. ಸರ್ಕಾರ ಕಾಲಕಾಲಕ್ಕೆ ಹೊರಡಿಸುವ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು. ಅನಗತ್ಯವಾಗಿ ಮನೆಯಿಂದ ಹೊರಬಂದು ರಸ್ತೆಗಳಲ್ಲಿ ಓಡಾಡಬಾರದು. ಅಗತ್ಯವಿದ್ದರಷ್ಟೇ ಮನೆಯಿಂದ ಹೊರ ಬರಬೇಕು’ ಎಂದು ಕಿವಿಮಾತು ಹೇಳಿದರು.

ಅಡ್ಡ ಪರಿಣಾಮವಿಲ್ಲ: ‘ಕೋವಿಡ್‌ ಲಸಿಕೆ ಬಗ್ಗೆ ಪ್ರತಿಯೊಬ್ಬರಿಗೂ ಅರಿವು ಮೂಡಿಸಬೇಕು. ಜತೆಗೆ ಲಸಿಕೆ ಹಾಕಿಸಿಕೊಳ್ಳುವಂತೆ ಜನರ ಮನವೊಲಿಸಬೇಕು. ಲಸಿಕೆ ಪಡೆಯುವುದರಿಂದ ಆರೋಗ್ಯದ ಮೇಲೆ ಯಾವುದೇ ಅಡ್ಡ ಪರಿಣಾಮ ಆಗುವುದಿಲ್ಲ ಎಂದು ಜನರಿಗೆ ತಿಳಿ ಹೇಳಬೇಕು’ ಎಂದು ಸಲಹೆ ನೀಡಿದರು.

‘ಲಾಕ್‌ಡೌನ್‌ ಕಾರಣಕ್ಕೆ ಬೆಂಗಳೂರಿನಿಂದ ಜಿಲ್ಲೆಯ ಹಳ್ಳಿಗಳಿಗೆ ಹಿಂದಿರುಗಿರುವವರ ಮೇಲೆ ಹೆಚ್ಚಿನ ನಿಗಾ ವಹಿಸಬೇಕು. ಬೆಂಗಳೂರಿನಿಂದ ಬಂದಿರುವವರನ್ನು ಪತ್ತೆ ಹಚ್ಚಿ ಕೋವಿಡ್‌ ಪರೀಕ್ಷೆ ಮಾಡಿಸಬೇಕು. ಕೊರೊನಾ ಪ್ರಕರಣಗಳು ಹೆಚ್ಚಿರುವ ಹಳ್ಳಿಗಳಲ್ಲಿ ಜನರ ಅನಗತ್ಯ ಓಡಾಟವನ್ನು ಸಾಧ್ಯವಾದಷ್ಟು ನಿರ್ಬಂಧಿಸಬೇಕು. ಕಂಟೈನ್‌ಮೆಂಟ್‌ ವಲಯಗಳಲ್ಲಿ ಪೊಲೀಸರು ಹೆಚ್ಚು ನಿಗಾ ವಹಿಸಬೇಕು’ ಎಂದು ಸೂಚನೆ ನೀಡಿದರು.

ವಿಶೇಷ ಕಾರ್ಯಪಡೆ: ‘ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ 36 ಗ್ರಾ.ಪಂಗಳಲ್ಲಿ ಕೋವಿಡ್‌ ನಿಯಂತ್ರಣಕ್ಕೆ ವಿಶೇಷ ಕಾರ್ಯಪಡೆ ರಚಿಸಲಾಗಿದೆ. ಈ ಕಾರ್ಯಪಡೆ ಸದಸ್ಯರು ಗ್ರಾ.ಪಂ ವ್ಯಾಪ್ತಿಯ ಪ್ರತಿ ಹಳ್ಳಿಗೆ ಭೇಟಿ ಕೊಟ್ಟು ಕೋವಿಡ್‌ ಬಗ್ಗೆ ಜಾಗೃತಿ ಮೂಡಿಸುತ್ತಾರೆ. ಸೋಂಕಿನ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಹಳ್ಳಿಗಳಲ್ಲಿ ಸ್ಯಾನಿಟೈಸರ್‌ ಸಿಂಪಡಿಸಲಾಗುತ್ತಿದೆ ಮತ್ತು ಸೋಂಕಿತರು ಮೃತಪಟ್ಟರೆ ಅಂತ್ಯಕ್ರಿಯೆಗೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ’ ಎಂದು ತಾ.ಪಂ ಕಾರ್ಯ ನಿರ್ವಹಣಾಧಿಕಾರಿ ಬಾಬು ವಿವರಿಸಿದರು.

ತಾ.ಪಂ ಅಧ್ಯಕ್ಷ ಎಂ.ಆಂಜಿನಪ್ಪ, ನಗರಸಭೆ ಅಧ್ಯಕ್ಷೆ ಶ್ವೇತಾ, ಉಪಾಧ್ಯಕ್ಷ ಪ್ರವೀಣ್‌ಗೌಡ, ಆಯುಕ್ತ ಶ್ರೀಕಾಂತ್, ನಗರ ಠಾಣೆ ಎಸ್‌ಐ ಅಣ್ಣಯ್ಯ, ಪಿಡಿಒಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.