ADVERTISEMENT

ಕಾರ್ಮಿಕರ ಹಕ್ಕು ರಕ್ಷಣೆಗೆ ಒತ್ತಾಯ

ಹಿತ ಕಾಯುವಲ್ಲಿ ಸರ್ಕಾರಗಳು ವಿಫಲ: ಸಿಐಟಿಯು ಸದಸ್ಯರ ಆರೋಪ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2020, 14:36 IST
Last Updated 24 ಸೆಪ್ಟೆಂಬರ್ 2020, 14:36 IST
ಕಾರ್ಮಿಕರ ಹಕ್ಕುಗಳ ರಕ್ಷಣೆಗೆ ಒತ್ತಾಯಿಸಿ ಸಿಐಟಿಯು ಸದಸ್ಯರು ಕೋಲಾರ ತಹಶೀಲ್ದಾರ್‌ ಕಚೇರಿ ಎದುರು ಗುರುವಾರ ಧರಣಿ ನಡೆಸಿದರು.
ಕಾರ್ಮಿಕರ ಹಕ್ಕುಗಳ ರಕ್ಷಣೆಗೆ ಒತ್ತಾಯಿಸಿ ಸಿಐಟಿಯು ಸದಸ್ಯರು ಕೋಲಾರ ತಹಶೀಲ್ದಾರ್‌ ಕಚೇರಿ ಎದುರು ಗುರುವಾರ ಧರಣಿ ನಡೆಸಿದರು.   

ಕೋಲಾರ: ಕಾರ್ಮಿಕರ ಹಕ್ಕುಗಳನ್ನು ರಕ್ಷಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಿಐಟಿಯು ಸದಸ್ಯರು ಇಲ್ಲಿ ಗುರುವಾರ ತಹಶೀಲ್ದಾರ್‌ ಕಚೇರಿ ಎದುರು ಧರಣಿ ನಡೆಸಿದರು.

‘ಕೋವಿಡ್‌–19 ಮತ್ತು ಲಾಕ್‌ಡೌನ್‌ ಕಾರಣಕ್ಕೆ ದೇಶದ ಅರ್ಥ ವ್ಯವಸ್ಥೆ ಬುಡ ಮೇಲಾಗಿದೆ. ಬಡ ಜನರು, ಕಾರ್ಮಿಕರು ಮತ್ತು ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಇವರ ಹಿತ ಕಾಯುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲವಾಗಿವೆ’ ಎಂದು ಧರಣಿನಿರತರು ಆಕ್ರೋಶ ವ್ಯಕ್ತಪಡಿಸಿದರು.

‘ಬಂಡವಾಳಶಾಹಿಗಳು ಮತ್ತು ಬಹುರಾಷ್ಟ್ರೀಯ ಕಂಪನಿಗಳ ಕೈಗೊಂಬೆಯಾಗಿರುವ ಸರ್ಕಾರಗಳು ಕಾರ್ಮಿಕರ ಕಾನೂನುಗಳಿಗೆ ತಿದ್ದುಪಡಿ ತಂದಿವೆ. ಪ್ರಧಾನಿ ಮೋದಿ ಕಾರ್ಮಿಕರ ಸಂಕಷ್ಟ ಪರಿಹರಿಸದೆ ಭಾಷಣಕ್ಕೆ ಸೀಮಿತವಾಗಿದ್ದಾರೆ. ಬಡ ಕಾರ್ಮಿಕರು ಆಹಾರ ಸಿಗದೆ ಹಸಿವಿನಿಂದ ಸಾಯುತ್ತಿದ್ದಾರೆ’ ಎಂದು ಸಿಐಟಿಯು ಜಿಲ್ಲಾ ಘಟಕದ ಉಪಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ಕಳವಳ ವ್ಯಕ್ತಪಡಿಸಿದರು.

ADVERTISEMENT

‘ಸರ್ಕಾರಗಳು ಕಾರ್ಮಿಕರ ಶೋಷಣೆ ಮುಕ್ತ ಸಮಾಜ ನಿರ್ಮಾಣಕ್ಕೆ ಪೂರಕವಾಗಿ ಕಾರ್ಮಿಕ ಕಾಯಿದೆ ರೂಪಿಸುವ ಬದಲು ಬಂಡವಾಳಶಾಹಿಗಳು ಹಾಗೂ ಬಹುರಾಷ್ಟ್ರೀಯ ಕಂಪನಿಗಳ ಪರವಾದ ಕಾನೂನು ರೂಪಿಸುತ್ತಿವೆ. ಹೊಸ ಕಾಯಿದೆಗಳು ಕಾರ್ಮಿಕರ ಪರವಾಗಿ ಇರುವುದಿಲ್ಲ’ ಎಂದು ಆತಂಕ ವ್ಯಕ್ತಪಡಿಸಿದರು.

‘ಲಾಕ್‌ಡೌನ್ ನಂತರ ದೇಶದಲ್ಲಿ ಸಂಘಟಿತ ಹಾಗೂ ಅಸಂಘಟಿತ ವಲಯದ 14 ಕೋಟಿ ಕಾರ್ಮಿಕರು ಉದ್ಯೋಗ ಕಳೆದುಕೊಂಡಿದ್ದಾರೆ. ನಿರುದ್ಯೋಗ ಸಮಸ್ಯೆ ಮತ್ತಷ್ಟು ಗಂಭೀರವಾಗಿದೆ. ಜನರ ಆದಾಯ ಕುಸಿಯುತ್ತಿದ್ದು, ಜೀವನ ಭದ್ರತೆ ದುರ್ಬಲಗೊಳ್ಳುತ್ತಿದೆ’ ಎಂದು ಸಿಐಟಿಯು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ಅಸಮಾಧಾನ ವ್ಯಕ್ತಪಡಿಸಿದರು.

ಕಾರ್ಮಿಕರ ಶೋಷಣೆ: ‘ಕೈಗಾರಿಕೆಗಳು ಹಾಗೂ ಖಾಸಗಿ ಕಂಪನಿಗಳು ಸರ್ಕಾರದ ಆದೇಶ ಧಿಕ್ಕರಿಸಿ ಕಾರ್ಮಿಕರಿಗೆ ವೇತನ ನೀಡದೆ ಶೋಷಿಸುತ್ತಿವೆ. ಕೈಗಾರಿಕೆಗಳು ಬಂದ್‌ ಆಗಿರುವುದರಿಂದ ಕಾರ್ಮಿಕರು ಕೆಲಸ ಕಳೆದುಕೊಂಡು ನಿರುದ್ಯೋಗಿಗಳಾಗಿದ್ದಾರೆ. ಸಂಪಾದನೆ ಇಲ್ಲದೆ ಕಾರ್ಮಿರಿಗೆ ಜೀವನ ನಡೆಸುವುದು ಕಷ್ಟವಾಗಿದೆ. ಸರ್ಕಾರಗಳು ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿವೆ’ ಎಂದು ಧರಣಿನಿರತರು ಆರೋಪಿಸಿದರು.

‘ಕೋವಿಡ್‌–19ನಿಂದ ಸಂಕಷ್ಟಕ್ಕೆ ಸಿಲುಕಿರುವ ಕಾರ್ಮಿಕರಿಗೆ ಪರಿಹಾರ ಮತ್ತು ಪಡಿತರ ಕಿಟ್ ವಿತರಿಸಬೇಕು. ಸಾಮಾಜಿಕ ಭದ್ರತಾ ಯೋಜನೆಗಳನ್ನು ಜಾರಿ ಮಾಡಬೇಕು. ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು. ಕಾರ್ಮಿಕರ ಉದ್ಯೋಗ ಉಳಿಸಿ- ಆರ್ಥಿಕತೆ ರಕ್ಷಿಸಬೇಕು. ಕಾರ್ಮಿಕರ ಕೆಲಸದ ಅವಧಿ ಹೆಚ್ಚಳ ಮಾಡಬಾರದು. ಆರೋಗ್ಯ ಸೇವೆಯಲ್ಲಿ ತೊಡಗಿಸಿಕೊಂಡಿರುವವರಿಗೆ ರಕ್ಷಣೆ ನೀಡಬೇಕು’ ಎಂದು ಒತ್ತಾಯಿಸಿದರು.

ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ಕಾರ್ಯದರ್ಶಿ ಎಂ.ಭೀಮರಾಜ್, ಜಿಲ್ಲಾ ಅಂಗನವಾಡಿ ನೌಕರರ ಸಂಘದ ಸದಸ್ಯೆ ವೆಂಕಟಲಕ್ಷಮ್ಮ, ಸಿಐಟಿಯು ಸದಸ್ಯರಾದ ಕಲ್ಪನಾ, ರಾಮಾಂಜಿ, ನಾಗರಾಜಪ್ಪ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.