ADVERTISEMENT

ಸಾಂಕ್ರಾಮಿಕ ರೋಗ ತಡೆಗೆ ಒತ್ತಾಯ

ಡಿಎಚ್‌ಒಗೆ ರೈತ ಸಂಘ ಸದಸ್ಯರ ಮನವಿ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2019, 15:36 IST
Last Updated 11 ಸೆಪ್ಟೆಂಬರ್ 2019, 15:36 IST
ಸಾಂಕ್ರಾಮಿಕ ರೋಗಗಳ ತಡೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಕೋಲಾರದಲ್ಲಿ ಬುಧವಾರ ಡಿಎಚ್‌ಒ ಡಾ.ಎಸ್‌.ಎನ್‌.ವಿಜಯ್‌ಕುಮಾರ್‌ ಅವರಿಗೆ ಮನವಿ ಸಲ್ಲಿಸಿದರು.
ಸಾಂಕ್ರಾಮಿಕ ರೋಗಗಳ ತಡೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಕೋಲಾರದಲ್ಲಿ ಬುಧವಾರ ಡಿಎಚ್‌ಒ ಡಾ.ಎಸ್‌.ಎನ್‌.ವಿಜಯ್‌ಕುಮಾರ್‌ ಅವರಿಗೆ ಮನವಿ ಸಲ್ಲಿಸಿದರು.   

ಕೋಲಾರ: ಗ್ರಾಮೀಣ ಪ್ರದೇಶದಲ್ಲಿ ಸಾಂಕ್ರಾಮಿಕ ರೋಗಗಳ ತಡೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಇಲ್ಲಿ ಬುಧವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್‌.ಎನ್‌.ವಿಜಯ್‌ಕುಮಾರ್‌ ಅವರಿಗೆ ಮನವಿ ಸಲ್ಲಿಸಿದರು.

‘ವಾತಾವರಣದಲ್ಲಿ ಏರುಪೇರಾಗಿರುವುದರಿಂದ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಸಾಂಕ್ರಾಮಿಕ ರೋಗಗಳು ಕಾಣಿಸಿಕೊಳ್ಳುತ್ತಿವೆ. ಗ್ರಾಮಗಳಲ್ಲಿ ನೈರ್ಮಲ್ಯ ಸಮಸ್ಯೆ ಎದುರಾಗಿದ್ದು, ಡೆಂಗಿ ಹಾಗೂ ಚಿಕೂನ್‌ ಗುನ್ಯಾ ಪ್ರಕರಣ ವರದಿಯಾಗುತ್ತಿವೆ. ಇದರಿಂದ ಜನ ಆತಂಕಗೊಂಡಿದ್ದಾರೆ’ ಎಂದು ಸಂಘಟನೆ ಸದಸ್ಯರು ಹೇಳಿದರು.

‘ಜಿಲ್ಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳ ಸ್ಥಿತಿ ಶೋಚನೀಯವಾಗಿದೆ. ಆಸ್ಪತ್ರೆಗಳಲ್ಲಿ ಮೂಲಸೌಕರ್ಯ ಸಮಸ್ಯೆಯಿಂದ ರೋಗಿಗಳು ಹಾಗೂ ಅವರ ಸಂಬಂಧಿಕರು ತೊಂದರೆ ಅನುಭವಿಸುವಂತಾಗಿದೆ. ಸಾಂಕ್ರಾಮಿಕ ಕಾಯಿಲೆಗಳು ಉಲ್ಭಣಿಸಿರುವುದರಿಂದ ಬಡ ಜನರು ದುಡಿಮೆಯ ಬಹುಪಾಲು ಹಣವನ್ನು ಆಸ್ಪತ್ರೆಗೆ ಖರ್ಚು ಮಾಡುವಂತಾಗಿದೆ’ ಎಂದು ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ತಿಳಿಸಿದರು.

ADVERTISEMENT

‘ರೋಗಿಗಳು ಲಂಚ ಕೊಡದಿದ್ದರೆ ವೈದ್ಯರು ಸೇವೆ ನೀಡಲು ನಿರಾಕರಿಸುತ್ತಾರೆ. ಸರ್ಕಾರದಿಂದ ಔಷಧ ಮತ್ತು ಮಾತ್ರೆ ಪೂರೈಕೆಯಾಗುತ್ತಿದ್ದರೂ ವೈದ್ಯರು ಹೊರಗಿನ ಮಳಿಗೆಗಳಲ್ಲಿ ಔಷಧ, ಮಾತ್ರೆ ಖರೀದಿಸುವಂತೆ ರೋಗಿಗಳಿಗೆ ಚೀಟಿ ಬರೆದು ಕೊಡುತ್ತಿದ್ದಾರೆ. ಸರ್ಕಾರದಿಂದ ಪೂರೈಕೆಯಾದ ಔಷಧ ಮತ್ತು ಮಾತ್ರೆಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ’ ಎಂದು ದೂರಿದರು.

ಪ್ರಾಣದ ಜತೆ ಚೆಲ್ಲಾಟ: ‘ಜಿಲ್ಲೆಯಲ್ಲಿ ಆಂಬುಲೆನ್ಸ್‌ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ತುರ್ತು ಸಂದರ್ಭದಲ್ಲಿ ಆಂಬುಲೆನ್ಸ್‌ ಸೇವೆಗಾಗಿ ಸಹಾಯವಾಣಿಗೆ ಕರೆ ಮಾಡಿದರೆ ಸಿಬ್ಬಂದಿಯು ವಾಹನ ಲಭ್ಯವಿಲ್ಲ ಎಂದು ಹೇಳಿ ನಿರ್ಲಕ್ಷ್ಯ ತೋರುತ್ತಾರೆ. ಹಣದಾಸೆಗೆ ಖಾಸಗಿ ಆಂಬುಲೆನ್ಸ್‌ ಸಂಸ್ಥೆಗಳೊಂದಿಗೆ ಒಳ ಒಪ್ಪಂದ ಮಾಡಿಕೊಂಡಿರುವ ಸಿಬ್ಬಂದಿಯು ಜನರ ಪ್ರಾಣದ ಜತೆ ಚೆಲ್ಲಾಟವಾಡುತ್ತಿದ್ದಾರೆ’ ಎಂದು ಧರಣಿನಿರತರು ಕಿಡಿಕಾರಿದರು.

‘ಗ್ರಾಮಗಳಲ್ಲಿ ರಾಸಾಯನಿಕ ಹೊಗೆ ಸಿಂಪಡಣೆ (ಫಾಗಿಂಗ್‌) ಮಾಡಿಸಬೇಕು. ಸಂಚಾರ ಆರೋಗ್ಯ ವಾಹನದ ಮೂಲಕ ಚಿಕಿತ್ಸೆ ನೀಡಬೇಕು ಮತ್ತು ಕಾಯಿಲೆ ತಡೆ ಬಗ್ಗೆ ಜಾಗೃತಿ ಮೂಡಿಸಬೇಕು. ಆಸ್ಪತ್ರೆಗಳಿಗೆ ಸಕಾಲಕ್ಕೆ ಔಷಧ ಹಾಗೂ ಮಾತ್ರೆ ಪೂರೈಸಬೇಕು. ನಕಲಿ ವೈದ್ಯರಿಗೆ ಕಡಿವಾಣ ಹಾಕಬೇಕು. ನಿಯಮಬಾಹಿರವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ಸರ್ಕಾರಿ ವೈದ್ಯರನ್ನು ಅಮಾನತು ಮಾಡಬೇಕು’ ಎಂದು ಒತ್ತಾಯಿಸಿದರು.

ರೈತ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ್, ಮಹಿಳಾ ಘಟಕದ ಅಧ್ಯಕ್ಷೆ ಎ.ನಳಿನಿ, ಸದಸ್ಯರಾದ ನಾಗೇಶ್, ವೆಂಕಟೇಶಪ್ಪ, ತಿಮ್ಮಣ್ಣ, ರಂಜಿತ್, ಮಂಜುನಾಥ್, ಚಂದ್ರಪ್ಪ, ಶಂಕರ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.